ADVERTISEMENT

ಸಿಎಂ ಮನೆ ಮುಂದೆ ತಮಟೆ ಚಳವಳಿ ನಾಳೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2012, 6:25 IST
Last Updated 6 ಜುಲೈ 2012, 6:25 IST

ಮಳವಳ್ಳಿ: ಸರ್ಕಾರವು ಕೂಡಲೇ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿ ಜು.7 ರಂದು ಮುಖ್ಯಮಂತ್ರಿ ಮನೆಮುಂದೆ ತಮಟೆ ಚಳವಳಿ ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಾದಿಗ ಸಮುದಾಯ ಭಾಗವಹಿಸಬೇಕು ಎಂದು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಪಾವಗಡ ಶ್ರೀರಾಮ್ ಮನವಿ ಮಾಡಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನ್ಯಾ.ಎ.ಜೆ.ಸದಾಶಿವ ಆಯೋಗ ಕಳೆದ ಆರು ವರ್ಷಗಳಿಂದ ರಾಜ್ಯದಾದ್ಯಂತ ಅಧ್ಯಯನ ಮಾಡಿ ವರದಿ ತಯಾರಿಸಿದ್ದು, ಸರ್ಕಾರ ಆಯೋಗದ ವರದಿಯನ್ನು ಅನುಷ್ಠಾನಗೊಳಿಸಿದರೆ ಸೌಲಭ್ಯವಂಚಿತ ಮಾದಿಗ ಸಮುದಾಯಕ್ಕೆ ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ವರದಿ ಅನುಷ್ಠಾನಗೊಳ್ಳಬೇಕಾದರೆ ರಾಜ್ಯದ ಎಲ್ಲ ಭಾಗಗಳಲ್ಲಿಯೂ ಹೋರಾಟ ಅನಿವಾರ್ಯವಾಗಿದೆ ಎಂದರು. 

ಕೆಲವರು ಈ ವರದಿಯನ್ನು ವಿರೋಧಿಸುತ್ತಿರುವುದು ಸರಿಯಲ್ಲ, ಹೀಗೆ ವಿರೋಧಿಸುತ್ತಿರುವವರು ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ವಿರೋಧಿಸಿದಂತೆ ಎಂದು ಹೇಳಿದರು.
ಬ್ಯಾಕ್‌ಲಾಗ್ ಹುದ್ದೆಗಳನ್ನು ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯ ಆಧಾರದ ಮೇಲೆ ಹಂಚಿಕೆಯಾಗಬೇಕು, ಮಾದಿಗ ಸಮಾಜಕ್ಕೆ ಪ್ರತ್ಯೇಕ ನಿಗಮ ಮಂಡಳಿ ರಚಿಸಬೇಕು, ಸ್ಲಂ ನಿವಾಸಿಗಳಿಗೆ ಉಚಿತ ನಿವೇಶನ ನೀಡಬೇಕು, ಗುತ್ತಿಗೆ ಪೌರಕಾರ್ಮಿಕರ ಪದ್ಧತಿ ರದ್ದುಗೊಳಿಸಿ ಕಾಯಂಗೊಳಿಸಬೇಕು ಎಂದು ಮನವಿ ಮಾಡಿದರು.

ಮಾದಿಗ ದಂಡೋರ ಮಾದಿಗ ಹೋರಾಟ ಸಮಿತಿ ರಾಜ್ಯ ಘಟಕದ ಕಾರ್ಯದರ್ಶಿ ಕೆ.ಬಿ.ನರಸಿಂಹ, ವಕ್ತಾರ ಬಿ.ಜಿ.ಸಾಗರ್, ವಕೀಲರ ಘಟಕದ ಮುತ್ತುರಾಜು, ಯುವಸೇನೆಯ ಉಮೇಶ್‌ಮಾದಿಗ ಇದ್ದರು.

ಜನಸ್ಪಂದನ ಕಾರ್ಯಕ್ರಮ ನಾಳೆ
ಮಳವಳ್ಳಿ ತಾಲ್ಲೂಕು ಆಡಳಿತದ ವತಿಯಿಂದ ನಡೆಯುವ ಜನಸ್ಪಂದನ ಕಾರ್ಯಕ್ರಮ ಜು.7 ರಂದು ತಾಲ್ಲೂಕಿನ ಬಿ.ಜಿ.ಪುರ ಹೋಬಳಿಯ ದ್ಯಾವಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ.

ಬಿ.ಜಿ.ಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ.

ತಾಲ್ಲೂಕು ಮಟ್ಟದ ಎಲ್ಲ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸಾರ್ವಜನಿಕರು ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.