ADVERTISEMENT

ರೈಲ್ವೆ ನಿಲ್ದಾಣ ಮೇಲು ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಕ್ರಮ:ಸಚಿವ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2012, 9:37 IST
Last Updated 27 ನವೆಂಬರ್ 2012, 9:37 IST

ಪಾಂಡವಪುರ: ಪಾಂಡವಪುರ ರೈಲ್ವೆ ನಿಲ್ದಾಣದ ಮೇಲು ಸೇತುವೆಯ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪಿ.ಯೋಗೇಶ್ವರ್ ಭರವಸೆ ನೀಡಿದರು.

ತಾಲ್ಲೂಕಿನ ವಿವಿಧ ಕಾಮಗಾರಿಗಳಿಗೆ ಮತ್ತು ಕಟ್ಟಡಗಳ ಶಂಕುಸ್ಥಾಪನೆಗೆ ಸೋಮವಾರ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಚಾಲನೆ ನೀಡಿ ನಂತರ ಪಾಂಡವಪುರ ರೈಲ್ವೆ ನಿಲ್ದಾಣದ ಮೇಲು ಸೇತುವೆಯನ್ನು ವೀಕ್ಷಿಸಿ ಅವರು ಮಾತನಾಡಿದರು.
ಬಹಳ ವರ್ಷಗಳಿಂದ  ಮೇಲುಸೇತುವೆ ಕಾಮಗಾರಿ ನೆನಗುದಿಗೆ ಬಿದ್ದಿದ್ದು, ನಂತರ ಕಾಮಗಾರಿ ಪ್ರಾರಂಭಗೊಂಡಿದೆ. ಬಹುತೇಕ ಮೇಲು ಸೇತುವೆ ನಿರ್ಮಾಣದ ಹಂತದಲ್ಲಿದ್ದು, ಕಾಮಗಾರಿ ಪೂರ್ಣಗೊಳ್ಳಲು ಇನ್ನು ಹಣದ ಅಗತ್ಯವಿರುವುದು ಗೊತ್ತಾಗಿದೆ.

ಸಂಬಂಧಪಟ್ಟ ಲೋಕೋಪಯೋಗಿ ಎಂಜಿನಿಯರ್ ಅವರಿಗೆ ಕಾಮಗಾರಿಯ ಅಂದಾಜು ವೆಚ್ಚ ತಯಾರು ಮಾಡಲು ಸೂಚಿಸಲಾಗಿದೆ. ಮುಖ್ಯಮಂತ್ರಿಗಳ ಜತೆ ಮಾತನಾಡಿ ಅಂದಾಜು ವೆಚ್ಚವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಮೋದನೆ ಪಡೆಯಲಾಗುವುದು ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಅವರಣದಲ್ಲಿ ಒಟ್ಟು ರೂ. 725.13 ಲಕ್ಷದ 12 ಕಾಮಗಾರಿಗಳಿಗೆ, ಕೆನ್ನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ.1242.75 ಲಕ್ಷಗಳ 3 ಕಾಮಗಾರಿಗಳಿಗೆ, ಅರಳಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. 3277.36 ಲಕ್ಷದ ಕಾಮಗಾರಿಗಳಿಗೆ, ಬನ್ನಂಗಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. 46.00 ಲಕ್ಷದ 2 ಕಾಮಗಾರಿಗಳಿಗೆ ಹಾಗೂ ಗುಮ್ಮನಹಳ್ಳಿ ಗ್ರಾಮ ಪಂಚಾಯಿತಿ ರಾಗಿಮುದ್ದನಹಳ್ಳಿ ವ್ಯಾಪ್ತಿಯಲ್ಲಿ ರೂ.19.00 ಲಕ್ಷದ 2 ಕಾಮಗಾರಿಗಳಿಗೆ ಚಾಲನೆ ದೊರೆಯಿತು.

ಅಧ್ಯಕ್ಷತೆಯನ್ನು ಶಾಸಕ ಸಿ.ಎಸ್.ಪುಟ್ಟರಾಜು ವಹಿಸಿದ್ದರು. ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಸಿ.ಜಯಣ್ಣ, ತಹಶೀಲ್ದಾರ್ ಬಿ.ಸಿ.ಶಿವಾನಂದಮೂರ್ತಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜು, ಜಿಲ್ಲಾ ಪಂಚಾಯಿತಿ ಸದಸ್ಯರು, ತಾಲ್ಲೂಕು ಪಂಚಾಯಿತಿ ಸದಸ್ಯರು, ಗ್ರಾ. ಪಂ. ಸದಸ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.