ನಾಗಮಂಗಲ: ಆದಿಚುಂಚನಗಿರಿಯಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ಕಾಲಭೈರವೇಶ್ವರ ಸ್ವಾಮಿಗೆ ಸುವರ್ಣ ಕವಚ ಅಲಂಕಾರ ಮತ್ತು ಗಂಗಾಧರೇಶ್ವರ ಸ್ವಾಮಿಗೆ ರಜತ ನಾಗಾಭರಣ ಅಲಂಕಾರದೊಂದಿಗೆ ವಿಶೇಷ ಪೂಜಾ ಕಾರ್ಯಕ್ರಮ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರೆವೇರಿತು.
ಮಠ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಪೂಜೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ರಾತ್ರಿ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಹೂವಿನ ಪಲ್ಲಕ್ಕಿ ಉತ್ಸವ ಮತ್ತು ಸ್ವಾಮೀಜಿ ಅವರ ಮುತ್ತಿನ ಪಲ್ಲಕ್ಕಿ ಉತ್ಸವಗಳು ಸಂಭ್ರಮದಿಂದ ಜರುಗಿದವು. ಭಕ್ತರು ಕಾಲಭೈರವೇಶ್ವರ ಸ್ವಾಮಿ ಮತ್ತು ಸ್ವಾಮೀಜಿ ಅವರ ಉತ್ಸವವನ್ನು ಹೊತ್ತು ಕ್ಷೇತ್ರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಕಾಲಭೈರವೇಶ್ವರ ಮತ್ತು ಗಂಗಾಧರೇಶ್ವರ ಸ್ವಾಮಿ ದೇವಾಲಯಗಳಲ್ಲಿ ಬಣ್ಣಬಣ್ಣದ ಹೂವುಗಳು ಮತ್ತು ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸಲಾಗಿತ್ತು.
ಇಂದು ಸರ್ವಧರ್ಮ ಸಮ್ಮೇಳನ:
ಆದಿಚುಂಚನಗಿರಿ ಜಾತ್ರೆಯ ಅಂಗವಾಗಿ ಮಠದ ಬಿ.ಜಿ.ಎಸ್ ಸಭಾಂಗಣದಲ್ಲಿ ಮಾ. 13ರಂದು ಸಂಜೆ 6.30ಕ್ಕೆ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಸರ್ವಧರ್ಮ ಸಮ್ಮೇಳನ, ರಾತ್ರಿ 8ಕ್ಕೆ ಕಾಲಭೈರವೇಶ್ವರ ಸ್ವಾಮಿ ತಿರುಗಣಿ ಉತ್ಸವ, 9ಕ್ಕೆ ಪುಷ್ಕರಿಣಿಣಿಯಲ್ಲಿ ತೆಪ್ಪೋತ್ಸವ ಜರುಗಲಿದ್ದು, ರಾತ್ರಿ 9.30ರಿಂದ ವಿವಿಧೆಡೆ ಪೌರಾಣಿಕ ನಾಟಕಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.