ADVERTISEMENT

ಕೃಷಿ ಕಾರ್ಮಿಕರ ಸಮಸ್ಯೆ ಪರಿಹರಿಸಿ

ನಿವೇಶನ ರಹಿತ ಬಡ ಕುಟುಂಬಗಳಿಗೆ ಸೌಲಭ್ಯ ಕಲ್ಪಿಸಿ: ಸಚಿವ ಚಲುವರಾಯಸ್ವಾಮಿ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2025, 5:11 IST
Last Updated 17 ಆಗಸ್ಟ್ 2025, 5:11 IST
ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಮತ್ತು ವಿವಿಧ ಸಂಘಗಳ ಮುಖಂಡರು
ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಮತ್ತು ವಿವಿಧ ಸಂಘಗಳ ಮುಖಂಡರು   

ಮಂಡ್ಯ: ‘ಕೃಷಿ ಕೂಲಿ ಕಾರ್ಮಿಕರು ಸಮಸ್ಯೆಗಳನ್ನು ಪರಿಹರಿಸಲು ಮನವಿಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದು, ನಿಯಮಾನುಸಾರ ಪರಿಹರಿಸಬಹುದಾದ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ ವರದಿ ನೀಡಿ’ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಸದಸ್ಯರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ವಸತಿ ಹಾಗೂ ನಿವೇಶನ ರಹಿತ ಬಡ ಕುಟುಂಬಗಳಿಗೆ ಗ್ರಾಮೀಣ ಭಾಗದಲ್ಲಿ ನಿವೇಶನ ಒದಗಿಸಲು ಸರ್ಕಾರಿ ಭೂಮಿ ಇದ್ದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ ಕ್ರಮ ಕೈಗೊಳ್ಳಿ ಎಂದರು.

ADVERTISEMENT

ಗ್ರಾಮಗಳಲ್ಲಿ ಹಕ್ಕು ಪತ್ರ, ನಿವೇಶನ ಕುರಿತು ಸಮಸ್ಯೆಗಳಿದ್ದಲ್ಲಿ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಹಾಗೂ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಸಮಸ್ಯೆ ಪರಿಹಾರವಾಗದಿದ್ದಲ್ಲಿ ಜಿಲ್ಲಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದರು.

ಸಚಿವರೊಂದಿಗೆ ಚರ್ಚಿಸುವೆ:

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ 100 ದಿನ ಕೂಲಿ ಕೊಡಬೇಕು ಎಂಬ ನಿಯಮವಿದ್ದರೂ, ಕೇಂದ್ರ ಸರ್ಕಾರದಿಂದ ನಿಗದಿಪಡಿಸುವ ಮಾನವ ದಿನಗಳಿಗೆ ತಕ್ಕಂತೆ ಅನುದಾನ ಬಿಡುಗಡೆಯಾಗುತ್ತದೆ. 100 ದಿನವಿದೆ ಎಂದು ಕೆಲಸ ಕೊಟ್ಟು, ಕೂಲಿ ಪಾವತಿಗೆ ಹಣ ಬಿಡುಗಡೆಯಾಗದಿದ್ದರೆ ಮುಂದಿನ ದಿನಗಳಲ್ಲಿ ಕಷ್ಟವಾಗುತ್ತದೆ. ಈ ಕುರಿತಂತೆ ಪಂಚಾಯತ್ ರಾಜ್ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಈ ಸಮಸ್ಯೆ ಪರಿಹರಿಸಲಾಗುವುದು ಎಂದರು.

ನರೇಗಾ ಯೋಜನೆಯಡಿ ಕೂಲಿ‌ ಕಾರ್ಮಿಕರಿಗೆ ಆದ್ಯತೆ ನೀಡಬೇಕು. ನರೇಗಾ ಯೋಜನೆಯಲ್ಲಿ ಗುತ್ತಿಗೆದಾರರಿಗೆ ಕಾಮಗಾರಿ ರೂಪದಲ್ಲಿ ನೀಡುವುದನ್ನು ನಿಲ್ಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

₹2 ಲಕ್ಷ ಸಾಲ ನೀಡಿ:

ಕೃಷಿ ಕೂಲಿ ಕಾರ್ಮಿಕರಿಗೆ ಯಾವುದೇ ಆಧಾರವಿಲ್ಲದೆ ಬ್ಯಾಂಕ್ ಗಳಿಂದ ₹2 ಲಕ್ಷ ಸಾಲ ನೀಡಬೇಕು. ಈ ಬಗ್ಗೆ ಚರ್ಚೆ ನಡೆದ ಸಂದರ್ಭದಲ್ಲಿ ಸಚಿವರು ಬ್ಯಾಂಕ್ ವಿಷಯಗಳಿಗೆ ಸಂಬಂಧಿಸಿದಂತೆ ವ್ಯಕ್ತಿವಾರು ಮಾಹಿತಿ ನೀಡಿದರೆ ಬ್ಯಾಂಕ್ ನೊಂದಿಗೆ ಚರ್ಚಿಸುವುದು ಸುಲಭ. ಈ ಹಿನ್ನೆಲೆಯಲ್ಲಿ ಬ್ಯಾಂಕ್ ವಿಷಯಗಳಿಗೆ ಪ್ರತ್ಯೇಕವಾಗಿ ಸಭೆ ನಡೆಸುವುದಾಗಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು‌

‘ನಿವೇಶನ ಒದಗಿಸಲು ಸರ್ಕಾರಕ್ಕೆ ಪತ್ರ’

ಜಿಲ್ಲಾಧಿಕಾರಿ ಕುಮಾರ ಮಾತನಾಡಿ ‘ಮಂಡ್ಯ ನಗರ ವ್ಯಾಪ್ತಿಯಲ್ಲಿ ಸುಮಾರು 2000ಕ್ಕೂ ಹೆಚ್ಚು ಜನ ನಿವೇಶನ ರಹಿತ ಬಡವರಿದ್ದು ಅವರಿಗೆ ನಿವೇಶನ ಒದಗಿಸಲು 35 ಎಕರೆ ಭೂಮಿ ಬೇಕಿದೆ. ಮಂಡ್ಯ ನಗರ ವ್ಯಾಪ್ತಿಯಲ್ಲಿ ಇರುವುದಿಲ್ಲ. 10 ಕಿ.ಮೀ. ವ್ಯಾಪ್ತಿಗೆ ಹೋದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುತ್ತದೆ. ವಿಶೇಷ ಪ್ರಕರಣ ಎಂದು ಪರಿಗಣಿಸಿ ನಿವೇಶನ ಒದಗಿಸಿ ಸಮಸ್ಯೆ ಪರಿಹರಿಸಿಕೊಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ’ ಎಂದರು. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೇಲ್ದರ್ಜೆಗೆ ಏರಿಸುವುದು ಕುರಿತಂತೆ ಸರ್ಕಾರದ ನಿಯಮಗಳಿಗೆ ಅನುಸಾರವಾಗಿ ಕ್ರಮ ಕೈಗೊಳ್ಳಬೇಕಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.