ಮಂಡ್ಯ: ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸೆ.22ರಿಂದ ಹಮ್ಮಿಕೊಂಡಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ನಗರದ 20ನೇ ವಾರ್ಡ್‌ನ ಬಸವರಾಜು ಎಚ್.ಸಿ ಎಂಬವರ ಮನೆಯಿಂದ ಚಾಲನೆ ನೀಡಿದರು.
ಪ್ರಸ್ತುತ ಸಮೀಕ್ಷೆ ಜಾತಿ ಸಮೀಕ್ಷೆ ಅಲ್ಲ; ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿ ತಿಳಿಯಲು ಸಮೀಕ್ಷೆ ಕೈಗೊಳ್ಳಲಾಗಿದೆ. ಸಮೀಕ್ಷೆದಾರರಿಗೆ ಸಾರ್ವಜನಿಕರು ನಿಖರ ಮಾಹಿತಿ ನೀಡಿ. ಸಮೀಕ್ಷೆದಾರರು ಸಾರ್ವಜನಿಕರೊಂದಿಗೆ ಸಹನೆಯಿಂದ ವರ್ತಿಸಿ, ಪ್ರಶ್ನೆಯನ್ನು ಕೇಳಿ ಉತ್ತರ ಪಡೆಯಿರಿ ಎಂದರು.
ಮಂಡ್ಯ ಜಿಲ್ಲೆಯಲ್ಲಿ 5,29,032 ಕುಟುಂಬಗಳಿದ್ದು, 4,446 ಗಣತಿದಾರರನ್ನು ನೇಮಕ ಮಾಡಲಾಗಿದೆ. ಒಬ್ಬ ಗಣತಿದಾರರಿಗೆ 120 ಕುಟುಂಬಗಳಂತೆ ಬ್ಲಾಕ್ ಹಂಚಿಕೆ ಮಾಡಲಾಗಿದೆ. 20 ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ ಎಂದರು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಮನೆಯ ಮುಖ್ಯಸ್ಥರ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಮನೆ ವಿಳಾಸ, ಮೊಬೈಲ್ ಸಂಖ್ಯೆ, ರೇಷನ್ ಕಾರ್ಡ್ ಸಂಖ್ಯೆ, ಆಧಾರ್ ಸಂಖ್ಯೆ, ಮತದಾರರ ಗುರುತಿನ ಚೀಟಿ ಸಂಖ್ಯೆ, ಕುಟುಂಬದ ಒಟ್ಟು ಸದಸ್ಯರು, ಧರ್ಮ, ಜಾತಿ, ಉಪಜಾತಿ, ಜಾತಿ ವರ್ಗ, ಜಾತಿ ಪ್ರಮಾಣ ಪತ್ರ, ಪ್ರಮಾಣ ಪತ್ರ ಸಂಖ್ಯೆ, ಜನ್ಮ ದಿನಾಂಕ, ವಯಸ್ಸು, ಲಿಂಗ, ವೈವಾಹಿಕ ಸ್ಥಿತಿ, ಜನ್ಮ ಸ್ಥಳ, ವಿದ್ಯಾಭ್ಯಾಸದ ಮಟ್ಟ, ಮನೆಯ ಮುಖ್ಯ ಉದ್ಯೋಗ ಹೀಗೆ ಒಟ್ಟು 60 ಪ್ರಶ್ನೆಗಳನ್ನು ಕೇಳಲಾಗುವುದು ಎಂದು ರಾಜ್ಯ ಸಂಪನ್ಮೂಲ ಅಧಿಕಾರಿ ಚಂದ್ರಶೇಖರ್ ವಿವರಿಸಿದರು.
ಮಂಡ್ಯ ಶಾಸಕ ಪಿ. ರವಿಕುಮಾರ್, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಂಜುಳಾ, ಅಧಿಕಾರಿಗಳು ಉಪಸ್ಥಿತರಿದ್ದರು.
‘ಸಮೀಕ್ಷೆ: ತಪ್ಪು ಕಲ್ಪನೆ ಬೇಡ’
‘ಸಮೀಕ್ಷೆಗೆ ನೀಡಿರುವ ಸಮಯ ಕಡಿಮೆಯಿದೆ ಎಂಬುದು ಇತರರ ಕಲ್ಪನೆಯಾಗಿದ್ದು ವಿಧಿಸಿರುವ ಅವಧಿಯಲ್ಲಿ ಸಮೀಕ್ಷೆ ಪೂರ್ಣವಾಗದೆ ಇದ್ದಲ್ಲಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸುವ ಸಾಧ್ಯತೆಯಿರುತ್ತದೆ. ಯಾರಲ್ಲಿಯೂ ತಪ್ಪು ಕಲ್ಪನೆ ಬೇಡ ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಜನರ ಸಮಸ್ಯೆ ಪರಿಹರಿಸಲು ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಸಮೀಕ್ಷೆ ನಡೆಸಲು ಶಾಲಾ ಶಿಕ್ಷಕರ ಅವಶ್ಯಕತೆಯಿರುವುದರಿಂದ ರಜಾ ಸಮಯದಲ್ಲಿ ಸಮೀಕ್ಷೆಯ ಕಾರ್ಯವನ್ನು ಕೈಗೊಳ್ಳಲಾಗಿದೆ ದುರುದ್ದೇಶವಿಲ್ಲ ಎಂದು ಹೇಳಿದರು.
ವಿಪಕ್ಷಗಳಿಂದ ಮೊಸರಲ್ಲಿ ಕಲ್ಲು ಹುಡುಕಾಟ: ಸಚಿವ
ಮದ್ದೂರು: ಜಾತಿ ಸಮೀಕ್ಷೆಯ ವಿಷಯದಲ್ಲಿ ವಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದರು. ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ ಮಹಿಳಾ ವಿವಿಧಶೋದ್ದೇಶ ಸೇವಾ ಸಹಕಾರ ಸಂಘದ ಕಟ್ಟಡಕ್ಕೆ ಭೂಮಿ ಪೂಜೆಯನ್ನು ನೆರವೇರಿಸಿ ಬಳಿಕ ಹೋಬಳಿಯ ಬಿದರಕೋಟೆ ಗ್ರಾಮದಲ್ಲಿ ಸೋಮವಾರ 3 ಕೋಟಿ ರೂ ವೆಚ್ಚದ ಬಿದರಕೋಟೆ.. ಹಲ್ಲೆಗೆರೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದ ನಂತರ ಅವರು ಮಾತನಾಡಿದರು. ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿ ಸಮೀಕ್ಷೆ ಇಂದು ಆರಂಭಗೊಳ್ಳಲಿದೆ ಒಂದು ವೇಳೆ 15 ದಿನಗಳಲ್ಲಿ ಸಮೀಕ್ಷೆ ಮುಗಿಯದಿದ್ದರೆ ಮತ್ತಷ್ಟು ಕಾಲಾವಕಾಶ ಕೊಟ್ಟು ಪೂರ್ಣ ಗೊಳಿಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.