ಮಂಡ್ಯ: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಕಿಡಿಗೇಡಿಗಳು ಷಡ್ಯಂತ್ರ ನಡೆಸುವ ಮೂಲಕ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದ್ದು, ಇದನ್ನು ನಿಲ್ಲಿಸಲು ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಜೆ.ಸಿ.ವೃತ್ತ ಬಳಿ ಜಮಾವಣೆಗೊಂಡ ಕಾರ್ಯಕರ್ತರು ಕೆಲಕಾಲ ಪ್ರತಿಭಟನೆ ನಡೆಸಿದರು. ನಂತರ ಹೆದ್ದಾರಿ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಕರ್ನಾಟಕವಲ್ಲದೇ ದೇಶದಾದ್ಯಂತ ಕೋಟ್ಯಂತರ ಭಕ್ತರನ್ನು ಹೊಂದಿದೆ. ಈ ಕ್ಷೇತ್ರಕ್ಕೆ ದಿನನಿತ್ಯ ಲಕ್ಷಾಂತರ ಜನ ಭಕ್ತರು ಆಗಮಿಸುತ್ತಾರೆ. ಹಿಂದೂಗಳಿಗೆ ಇದು ಪ್ರಮುಖ ಧಾರ್ಮಿಕ ಶ್ರದ್ಧೆಯ ಕೇಂದ್ರವಾಗಿದೆ. ಆದರೆ, ಹಿಂದೂಗಳ ಧಾರ್ಮಿಕ ಭಾವನೆಯನ್ನು ಅಪಮಾನಿಸುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಹಾಗೂ ಎಡ ಪಂಥೀಯರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಈ ಆರೋಪ ಮಾಡುತ್ತಿರುವುದರ ಹಿಂದೆ ಹಿಂದೂಗಳ ಶ್ರದ್ಧಾ–ಭಕ್ತಿಯನ್ನು ಅತ್ಯಂತ ನಿಕೃಷ್ಟವಾಗಿ ಬಿಂಬಿಸುವ ಹುನ್ನಾರವಿದೆ. ಇಂತಹ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುವ ಷಡ್ಯಂತ್ರ್ಯವು ನಡೆದಿದೆ. ಭಾರತದ ನ್ಯಾಯ ಸಂಹಿತೆ ಅಡಿಯಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಯಾವುದೇ ಆಧಾರಗಳಿಲ್ಲದೇ ಮಾಡಿದ ಆರೋಪಕ್ಕೆ ರಾಜ್ಯ ಸರ್ಕಾರವು ಲಕ್ಷಾಂತರ ಹಣವನ್ನು ವ್ಯಯಿಸಿ ಆತ ಹೇಳಿದ ಕಡೆಗಳಲ್ಲೆಲ್ಲ ಗುಂಡಿಗಳನ್ನು ತೋಡಿದೆ. ಆದರೂ ಏನೂ ಸಿಗಲಿಲ್ಲ, ಈ ಅನಾಮಿಕನ ಹಿಂದಿರುವ ದುಷ್ಟ ವ್ಯಕ್ತಿಗಳು ಯಾರು ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಕ್ತಿ ಭಾವನೆಗಳಿಗೆ ಧಕ್ಕೆ ತರುವ ಹುನ್ನಾರವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಇಂತಹ ದುಷ್ಕೃತ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿ ಡಾ.ಜಿ.ಪರಮೇಶ್ವರ್ ರಾಜ್ಯದ ಜನತೆಯ ಕ್ಷಮೆಯಾಚನೆ ಮಾಡಬೇಕು. ಇಲ್ಲವಾದರೆ ಪ್ರತಿಭಟನೆ ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ವಸಂತ್‌ಕುಮಾರ್, ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಜಯರಾಂ, ಮುಖಂಡರಾದ ಎಚ್.ಅರ್.ಅರವಿಂದ್, ಎಚ್.ಆರ್.ಅಶೋಕ್‌ಕುಮಾರ್, ಶಿವಕುಮಾರ್ ಆರಾಧ್ಯ, ಭೀಮೇಶ್, ವಿವೇಕ್, ಪ್ರಸನ್ನ, ಮಾದರಾಜೇ ಅರಸ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.