ADVERTISEMENT

ಯು.ಪಿ ರೈತರ ಹತ್ಯೆ ಖಂಡಿಸಿ ಪ್ರತಿಭಟನೆ

ಜೆ.ಸಿ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ರಾಷ್ಟ್ರೀಯ ಹೆದ್ದಾರಿ ತಡೆದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2021, 12:50 IST
Last Updated 4 ಅಕ್ಟೋಬರ್ 2021, 12:50 IST
ಉತ್ತರ ಪ್ರದೇಶದ ಹಿಂಸಾಚಾರ ಹಾಗೂ ರೈತರ ಸಾವು ಘಟನೆ ಖಂಡಿಸಿ ವಿವಿಧ ಸಂಘಟನೆಗಳ ಮುಖಂಡರು ಸೋಮವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು
ಉತ್ತರ ಪ್ರದೇಶದ ಹಿಂಸಾಚಾರ ಹಾಗೂ ರೈತರ ಸಾವು ಘಟನೆ ಖಂಡಿಸಿ ವಿವಿಧ ಸಂಘಟನೆಗಳ ಮುಖಂಡರು ಸೋಮವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು   

ಮಂಡ್ಯ: ಉತ್ತರಪ್ರದೇಶದಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರ ಬೆಂಗಾವಲು ಪಡೆಯ ವಾಹನ ಹತ್ತಿಸಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಮುಖಂಡರು ನಗರದ ಜೆ.ಸಿ.ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಸಂಜಯ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಘಟನೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಚಿವರ ಪುತ್ರ ಕಾರು ಚಾಲನೆ ಮಾಡುತ್ತಿದ್ದ ಎಂಬ ಮಾಹಿತಿ ಇದೆ. ಇಂತಹ ದಾರುಣ ಹತ್ಯೆ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆಯಲ್ಲಿ 8 ಜನರು ಮೃತಪಟ್ಟಿದ್ದಾರೆ, ಅವರಲ್ಲಿ ನಾಲ್ವರು ರೈತರಿದ್ದಾರೆ. ಘಟನೆಗೆ ಕಾರಣಕರ್ತರಾದವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಉತ್ತರ ಪ್ರದೇಶದಲ್ಲಿ ಹಲವು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ, ಕೇಂದ್ರ ಸರ್ಕಾರದ ರೈತ ವಿರೋಧಿ, ಕೃಷಿ ವಿರೋಧಿ ಕಾಯ್ದೆಗಳ ವಿರುದ್ಧ ಕಳೆದ ಹತ್ತು ತಿಂಗಳಿಂದ ಶಾಂತಿಯುತವಾಗಿ ನಡೆಯುತ್ತಿರುವ ಹೋರಾಟವನ್ನು ಮಾತುಕತೆಯ ಮೂಲಕ ಎದುರಿಸಲು ಆಗದೆ ಈ ರೀತಿಯ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ ಆರೋಪಿಸಿದರು.

ADVERTISEMENT

ಘಟನೆಗೆ ಕಾರಣಕರ್ತರಾದವರ ಮೇಲೆ ಕೊಲೆ ಪ್ರಕರಣಗಳನ್ನು ದಾಖಲಿಸಬೇಕು. ಕೇಂದ್ರ ಸರ್ಕಾರದ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ರಾಜೀನಾಮೆ ಪಡೆಯಬೇಕು. ಹತ್ಯೆಯಾದ ನಾಲ್ವರು ರೈತರಿಗೆ ತಲಾ ₹ 1 ಕೋಟಿ ಪರಿಹಾರ ಘೋಷಣೆ ಮಾಡಬೇಕು. ಇಲ್ಲದಿದ್ದರೆ ದೇಶದಾದ್ಯಂತ ರೈತ ಸಂಘಟನೆಗಳು ಉಗ್ರವಾಗಿ ಪ್ರತಿಭಟನೆ ನಡೆಸಲಿವೆ ಎಂದು ಎಚ್ಚರಿಕೆ ನೀಡಿದರು.

ಕೇಂದ್ರ ಗೃಹಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ಕೆಲವು ದಿನಗಳ ಹಿಂದೆ, ನಾನು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಬೆದರಿಕೆ ಹಾಕಿದ್ದರು. ಈಗ ವಾಹನ ಹತ್ತಿಸಿರುವುದನ್ನು ನೋಡಿದರೆ ಬೇಕೆಂದೇ ಈ ರೀತಿ ಮಾಡಿದ್ದಾರೆ. ಕೂಡಲೇ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.

