ನಾಗಮಂಗಲದಲ್ಲಿ ಈಚೆಗೆ ಬಾಲ್ಯವಿವಾಹ ವಿರೋಧಿ ಜಾಗೃತಿ ಜಾಥಾ ನಡೆಯಿತು
ನಾಗಮಂಗಲ: ಬಾಲ್ಯವಿವಾಹವು ಸಾಮಾಜಿಕ ಅನಿಷ್ಟ ಪದ್ಧತಿಯಾಗಿದ್ದು, ಬಾಲ್ಯವಿವಾಹದಿಂದ ಮಕ್ಕಳ ಭವಿಷ್ಯದ ಮೇಲೆ ವ್ಯತಿರಿಕ್ತವಾಗಿ ಪರಿಣಾಮ ಬೀರುತ್ತದೆ. ಅದರ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಪಟ್ಟಣದ ಸೌಮ್ಯಕೇಶವ ಸ್ವಾಮಿ ದೇವಾಲಯದ ಆವರಣದಲ್ಲಿ ಈಚೆಗೆ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಾಲ್ಯ ವಿವಾಹ ಮುಕ್ತ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ಬಾಲ್ಯವಿವಾಹದಿಂದ ಆಗುವ ಸಮಸ್ಯೆಗಳು ಮತ್ತು ದುಷ್ಪರಿಣಾಮಗಳ ಬಗ್ಗೆ ಅರಿವಿದ್ದರೂ ಕೆಲವರು ಬಾಲ್ಯವಿವಾಹ ಮಾಡಲು ಮುಂದಾಗುವುದು ತಪ್ಪು. ಬಾಲ್ಯವಿವಾಹಕ್ಕೆ ಪ್ರಯತ್ನಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಬಾಲ್ಯವಿವಾಹದ ಬಗ್ಗೆ ಸಮುದಾಯಕ್ಕೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದರು.
ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಅಧಿಕಾರಿಗಳು ಸೇರಿದಂತೆ ವಿದ್ಯಾರ್ಥಿಗಳು ಜಾಥಾ ನಡೆಸಿದರು.
ಸಿಡಿಪಿಒ ಕೃಷ್ಣಮೂರ್ತಿ, ತಹಶೀಲ್ದಾರ್ ಆದರ್ಶ್, ಪ್ರಭಾರ ಬಿಇಒ ಕೆ.ರವೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ರಾಜ್ಯಮಕ್ಕಳ ಆಯೋಗದ ಸದಸ್ಯ ಮಿಕ್ಕೆರೆ ವೆಂಕಟೇಶ್, ನ್ಯಾಯಾಧೀಶ ಹೆಚ್.ಎಸ್.ಶಿವರಾಜು, ಜಿಲ್ಲಾ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜ್ ಮೂರ್ತಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.