ADVERTISEMENT

ತಾಲ್ಲೂಕು ಕಚೇರಿಗೆ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2012, 6:00 IST
Last Updated 19 ಜುಲೈ 2012, 6:00 IST

ಮದ್ದೂರು: ಉದ್ಯೋಗ ಖಾತ್ರಿ ಯೋಜನೆಯಲ್ಲಿನ ಭ್ರಷ್ಟಾಚಾರ ಹಾಗೂ ಅಸಮರ್ಪಕ ಅನುಷ್ಠಾನ ವಾಗಿದೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಬುಧವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಿಂದ ಮೆರವಣಿಗೆ ಹೊರಟ ಕಾರ್ಯಕರ್ತರು ದಾರಿಯುದ್ದಕ್ಕೂ ಯೋಜನೆಯ ಲೋಪ ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಘೋಷಣೆ ಕೂಗಿದರು. ನಂತರ ತಾಲ್ಲೂಕು ಪಂಚಾಯಿತಿ ಕಚೇರಿಗೆ ಆಗಮಿಸಿ ಧರಣಿ ನಡೆಸಿದರು.

ಸಂಘದ ತಾಲ್ಲೂಕು ಅಧ್ಯಕ್ಷ ಹನುಮೇಶ್ ಮಾತನಾಡಿ, ಇಲ್ಲಿಯವರೆಗೂ ಈ ಸಾಲಿನ ಕ್ರಿಯಾಯೋಜನೆ ರೂಪಿಸಿಲ್ಲ. ಕೂಲಿಕಾರರಿಗೆ ಕೆಲಸ ನೀಡಿಲ್ಲ. ಕಳೆದ ಸಾಲಿನ ಕೂಲಿ ಹಣ ಪಾವತಿಸದೇ ವಂಚಿಸಲಾಗಿದೆ ಎಂದು ದೂರಿದರು.

ಪ್ರಾಂತ ರೈತಸಂಘದ ಕಾರ್ಯದರ್ಶಿ ಟಿ.ಯಶವಂತ್ ಮಾತನಾಡಿ, ತಾಲ್ಲೂಕಿನ ಯಾವುದೇ ಗ್ರಾಮ ಪಂಚಾಯಿತಿಗಳಲ್ಲಿ ಖಾತ್ರಿಯೋಜನೆ ಪಾರದರ್ಶಕವಾಗಿ ನಡೆಯುತ್ತಿಲ್ಲ. ಖಾತ್ರಿ ಯೋಜನೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಯಂತ್ರಗಳ ಮೂಲಕ ಕೆಲಸ ಮಾಡಿಸಿ ಕೂಲಿಕಾರರಿಗೆ ಕೆಲಸ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿದರು.

ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ತಾಲ್ಲೂಕು ಪಂಚಾಯಿತಿ ಇಒ ಶಮಂತ್‌ಕುಮಾರ್ ಅವರು, ಉದ್ರಿಕ್ತ ಕಾರ್ಯಕರ್ತರನ್ನು ಸಮಾಧಾನಗೊಳಿಸಿದರು. ಶೀಘ್ರದಲ್ಲೇ ಕ್ರಿಯಾಯೋಜನೆ ರೂಪಿಸಿ ಕೂಲಿಕಾರರಿಗೆ ಕೆಲಸ ನೀಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಸಂಘದ ಮುಖಂಡರಾದ ವಿಷಕಂಠೇಗೌಡ, ಮಂಚೇಗೌಡ, ಅನಿತಾ, ಶೋಭ, ಶಿವಮ್ಮ, ಕೆಂಪರಾಜು, ಚಿಕ್ಕತಾಯಮ್ಮ, ಮಂಗಳಮ್ಮ, ಬೋರೇಗೌಡ, ಶೋಭ, ಮಹಾಲಿಂಗು ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.