ರೈತರಿಗೆ ಮರಣ ಶಾಸನವಾಗಿರುವ ಮೂರು ಕೃಷಿ ಕಾಯ್ದೆಗಳ ರದ್ದತಿಗಾಗಿ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ರೈತರ ಮೇಲೆ ಬಲಪ್ರಯೋಗ ಮಾಡುತ್ತಿದ್ದು ರೈತರ ಹತ್ಯೆ ಮಾಡುತ್ತಿದೆ. ದೇಶಕ್ಕೆ ಅನ್ನ ನೀಡುವ ರೈತರ ಮೇಲೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ್ಲವಾಗಿದೆ. ರೈತರನ್ನು ಅತ್ಯಂತ ನಿಕೃಷ್ಟವಾಗಿ ನೋಡುತ್ತಿದ್ದಾರೆ. ಆದರೂ ರೈತರ ಹೋರಾಟ ನಿಲ್ಲುವುದಿಲ್ಲ, ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯುವವರೆಗೂ ರೈತರು ಹೋರಾಟ ಮುಂದುವರಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಜೆ.ಸಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ತಡೆಯಲು ಮುಂದಾದ ಪೊಲೀಸರ ವಿರುದ್ಧ ಪ್ರತಿಭಟನಾಕಾರರು ಮಾತಿನ ಚಕಮಕಿ ನಡೆಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್‌.ಕೆಂಪೂಗೌಡ, ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಪುಟ್ಟಮಾದು, ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಮಹಿಳಾ ಮುನ್ನಡೆಯ ಪೂರ್ಣಿಮಾ, ಜ್ಯೋತಿ, ಮುಖಂಡರಾದ ಕೃಷ್ಣೇಗೌಡ, ಬೊಮ್ಮೇಗೌಡ, ಎಂ.ಎಸ್.ವಿಜಯಕುಮಾರ್, ಸೌಮ್ಯಾ ಹಲ್ಲೆಗೆರೆ ಹರೀಶ್, ಎಂ.ಸಿದ್ದರಾಜು, ಸಿ.ಎಂ.ದ್ಯಾವಪ್ಪ ಭಾಗವಹಿಸಿದ್ದರು.

*******

ಪ್ರಾಣ ತೆಗೆಯುತ್ತಿರುವ ಬಿಜೆಪಿ: ಸಿಆರ್‌ಎಸ್‌

ಮಂಡ್ಯ: ‘ಉತ್ತರ ಪ್ರದೇಶದ ರೈತರ ಹತ್ಯಾಕಾಂಡ ಅತ್ಯಂತ ಖಂಡನೀಯ. ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದು ರೈತರ ಪ್ರಾಣ ತೆಗೆಯುವ ಕೆಲಸ ಮಾಡುತ್ತಿದೆ’ ಎಂದು ಕಾಂಗ್ರೆಸ್ ಮುಖಂಡ ಎನ್‌.ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾನಿರತ ರೈತರ ಮೇಲೆ ವಾಹನ ಹತ್ತಿಸಿ ಹತ್ಯೆ ಮಾಡಿರುವುದು ಸಂವಿಧಾನ ವಿರೋಧಿ ಚಟುವಟಿಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಇಡೀ ದೇಶವೇ ಬಿಜೆಪಿ ದುಬಾರಿ ಸರ್ಕಾರದ ಅಂತ್ಯವನ್ನು ಎದುರು ನೋಡುತ್ತಿದೆ. ಶೀಘ್ರದಲ್ಲೇ ಭಾರತೀಯ ಸಹೋದರ ಸಹೋದರಿಯರು ದುಬಾರಿ ಬಿಜೆಪಿ ಸರ್ಕಾರದ ಹಿಂಬಾಲಕರ ಬಾಲ ಕತ್ತರಿಸುತ್ತಾರೆ ಎಂದು ಆರೋಪಿಸಿದ್ದಾರೆ.

ಉತ್ತರ ಪ್ರದೇಶ ಪೊಲೀಸರ ನಡವಳಿಕೆ ನಾಗರಿಕ ಸಮಾಜ ತಲೆತಗ್ಗಿಸುವಂತಿದೆ. ಹತ್ಯಾಕಾಂಡ ನಡೆದ ನಂತರ ರೈತ ಕುಟುಂಬಗಳನ್ನು ಭೇಟಿ ಮಾಡಲು ಹೋದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಂಕಾ ಗಾಂಧಿ ಅವರನ್ನು ಅಕ್ರಮವಾಗಿ ಬಂಧಿಸಿರುವುದು ಖಂಡನೀಯ. ಬಿಜೆಪಿ ಸರಕಾರ ರೈತರ ಹಾಗೂ ಬಡಜನರ ವಿರೋಧಿ ಎಂಬುದನ್ನು ಪದೇಪದೇ ಸಾಬೀತು ಪಡಿಸುತ್ತಿದೆ. ಸಾರ್ವಜನಿಕರು ಇದನ್ನು ಅರ್ಥ ಮಾಡಿಕೊಂಡು ಸರಿಯಾದ ಪಾಠ ಕಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.