ADVERTISEMENT

ಕೋಮುಗಲಭೆ ಪ್ರಚೋದಿಸಿದವರಿಗೆ ಬಿಜೆಪಿ ಟಿಕೆಟ್‌: ಮುನಿಯಪ್ಪ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2018, 18:45 IST
Last Updated 28 ಅಕ್ಟೋಬರ್ 2018, 18:45 IST

ಮಂಡ್ಯ: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕೋಮುಗಲಭೆಗೆ ಪ್ರಚೋದನೆ ನೀಡುತ್ತಿದೆ. ವಿಧಾನಸಭೆ ಚುನಾವಣೆಗೆ ಟಿಕೆಟ್‌ ನೀಡುವಾಗ ಎಷ್ಟು ಕೋಮುಗಲಭೆ ಪ್ರಕರಣ ದಾಖಲಿಸಿದ್ದಾರೆ ಎಂಬುದನ್ನು ಪರಿಶೀಲಿಸಿ ಅಭ್ಯರ್ಥಿಗೆ ಟಿಕೆಟ್‌ ಕೊಡಲಾಗುತ್ತಿದೆ’ ಎಂದು ಸಂಸದ ಕೆ.ಎಚ್‌.ಮುನಿಯಪ್ಪ ಇಲ್ಲಿ ಭಾನುವಾರ ಆರೋಪಿಸಿದರು.

ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕೋಮು ಸಾಮರಸ್ಯ ಕದಡುವ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ. ಗುಜರಾತ್‌ನಲ್ಲಿ ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಉಳಿಗಾಲ ಇಲ್ಲವಾಗಿದೆ. ಪ್ರತಿಯೊಬ್ಬ ಜನಪ್ರತಿನಿಧಿಗೆ ಕೋಮುಗಲಭೆ ಹೆಚ್ಚಿಸುವಂತೆ ಸೂಚನೆ ನೀಡುತ್ತಿದ್ದಾರೆ. ಹಿಂದೂ–ಮುಸ್ಲಿಮರನ್ನು ಬೇರೆ ಬೇರೆ ಮಾಡಿದರೆ ಹೆಚ್ಚು ಮತ ಪಡೆಯಬಹುದು ಎಂಬುದು ಬಿಜೆಪಿಯವರ ಲೆಕ್ಕಾಚಾರವಾಗಿದೆ’ ಎಂದರು.

‘ರಫೇಲ್‌ ಯುದ್ಧ ವಿಮಾನ ಒಪ್ಪಂದ ಎಚ್‌ಎಎಲ್‌ನಲ್ಲೇ ಉಳಿದಿದ್ದರೆ ನಮ್ಮ ದೇಶದಲ್ಲಿ ಎಂಜಿನಿಯರಿಂಗ್‌ ಓದಿದ ಸಾವಿರಾರು ವಿದ್ಯಾರ್ಥಿಗಳ ಬದುಕು ಹಸನಾಗುತ್ತಿತ್ತು. ಆದರೆ, ಮೋದಿ ಸ್ವತಃ ಫ್ರಾನ್ಸ್‌ಗೆ ತೆರಳಿ ಒಪ್ಪಂದ ಬದಲಾಯಿಸಿ ₹ 36 ಸಾವಿರ ಕೋಟಿ ಅವ್ಯವಹಾರ ನಡೆಸಿದ್ದಾರೆ. ದೇಶದ ರೈತರು ಸಂಕಷ್ಟ ಪರಿಸ್ಥಿತಿಯಲ್ಲಿದ್ದರೂ ಸಾಲ ಮನ್ನಾ ಮಾಡಲಿಲ್ಲ. ಆದರೆ, ಉದ್ಯಮಪತಿಗಳ ಸಾಲ ಮನ್ನಾ ಮಾಡಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.