ADVERTISEMENT

ಸಭೆಗೆ ಅಧಿಕಾರಿಗಳ ಗೈರು: ಆಕ್ರೋಶ

​ಪ್ರಜಾವಾಣಿ ವಾರ್ತೆ
Published 18 ಜುಲೈ 2012, 3:30 IST
Last Updated 18 ಜುಲೈ 2012, 3:30 IST

ಕೃಷ್ಣರಾಜಪೇಟೆ: ತಾಲ್ಲೂಕು ಪಂಚಾಯಿತಿಯ ಪ್ರಗತಿ ಪರಿಶೀಲನಾ ಸಭೆಗಳಿಗೆ ಹಾಜರಾಗಿ ಜನಪ್ರತಿನಿಧಿಗಳಿಗೆ ಸೂಕ್ತ ಮಾಹಿತಿ ನೀಡಬೇಕಾದ ಅಧಿಕಾರಿಗಳು ಸಭೆಗೆ ಗೈರುಹಾಜರಾಗುವ ಮೂಲಕ ಚುನಾಯಿತ ಪ್ರತಿನಿಧಿಗಳಿಗೆ ಅಗೌರವ ತೋರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆದ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಡೆಯಿತು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪ್ರಭಾವತಿ ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಬಹುತೇಕ ಸದಸ್ಯರು ಮೇಲಿನಂತೆ ಆಕ್ರೋಶ ವ್ಯಕ್ತಪಡಿಸಿದರು.

 ವಿವಿಧ ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ನಡೆಸುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಆ ಭಾಗದ ಜನಪ್ರತಿನಿಧಿಗಳಿಗೆ ಅಗತ್ಯ ಮಾಹಿತಿಯನ್ನು ಸಹ ನೀಡುತ್ತಿಲ್ಲ. ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಹ ಜನಪ್ರತಿನಿಧಿಗಳಿಗೆ ಸೂಕ್ತ ಗೌರವ ನೀಡುತ್ತಿಲ್ಲ ಎಂಬ ವಿಷಯ ಸಭೆಯಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಯಿತು. ಜನತೆ ಮತ್ತು ಜಾನುವಾರುಗಳಿಗೆ ಅನುಕೂಲವಾಗುವಂತೆ ತಾಲ್ಲೂಕಿನ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳಲು ಸಭೆಯು ಒಕ್ಕೊರಲಿನಿಂದ ತೀರ್ಮಾನಿಸಿತು.


ಉಪಾಧ್ಯಕ್ಷ ರಾಮೇಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಮಾಂಬಳ್ಳಿ ಅಶೋಕ್, ವಿಪಕ್ಷ ಮುಖಂಡ ರವೀಂದ್ರಬಾಬು, ಪಶು ವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಕೃಷ್ಣೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಬಿ.ಪುಟ್ಟಸ್ವಾಮಿ ಗೌಡ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ಮಾಹಿತಿ ನೀಡಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT