ನಾಗಮಂಗಲ: ಜೆಡಿಎಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ನಿಖಿಲ್ ಕುಮಾರಸ್ವಾಮಿ ಆಗಮಿಸುತ್ತಿರುವ ವಿಚಾರವಾಗಿ ಸ್ವಾಗತ ಕೋರಿ ಹಾಕಲಾಗಿರುವ ಫ್ಲೆಕ್ಸ್‌ಗಳನ್ನು ಸಚಿವ ಎನ್.ಚಲುವರಾಯಸ್ವಾಮಿ ಅವರ ಬೆಂಬಲಿಗರು ದ್ವೇಷ ರಾಜಕಾರಣ ಮಾಡಿ ತೆರವುಗೊಳಿಸಿದ್ದಾರೆ ಎಂದು ಜೆಡಿಎಸ್ ಮುಖಂಡರು ಸುಳ್ಳು ಆರೋಪ ಮಾಡಿದ್ದಾರೆ ಎಂದು ಕಾಂಗ್ರೆಸ್ ಯುವ ಮುಖಂಡ ಶರತ್ ರಾಮಣ್ಣ ಹೇಳಿದರು.
‘ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯ ನಿಮಿತ್ತ ಫ್ಲೆಕ್ಸ್ ಅಳವಡಿಕೆಗೆ ಪುರಸಭೆಯಿಂದ ಅನುಮತಿ ಪಡೆಯಲಾಗಿತ್ತು. ಆದರೆ ಜೆಡಿಎಸ್ ಮುಖಂಡ ಮಂಜುನಾಥ್ ಅವರ ಹೆಸರಿರುವ ಫ್ಲೆಕ್ಸ್‌ಗಳನ್ನು ಕಾಂಗ್ರೆಸ್ ಪಕ್ಷದವರು ಅಳವಡಿಸಿದ್ದ ಕೆಂಪೇಗೌಡ ಜಯಂತಿ ಫ್ಲೆಕ್ಸ್‌ಗಳ ಮೇಲೆಯೇ ಹಾಕಿ ಮುಚ್ಚಲಾಗಿತ್ತು. ಈ ವಿಚಾರವಾಗಿ ಜೆಡಿಎಸ್ ಪಕ್ಷದ ಮಂಜುನಾಥ್ ಮತ್ತು ಆದಿ ಪ್ರಿಂಟರ್ಸ್ ಮಾಲೀಕರಿಗೆ ಕರೆ ಮಾಡಿ ಫ್ಲೆಕ್ಸ್ ಮೇಲೆ ಹಾಕಿರುವ ಜೆಡಿಎಸ್ ಫ್ಲೆಕ್ಸ್‌ಗಳನ್ನು ತೆರವುಗೊಳಿಸಲು ಕೇಳಿದ್ದೆವು. ಜೆಡಿಎಸ್‌ನ ಮಂಜುನಾಥ್ ಪುರಸಭೆಯ ಪೌರ ಕಾರ್ಮಿಕರಿಗೆ ಹೇಳಿ ಅವುಗಳನ್ನು ತೆರವುಗೊಳಿಸಿದ್ದಾರೆ’ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಅದೇ ವಿಚಾರವನ್ನು ಕೆಲ ಜೆಡಿಎಸ್ ಮುಖಂಡರು ರಾಜಕೀಯವಾಗಿ ಬಳಸಿಕೊಂಡು ಸುಳ್ಳು ಆರೋಪ ಮಾಡಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹೆಸರಿಗೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ತಾಲ್ಲೂಕಿನ ಜನರು ಇಂತ ಸುಳ್ಳು ಆರೋಪಗಳಿಗೆ ಕಿವಿಗೊಡುವುದು’ ಬೇಡ ಎಂದು ಮನವಿ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್ ಮಾತನಾಡಿ, ‘ನಿಖಿಲ್ ಕುಮಾರ ಸ್ವಾಮಿ ಅವರಿಗೆ ಸ್ವಾಗತ ಕೋರಿ ಫ್ಲೆಕ್ಸ್ ಹಾಕುವ ಮೂಲಕ ಕೆಂಪೇಗೌಡರನ್ನು ಅವಮಾನಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದು, ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಪವಿ, ದೀಪು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.