ADVERTISEMENT

ನೀರು ಹರಿಸಲು ರೈತಸಂಘ ಆಗ್ರಹ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2012, 19:50 IST
Last Updated 12 ಡಿಸೆಂಬರ್ 2012, 19:50 IST

ಪಾಂಡವಪುರ: ಹೇಮಾವತಿ ನಾಲಾ ಬಯಲಿನಲ್ಲಿ ಒಣಗುತ್ತಿರುವ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕು ಎಂದು ಒತ್ತಾಯಿಸಿ ಮುಖಂಡ ಕೆ.ಎಸ್.ಪುಟ್ಟಣ್ಣಯ್ಯ ನೇತೃತ್ವದಲ್ಲಿ ರೈತ ಸಂಘದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದರು. ಹೇಮಾವತಿ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ಬತ್ತ, ರಾಗಿ ಬೆಳೆಗಳು ನೀರಿಲ್ಲದೆ ಒಣಗಿ ಹೋಗುತ್ತಿವೆ.

ಆದರೆ ನೀರಾವರಿ ಇಲಾಖೆಯ ಅಧಿಕಾರಿಗಳು ಯಾವ ಕ್ರಮವನ್ನು ಕೈಗೊಳ್ಳದೆ ಬೇಜಾವ್ದಾರಿತನ ತೋರುತ್ತಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಆ ಭಾಗದ ರೈತರು ಆತ್ಮಹತ್ಯೆಯ ದಾರಿ ಹಿಡಿಯಬೇಕಾಗುತ್ತದೆ. ನೀರು ಹರಿಸಿ, ಇಲ್ಲ ನಮ್ಮನ್ನು ಜೈಲಿಗೆ ಕಳುಹಿಸಿ ಎಂದು ರೈತರು ಪಟ್ಟುಹಿಡಿದರು.

ಕೆ.ಎಸ್.ಪುಟ್ಟಣ್ಣಯ್ಯ ಮಾತನಾಡಿ, ಕೆಆರ್‌ಎಸ್ ಜಲಾಶಯದಿಂದ ವಿಶ್ವೇಶ್ವರಯ್ಯ ನಾಲೆಗಳಿಗೆ ನಿಗದಿತವಾಗಿ ನೀರು ಹರಿಸುವಂತೆ ಹೇಮಾವತಿ ನಾಲೆಗಳಿಗೂ ಹರಿಸಬೇಕಾಗಿದೆ ಎಂದು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಾಲಸುಬ್ರಹ್ಮಣ್ಯ, ನಾಲೆಗಳಿಗೆ ನೀರು ಹರಿಸುವ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ  ತಂದು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಹಿನ್ನಲೆಯಲ್ಲಿ ಪ್ರತಿಭಟನೆ ಅಂತ್ಯಗೊಳಿಸಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯ ಎ.ಎಲ್.ಕೆಂಪೂಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ಕೆ.ಗೌಡೇಗೌಡ, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಹರವು ಪ್ರಕಾಶ್, ಕಾರ್ಯದರ್ಶಿ ಅಮೃತಿ ರಾಜಶೇಖರ್, ಸಂಘಟನಾ ಕಾರ್ಯದರ್ಶಿ ಬಿ.ಟಿ.ಮಂಜುನಾಥ್, ಮುಖಂಡರಾದ ಎಚ್.ಎನ್.ವಿಜಯಕುಮಾರ್, ಉಮಾಶಂಕರ್, ದಸಂಸ ಮುಖಂಡ ಪ್ರಕಾಶ್ ಬ್ಯಾಡರಹಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.