ADVERTISEMENT

ನೀರಿನ ಸಮಸ್ಯೆ: ಖಾಲಿ ಕೊಡ ಪ್ರದರ್ಶಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2013, 5:35 IST
Last Updated 25 ಏಪ್ರಿಲ್ 2013, 5:35 IST

ಕೃಷ್ಣರಾಜಪೇಟೆ: ಕಳೆದ ಒಂದು ವಾರದಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದ್ದು, ಸಂಬಂಧಿಸಿದ ಗ್ರಾಮ ಪಂಚಾಯಿತಿ ಸಿಬ್ಬಂದಿ ಈ ಬಗ್ಗೆ ಗಮನ ಹರಿಸದೆ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ಮಲ್ಲೇನಹಳ್ಳಿ ಗ್ರಾಮಸ್ಥರು ಬುಧವಾರ ಮಾಕವಳ್ಳಿ ಗ್ರಾಮಪಂಚಾಯಿತಿ ಕಚೇರಿಗೆ ಖಾಲಿ ಕೊಡಗಳೊಂದಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.  

ಮಲ್ಲೇನಹಳ್ಳಿ ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಕೊಳವೆ ಬಾವಿಯ ಸಮೀಪವೇ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಕೊಳವೆ ಬಾವಿ ಕೊರೆಸಿರುವುದರಿಂದ ನೀರಿನ ಕೊರತೆ ಉಂಟಾಗಿದೆ. ಈ ಕ್ರಮವು ನಿಯಮ ಬಾಹಿರವಾಗಿದ್ದು, ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ.

ಈ ಬಗ್ಗೆ ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ನೀಡಿ ಪರ್ಯಾಯ ವ್ಯವಸ್ಥೆ ಮಾಡುವಂತೆ ಕೋರಿಕೊಳ್ಳಲಾಗಿತ್ತು. ಆದರೆ ಈ ಬಗ್ಗೆ ಯಾರೂ ತಲೆ ಕೆಡಿಸಕೊಳ್ಳದೆ ಬೇಜವಾಬ್ದಾರಿಯಿಂದ   ನಡೆದುಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಹೇಮಾವತಿ ನದಿಯಿಂದ ಕೃಷ್ಣರಾಜಪೇಟೆ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್‌ಲೈನ್‌ನಿಂದ ಗ್ರಾಮಕ್ಕೆ ಶಾಶ್ವತವಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.