ADVERTISEMENT

ಬೇಡಿಕೆ ಈಡೇರಿಕೆಗೆ ಮೂಟೆ ಕಾರ್ಮಿಕರ ಆಗ್ರಹ

​ಪ್ರಜಾವಾಣಿ ವಾರ್ತೆ
Published 8 ಜನವರಿ 2011, 8:35 IST
Last Updated 8 ಜನವರಿ 2011, 8:35 IST

ಮಂಡ್ಯ: ಯಶಸ್ವಿನಿ ಆರೋಗ್ಯ ವಿಮೆ ಸೇವೆಯ ವಿಸ್ತರಣೆ, ಮೂಟೆ ಕಾರ್ಮಿಕರಿಗೂ ಕಲ್ಯಾಣ ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಪಡಿಸಿ ಮೂಟೆ ಕಾರ್ಮಿಕರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಮಹಿಳೆಯರೂ ಸೇರಿದಂತೆ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಲ್ಲಿ ಗುಂಪುಗೂಡಿದ ಮೂಟೆ ಕಾರ್ಮಿಕರು ಹೆದ್ದಾರಿ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಮೆರವಣಿಗೆ ತೆರಳಿ ಅಲ್ಲಿ ತಮ್ಮ ಹಕ್ಕುಗಳ ಬಗೆಗೆ ಧರಣಿ ನಡೆಸಿದರು.

ಕೇಂದ್ರ ಸರ್ಕಾರ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ರೂಪಿಸಿರುವ ಕಾಯ್ದೆಯನ್ನು ಜಾರಿ ಮಾಡಲು ಕ್ರಮ ಕೈಗೊಳ್ಳಬೇಕು. ಎಲ್ಲ ರೀತಿಯ ಲೋಡಿಂಗ್ ಮತ್ತು ಅನ್ ಲೋಡಿಂಗ್ ಕಾರ್ಮಿಕರಿಗೆ ಇಎಸ್‌ಐ ಮತ್ತು ಪಿಎಫ್ ಸೌಲಭ್ಯ ಒದಗಿಸಬೇಕು ಎಂದರು. ವರ್ಷ ಪೂರ್ತಿ ಕೆಲಸ ಗೋದಾಮುಗಳಲ್ಲಿ ಕಾರ್ಮಿಕರನ್ನು ಕಾಯಂ ಮಾಡಿಕೊಳ್ಳಬೇಕು. ಕಾರ್ಮಿಕರಿಗೆ ಮನೆ ನಿರ್ಮಿಸಿಕೊಳ್ಳಲು ಸಹಾಯಧನ ನೀಡಬೇಕು ಎಂದು ಆಗ್ರಹಪಡಿಸಿದರು.

ಕೇಂದ್ರ ತರಲು ಉದ್ದೇಶಿಸಿರುವ ಹೊಸ ಪಡಿತರ ನೀತಿಯನ್ನು ಕೈಬಿಡಬೇಕು ಮತ್ತು ಎಪಿಎಲ್ ಕಾರ್ಡುದಾರರು ಸೇರಿದಂತೆ ಸಾರ್ವತ್ರಿಕ ಪಡಿತರ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಪಡಿಸಿದರು. ಈ ಎಲ್ಲ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಲಾಯಿತು. ಪ್ರತಿಭಟನೆಯ ಮುಂಚೂಣಿಯಲ್ಲಿ ಜನಪರ ವೇದಿಕೆಯ ಡಾ. ವಾಸು, ಕೃಷ್ಣಪ್ರಕಾಶ್, ಮುತ್ತುರಾಜು, ವರದರಾಜು, ಕುಮಾರ್, ಪ್ರಕಾಶ್ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.