ADVERTISEMENT

ಮಂಡ್ಯ: ಕಾವೇರಿ ನದಿ ತೀರದ ಜನರಿಗೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 11:27 IST
Last Updated 7 ಆಗಸ್ಟ್ 2020, 11:27 IST

ಮಂಡ್ಯ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ. ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸುವ ಸಾಧ್ಯತೆ ಇದ್ದು ನದಿ ತೀರದ ಜನರು ಎಚ್ಚರಿಕೆ ವಹಿಸಬೇಕು ಎಂದು ಕಾವೇರಿ ನೀರಾವರಿ ನಿಗಮ ತಿಳಿಸಿದೆ.

ಶುಕ್ರವಾರ ಒಳಹರಿವಿನ ಪ್ರಮಾಣ 54 ಸಾವಿರ ಕ್ಯುಸೆಕ್‌ಗೆ ಹೆಚ್ಚಾಗಿದ್ದು ಜಲಾಶಯದ ನೀರಿನ ಮಟ್ಟ 115.35 ಅಡಿಗೆ ತಲುಪಿದೆ. ಒಳಹರಿವಿನ ಪ್ರಮಾಣ ಇನ್ನಷ್ಟು ಹೆಚ್ಚಳವಾಗುತ್ತಿದ್ದು ಜಲಾಶಯದ ರಕ್ಷಣೆಗಾಗಿ ನದಿಗೆ ನೀರು ಹರಿಸಲಾಗುವುದು. ಹೀಗಾಗಿ ನದಿ ತೀರದ ಜನರು ಜೀವ, ಆಸ್ತಿ ಪಾಸ್ತಿ ರಕ್ಷಣೆ ಮಾಡಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ಮುಂಜಾಗೃತಾ ಕ್ರಮವಾಗಿ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್‌ ರದ್ದು ಮಾಡಲಾಗಿದೆ.

‘ಜಲಾಶಯಕ್ಕೆ ಬಂದ ನೀರನ್ನು ಹೊರಕ್ಕೆ ಹರಿಸುವುದು ಅನಿವಾರ್ಯ. ನದಿಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಲಿದ್ದು ಜನರಿಗೆ ಎಚ್ಚರಿಕೆ ನೀಡಲಾಗಿದೆ’ ಎಂದು ನಿಗಮದ ಕಾರ್ಯಪಾಲಕ ಎಂಜಿನಿಯರ್‌ ಬಿ.ಎಂ.ರಾಜು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.