ಮಂಡ್ಯ: ಶೇ 75ರಷ್ಟು ಮೀಸಲಾತಿ ಹೆಚ್ಚಳ ಮಾಡುತ್ತೇವೆ ಎಂಬ ಭರವಸೆ ಈಡೇರಿಸಿಲ್ಲ ಎಂದು ಮಂಡ್ಯ ನಗರದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು.
ವಿವಿಧ ಕಾರ್ಯಕ್ರಮಗಳ ನಿಮಿತ್ತ ನಗರಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡುವ ಸಮಯ ತಿಳಿದು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾವಣೆಗೊಂಡ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗುತ್ತಿದ್ದರು. ಇದನ್ನು ತಿಳಿದ ಪೊಲೀಸರು ಮುಖ್ಯಮಂತ್ರಿ ಆಗಮನಕ್ಕೆ ಮುನ್ನ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ವೆಂಕಟಗಿರಿಯಯ್ಯ ಸೇರಿದಂತೆ 60ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ ಪೊಲೀಸ್ ಕವಾಯತು ಮೈದಾನಕ್ಕೆ ಕರೆದುಕೊಂಡು ಹೋಗಿ ಬಳಿಕ ಬಿಡುಗಡೆ ಮಾಡಿದರು.
‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಶೋಷಿತ ಸಮುದಾಯಗಳನ್ನು ನಿರಂತರ ವಂಚಿಸುತ್ತಾ ಬಂದಿದ್ದಾರೆ. ರಾಜ್ಯದ ದಲಿತ, ಹಿಂದುಳಿದ ಅಲ್ಪಸಂಖ್ಯಾತ, ಬಹುಜನ ತಳ ಸಮುದಾಯಗಳ ಅಭಿವೃದ್ಧಿಗಾಗಿ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಶೇ 75ಕ್ಕೆ ಹೆಚ್ಚಳ ಮಾಡುವುದಾಗಿ ನುಡಿದ ಸಿದ್ದರಾಮಯ್ಯ ನುಡಿದಂತೆ ನಡೆಯಲಿಲ್ಲವೇಕೆ’ ಎಂದು ಪ್ರಶ್ನಿಸಿದರು.
‘ಶೋಷಿತ ತಳ ಸಮುದಾಯಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಜಾತಿ ಜನಗಣತಿಯ ಎಚ್.ಕಾಂತರಾಜ ಆಯೋಗದ ವರದಿಯನ್ನು ಆರು ತಿಂಗಳ ಕಾಲಮಿತಿಯೊಳಗೆ ಜಾರಿಗೊಳಿಸದೆ 10 ವರ್ಷಗಳಿಂದಲೂ ಸ್ವಾರ್ಥ ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಂಡು ಅಧಿಕಾರ ಉಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ಸಮುದಾಯಗಳಿಗೆ ಮಾಡಿದ ಅನ್ಯಾಯ’ ಎಂದು ಕಿಡಿಕಾರಿದರು.
ವೆಂಕಟಗಿರಿಯಯ್ಯ ಮಾತನಾಡಿ, ‘ಅಹಿಂದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನ್ಯಾಯ ಮಾಡುತ್ತಾ ಬಂದಿದ್ದಾರೆ, ಇವರು ಚುನಾವಣೆ ಸಂದರ್ಭದಲ್ಲಿ ಹೇಳಿದ ಭರವಸೆಗಳು ಕೇವಲ ಭರವಸೆಗಳಾಗಿಯೇ ಉಳಿದಿವೆ. ಇವರನ್ನು ಒಣಗೇಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಕರೆಯಬೇಕು’ ಎಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ಸಮಿತಿಯ ಮುಖಂಡರಾದ ಕೆ.ಎಂ.ಅನಿಲ್ ಕುಮಾರ್, ಬಿ.ಆನಂದ್, ಮಹದೇವು, ಕರಿಯಪ್ಪ, ಸುಶ್ಮಿತಾ, ಮೀನಾಕ್ಷಿ, ಮಂಜುಳಾ, ಸಿದ್ದಯ್ಯ, ಮರಂಕಯ್ಯ, ಸುರೇಶ್‌ಕುಮಾರ್, ತಮ್ಮಣ್ಣ, ವೆಂಕಟೇಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.