ADVERTISEMENT

ಮಂಡ್ಯ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತವಾಗಿಸಿ: ಬೃಹತ್ ಜಾಥಾ ವಾಕಥಾನ್

​ಪ್ರಜಾವಾಣಿ ವಾರ್ತೆ
Published 20 ಜುಲೈ 2025, 3:02 IST
Last Updated 20 ಜುಲೈ 2025, 3:02 IST
ಮಂಡ್ಯ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾಡುವ ಉದ್ದೇಶದಿಂದ ನಗರದಲ್ಲಿ ಶನಿವಾರ ಬೃಹತ್ ಜಾಥಾ (ವಾಕಥಾನ್) ನಡೆಯಿತು 
ಮಂಡ್ಯ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾಡುವ ಉದ್ದೇಶದಿಂದ ನಗರದಲ್ಲಿ ಶನಿವಾರ ಬೃಹತ್ ಜಾಥಾ (ವಾಕಥಾನ್) ನಡೆಯಿತು    

ಮಂಡ್ಯ: ‘ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತವಾಗಿಸಲು ವಿವಿಧ ಇಲಾಖೆಗಳು ಹಾಗೂ ಅಧಿಕಾರಿಗಳೊಂದಿಗೆ ಸಾರ್ವಜನಿಕರು ಕೈ ಜೋಡಿಸಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಸುಬ್ರಹ್ಮಣ್ಯ ಜಿ.ಎನ್. ತಿಳಿಸಿದರು.

ಜಿಲ್ಲಾ ನ್ಯಾಯಾಂಗ ಕಚೇರಿಯ ಮುಂಭಾಗ ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಮಂಡ್ಯ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಬೃಹತ್ ಜಾಥಾ ವಾಕಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೊದಲು ಹೆಣ್ಣು ಮಕ್ಕಳು ಬಾಲ್ಯವಿವಾಹದ ದುಷ್ಪರಿಣಾಮಗಳು, ಕಾನೂನುಗಳ ಬಗ್ಗೆ ತಿಳಿದುಕೊಂಡು ಬಾಲ್ಯ ವಿವಾಹವನ್ನು ವಿರೋಧಿಸುವ ಪ್ರವೃತ್ತಿ ಬೆಳಸಿಕೊಳ್ಳಬೇಕು. ಇಂಥ ‍ಪ್ರಕರಣಗಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ-1098 ಅಥವಾ 112ಗೆ ಕರೆ ಮಾಡಿದರೆ ತಕ್ಷಣ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ ಎಂದರು.

ADVERTISEMENT

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆನಂದ್ ಎಂ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಬಕಾರಿ ಉಪ ಆಯುಕ್ತ ನಾಗಶಯನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ, ನಗರಸಭೆ ಪೌರಾಯುಕ್ತೆ ಪಂಪಾಶ್ರೀ, ಡಿಡಿಪಿಯು ಚಲುವಯ್ಯ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀನಿವಾಸ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಶ್ಮಿ ಪಾಲ್ಗೊಂಡಿದ್ದರು. 

‘ಕಳಂಕ ತೊಡೆದುಹಾಕಲು ಕೈಜೋಡಿಸಿ’

ಜಿಲ್ಲಾಧಿಕಾರಿ ಕುಮಾರ ಮಾತನಾಡಿ ಸ್ವಾತಂತ್ರ‍್ಯ ಪೂರ್ವದಲ್ಲಿ ಸಮಾಜದಲ್ಲಿ ಬಡತನ ಅನಕ್ಷರತೆ ಮೂಢನಂಬಿಕೆ ಹೆಚ್ಚಿದ್ದ ಕಾರಣ ಬಾಲ್ಯವಿವಾಹಗಳು ನಡೆಯುತ್ತಿತ್ತು. ಆದರೆ ಇಂದಿನ ಆಧುನಿಕ ಸಮಾಜದಲ್ಲಿ ಶಿಕ್ಷಣ ತಂತ್ರಜ್ಞಾನ ವೈಚಾರಿಕತೆಯಲ್ಲಿ ಮುಂದೆ ಬಂದಿದ್ದೇವೆ ಆದರೂ ನಮ್ಮ ಸುತ್ತಮುತ್ತಲೂ ಬಾಲ್ಯ ವಿವಾಹದಂತಹ ಪ್ರಕರಣಗಳು ಕಂಡು ಬರುತ್ತಿವೆ ಎಂದರೆ ಎಲ್ಲರೂ ತಲೆ ತಗ್ಗಿಸಿ ನಿಲ್ಲಬೇಕಾಗುತ್ತದೆ. ಇದು ಸಮಾಜಕ್ಕೆ ಅಂಟಿಕೊಂಡಿರುವ ಕಳಂಕ. ಇದನ್ನು ತೊಡೆದುಹಾಕಲು ಇಲಾಖೆಗಳೊಂದಿಗೆ ಸಾರ್ವಜನಿಕರು ಜೊತೆಗೆ ನಿಲ್ಲಬೇಕು ಎಂದು ಮನವಿ ಮಾಡಿದರು.

ಗ್ರಾಮ ಸಭೆಗಳಲ್ಲಿ ಮಕ್ಕಳು ತಮಗೆ ಉದ್ಭವಿಸುವ ಸಂದೇಹಗಳ ಬಗ್ಗೆ ಪತ್ರ ಮುಖೇನ ಪ್ರಶ್ನೆ ಸಲ್ಲಿಸಿದರೆ ಉತ್ತರ ನೀಡಲಾಗುತ್ತಿದೆ. ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುವುದು
ಕೆ.ಆರ್‌.ನಂದಿನಿ, ಸಿಇಒ, ಮಂಡ್ಯ ಜಿಲ್ಲಾ ಪಂಚಾಯಿತಿ
ಪ್ರೇಮ ಪ್ರಕರಣಗಳ ಮೂಲಕ ಬಾಲ ಗರ್ಭಿಣಿಯರ ಪ್ರಕರಣಗಳು ಹೆಚ್ಚಾಗುತ್ತಿವೆ. ಬಾಲ್ಯವಿವಾಹ ತಡೆಗಟ್ಟಲು ಸಂಬಂಧಿಸಿದ ಇಲಾಖೆಗಳು ಒಗ್ಗೂಡಿ ಕೆಲಸ ಮಾಡಬೇಕಿದೆ
ವೆಂಕಟೇಶ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.