ಶ್ರೀರಂಗಪಟ್ಟಣ: ಬೆಂಗಳೂರಿನಲ್ಲಿ ನಡೆದ ಐಪಿಎಲ್ ವಿಜಯೋತ್ಸವದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳ ಸಾವಿನ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಇಲ್ಲಿನ ಮಿನಿ ವಿಧಾನಸೌಧದ ಎದುರು ಅರ್ಧ ತಾಸಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಯಿತು. ರಾಜ್ಯ ಸರ್ಕಾರ, ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು.
‘ಸರ್ಕಾರದ ನಿರ್ಲಕ್ಷ್ಯ ಮತ್ತು ಅಗ್ಗದ ಪ್ರಚಾರದ ಆಸೆಯಿಂದ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಇದು ಸರ್ಕಾರಿ ಪ್ರಾಯೋಜಿತ ಸಾಮೂಹಿಕ ಕೊಲೆ’ ಎಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಎಸ್. ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ಮಂಡಲದ ಅಧ್ಯಕ್ಷ ಪೀಹಳ್ಳಿ ಎಸ್. ರಮೇಶ್ ಮಾತನಾಡಿ, ‘ಐಪಿಎಲ್ ವಿಜಯೋತ್ಸವಕ್ಕೆ ಪೊಲೀಸ್ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದರೂ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಹಠಕ್ಕೆ ಬಿದ್ದು ಕಾರ್ಯಕ್ರಮ ನಡೆಸಿದ್ದಾರೆ. ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ ಸುದ್ದಿ ಬಂದ ನಂತರವೂ ಕಾರ್ಯಕ್ರಮ ಮುಂದುವರೆಸಿ ಅಮಾನವೀಯತೆ ಪ್ರದರ್ಶಿಸಿದ್ದಾರೆ. ತಮ್ಮ ತಪ್ಪು ಮುಚ್ಚಿಕೊಳ್ಳಲು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿದ್ದಾರೆ’ ಎಂದು ಟೀಕಿಸಿದರು.
ಪಕ್ಷದ ರೈತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಎಸ್. ನಂಜುಂಡೇಗೌಡ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಟಿ. ಶ್ರೀಧರ್ ಮಾತನಾಡಿದರು. ಮುಖಂಡರಾದ ಬಿ.ಸಿ. ಕೃಷ್ಣೇಗೌಡ, ಉಮೇಶಕುಮಾರ್, ಹೇಮಂತಕುಮಾರ್, ಮಂಜುನಾಥ್, ಬಿ.ಸಿ. ಸಂತೋಷಕುಮಾರ್, ಇಂದ್ರಕುಮಾರ್, ಮಾನಸ, ದೇವೀರಮ್ಮ, ಮಹಲಿಂಗು, ಸುನಿಲ್, ಶಂಕರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.