
ಮಂಡ್ಯ: ಸಾರ್ವಜನಿಕರ ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರದ ಯೋಜನೆಯ ಬಗ್ಗೆ ಸುಳ್ಳು ಪ್ರಕಟಣೆ ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಇಲಾಖೆ ಮುಖ್ಯ ಕಾರ್ಯದರ್ಶಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ದೂರು ಸಲ್ಲಿಸಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಬಳಿ ಜಮಾಯಿಸಿದ ಕಾರ್ಯಕರ್ತರು, ರಾಜ್ಯ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಬಳಿಕ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ಜಾಹೀರಾತುಗಳು ರಾಜಕೀಯ ಪ್ರೇರಿತವಾಗಿರಬಾರದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ‘ವಿಬಿ ಜಿ ರಾಮ್ ಜೀ’ ಬಗ್ಗೆ ಪತ್ರಿಕೆಗಳಿಗೆ ನೀಡಿರುವ ಈ ಜಾಹೀರಾತು ರಾಜಕೀಯ ಪಕ್ಷಪಾತದಿಂದ ಕೂಡಿದೆ. ತೆರಿಗೆದಾರರ ಹಣವನ್ನು ಕೇಂದ್ರದ ಕಾಯ್ದೆಯ ವಿರುದ್ಧ ಅಪಪ್ರಚಾರ ಮಾಡಲು ಬಳಸುವುದು ಸಾರ್ವಜನಿಕ ಹಣದ ದುರುಪಯೋಗವಾಗಿದೆ ಎಂದು ದೂರಿದರು.
ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿಯವರ ವ್ಯಂಗ್ಯಚಿತ್ರವನ್ನು ಬಳಸಿ ಕೇಂದ್ರದ ಯೋಜನೆಯನ್ನು ಟೀಕಿಸಿರುವುದು ಗಾಂಧೀಜಿಯವರಿಗೆ ಮಾಡಿರುವ ಅಪಮಾನವಾಗಿದೆ. ಜಾಹೀರಾತು ಕೇವಲ ರಾಜಕೀಯ ಟೀಕೆಯಾಗಿದ್ದರೆ ಅದು ಅಭಿವ್ಯಕ್ತಿ ಸ್ವಾತಂತ್ರ್ಯದಡಿ ಬರಬಹುದು. ಆದರೆ, ಸಾರ್ವಜನಿಕ ಹಣ ಬಳಸಿರುವುದರಿಂದ ಸುಪ್ರೀಂ ಕೋರ್ಟ್‍ನ 2015ರ ಮಾರ್ಗಸೂಚಿಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು.
ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್, ಹೊಸಹಳ್ಳಿ ಶಿವು, ವರದರಾಜ ಅರಸು, ಎಸ್.ಆರ್. ಭೀಮೇಶ್, ಪ್ರಸನ್ನಕುಮಾರ್, ಮಹೇಶ, ಎನ್. ನಾಗರಾಜು, ಎಸ್. ಶಿವಕುಮಾರ್ ಆರಾಧ್ಯ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.