ಮಳವಳ್ಳಿ: ‘ಸಹಕಾರ ಸಂಘಗಳ ಮೂಲಕ ಸದಸ್ಯರು ತಾವು ಪಡೆದ ಸಾಲವನ್ನು ಸಮರ್ಪಕವಾಗಿ ಸಕಾಲದಲ್ಲಿ ಮರುಪಾವತಿ ಮಾಡಿದಲ್ಲಿ ಸಂಘ ಅಭಿವೃದ್ಧಿ ಹೊಂದಲು ಸಾಧ್ಯ’ ಎಂದು ಹಿಟ್ಟನಹಳ್ಳಿಕೊಪ್ಪಲು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಎಚ್.ಬಿ.ಬಸವೇಶ್ ಅಭಿಪ್ರಾಯಪಟ್ಟರು.
ಸಂಘದ ಆವರಣದಲ್ಲಿ ಶನಿವಾರ ನಡೆದ 2023-24ನೇ ಸಾಲಿನ ಸದಸ್ಯರ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಸಹಕಾರ ಸಂಘದಲ್ಲಿ ಸಾಲ ಪಡೆದ ಸದಸ್ಯರು ನಿಗದಿತ ಅವಧಿಯಲ್ಲಿ ಮರು ಪಾವತಿಸುವ ಮೂಲಕ ಸಂಘದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅನೇಕ ಸೌಲಭ್ಯಗಳನ್ನು ನೀಡಿ ಸದಸ್ಯರ ಹಿತಕಾಯುವ ಕೆಲಸ ಮಾಡಲಾಗುತ್ತಿದೆ. ಸಹಕಾರ ಸಂಘಗಳು ಗ್ರಾಮೀಣ ಭಾಗದ ಉಸಿರಾಗಿದ್ದು ಅವುಗಳನ್ನು ಉಳಿಸಿ, ಬೆಳೆಸಲು ನಾವೆಲ್ಲರೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕಿದೆ’ ಎಂದು ಹೇಳಿದರು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೊನ್ನೇಗೌಡ ವಾರ್ಷಿಕ ವರದಿ ಮಂಡಿಸಿ, 2023-24ನೇ ಸಾಲಿನ ₹ 7.5 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಹೇಳಿದರು.
ಇದೇ ವೇಳೆ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅಭಿನಂದಿಸಲಾಯಿತು. ಸಹಕಾರ ಸಂಘದ ಉಪಾಧ್ಯಕ್ಷ ಲಿಂಗಯ್ಯ, ನಿರ್ದೇಶಕರಾದ ಪ್ರಭುಸ್ವಾಮಿ, ಎಚ್.ಬಿ.ಮಂಚೇಗೌಡ, ಎಂ.ನಂಜಪ್ಪ, ಬಿ.ಕೆ.ರಮೇಶ್, ರಾಮದೊಡ್ಡಯ್ಯ, ಪೂರ್ಣಿಮಾ, ಸಿ.ಡಿ.ಅನಿತಾ, ಎ.ವಿ.ಮಹೇಶ್, ವೀರೇಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.