ADVERTISEMENT

ಭಾರತೀ ಎಜುಕೇಷನ್ ಟ್ರಸ್ಟ್ : ಸಂಭ್ರಮ ಮಹೋತ್ಸವ ನಾಳೆಯಿಂದ

​ಪ್ರಜಾವಾಣಿ ವಾರ್ತೆ
Published 7 ಜುಲೈ 2012, 4:30 IST
Last Updated 7 ಜುಲೈ 2012, 4:30 IST

ಭಾರತೀನಗರ: ನಗರದ ಭಾರತೀ ಎಜುಕೇಷನ್ ಟ್ರಸ್ಟ್‌ನ ಸುವರ್ಣ ಮಹೋತ್ಸವದ ಅಂಗವಾಗಿ ಜು.8ರಿಂದ 10ರವೆರಗೆ ಮೂರು ದಿನಗಳ ಕಾಲ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿಇಟಿ ಕಾರ್ಯನಿರ್ವಾಹಕ ಟ್ರಸ್ಟಿ ಮಧು ಜಿ.ಮಾದೇಗೌಡ ತಿಳಿಸಿದರು.

ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜು.8ರಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸುವರ್ಣಸೌಧ ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವ ಡಾ.ಎಂ.ವೀರಪ್ಪಮೊಯ್ಲಿ ಸುವರ್ಣ ಮಹೋತ್ಸವದ ಸ್ಮರಣ ಸಂಚಿಕೆ ಹಾಗೂ ಸಂಸ್ಥೆಯ ಅಧ್ಯಕ್ಷ ಜಿ.ಮಾದೇಗೌಡ ಕುರಿತ ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಜಿ.ಮಾದೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

 ಯುಜಿಸಿ ಅಧ್ಯಕ್ಷ ಪ್ರೊ.ವೇದಪ್ರಕಾಶ್ ಅವರು ಈಜುಕೊಳ ಮತ್ತು ಒಳಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಸಂಸದ ಎನ್.ಚಲುವರಾಯಸ್ವಾಮಿ, ಶಾಸಕರಾದ ಕಲ್ಪನಾ ಸಿದ್ದರಾಜು, ಬಿ.ರಾಮಕೃಷ್ಣ, ವಿಮಲಾಗೌಡ, ಪಿ.ಎಂ.ನರೇಂದ್ರಸ್ವಾಮಿ, ಎಂ.ಮರಿತಿಬ್ಬೇಗೌಡ, ಡಿ.ಎಸ್.ವೀರಯ್ಯ, ಜಿಲ್ಲಾ ಪಂಚಾಯತಿ ಅಧ್ಯಕ್ಷ ಸುರೇಶ್, ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಇಂದ್ರಾಣಿ, ಭಾರತೀನಗರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಾ ಸಿದ್ದಪ್ಪ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಜು.9ರಂದು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಅದೇ ದಿನ ಮಧ್ಯಾಹ್ನ ಕ್ರೀಡಾ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಸರ್ವಧರ್ಮ ಸಮ್ಮೇಳನ ನಡೆಯಲಿದೆ. ಆದಿಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಲಿದ್ದಾರೆ.

ಜು.10ರಂದು ಸಮಾರೋಪ ಸಮಾರಂಭ ಹಾಗೂ ಜಿ.ಮಾದೇಗೌಡ ಪ್ರತಿಷ್ಠಾನ ವತಿಯಿಂದ ಸಮಾಜಸೇವೆ ಮತ್ತು ಸಾವಯವ ಕೃಷಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಮಾಜ ಸೇವಾ ಪ್ರಶಸ್ತಿಗೆ ಭಾಜನರಾಗಿರುವ ಶಕ್ತಿಗ್ರೂಪ್ ಆಫ್ ಇಂಡಸ್ಟೀಸ್‌ನ ಅಧ್ಯಕ್ಷ ಡಾ.ಮಹಾಲಿಂಗಂ, ಸಾವಯವ ಕೃಷಿ ಪ್ರಶಸ್ತಿಗೆ ಆಯ್ಕೆಯಾಗಿರುವ ವನಜಾ ರಾಮಪ್ರಸಾದ್, ನಿವೃತ್ತ ಲೋಕಾಯುಕ್ತ ಸಂತೋಷ್‌ಹೆಗ್ಡೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡೀಸ್, ಚಲನಚಿತ್ರ ನಟ ಅಂಬರೀಷ್, ಶಾಸಕ ಡಿ.ಕೆ.ಶಿವಕುಮಾರ್ ಹಾಗೂ ಮಂಡ್ಯ ಜಿಲ್ಲೆಯ ಎಲ್ಲ ಶಾಸಕರು ಭಾಗವಹಿಸಲಿದ್ದಾರೆ ಎಂದರು.

ಮಧ್ಯಾಹ್ನ 1ಕ್ಕೆ ಸುಮಾರು 50 ಸಾವಿರ ಮಂದಿಗೆ ಸಾಮೂಹಿಕ ಭೋಜನ ಏರ್ಪಡಿಸಲಾಗಿದೆ. ಸುವರ್ಣ ಮಹೋತ್ಸವದ ಅಂಗವಾಗಿ ಶೈಕ್ಷಣಿಕ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ. ಮೂರು ದಿನ ಸಂಜೆ ಚಲನಚಿತ್ರ ಹಾಗೂ ಕಿರುತೆರೆ ನಟ ನಟಿಯರು, ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿಗಳಾದ ಬಿ.ಎಂ.ನಂಜೇಗೌಡ, ಸಿದ್ದೇಗೌಡ ಸೇರಿದಂತೆ ಟ್ರಸ್ಟಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.