ADVERTISEMENT

ಮಂಡ್ಯ: ಕರಾಳ ಕಾರ್ಮಿಕ ಸಂಹಿತೆ ರದ್ದುಗೊಳಿಸಲು ಪ್ರತಿಭಟನೆ

ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದವರ ವಶ; ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2025, 2:36 IST
Last Updated 10 ಜುಲೈ 2025, 2:36 IST
ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬುಧವಾರ ಕರೆ ನೀಡಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಮಂಡ್ಯದಲ್ಲಿ ಸಿಐಟಿಯು ಮತ್ತು ವಿವಿಧ ಸಂಘಟನೆಗಳ ಸಹಯೋಗದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು 
ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬುಧವಾರ ಕರೆ ನೀಡಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಮಂಡ್ಯದಲ್ಲಿ ಸಿಐಟಿಯು ಮತ್ತು ವಿವಿಧ ಸಂಘಟನೆಗಳ ಸಹಯೋಗದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು    

ಮಂಡ್ಯ: ಕೇಂದ್ರ ಸರ್ಕಾರರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೋರೇಟ್ ಪರ ನೀತಿಗಳನ್ನು ವಿರೋಧಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ನಗರದಲ್ಲಿ ರೈತ ಸಂಘ ಮತ್ತು ಕಾರ್ಮಿಕ ಸಂಘಟನೆಗಳು ನಗರದಲ್ಲಿ ಬುಧವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದವು. ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಿಂದ ಜಯಚಾಮರಾಜೇಂದ್ರ ಒಡೆಯರ್ ವೃತ್ತದವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ನಂತರ ಶ್ರಮಿಕ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳ ಜಾರಿಯನ್ನು ಕೂಡಲೇ ರದ್ದು ಮಾಡಬೇಕು ಮತ್ತು ದುಡಿಯುವ ಜನರ ಸ್ವಾಯತ್ತತೆಯನ್ನು ಕೆಣಕದಿರಿ ಎಂದು ಘೋಷಣೆ ಕೂಗಿದರು. 

ಕೆಲಸದ ಸಮಯ ಎಂಟು ಗಂಟೆ, ಕಾಯಂ ಕೆಲಸ, ₹36 ಸಾವಿರ ಕನಿಷ್ಠ ವೇತನ ನಿಗದಿಪಡಿಸಬೇಕು. ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ತಕ್ಷಣ ಜಾರಿ ಮಾಡಬೇಕು ಎಂದು ಆಗ್ರಹಿಸಿದರು. 

ADVERTISEMENT

ಎನ್‌ಪಿಎಸ್ ಮತ್ತು ಯುಪಿಎಸ್ ರದ್ದುಪಡಿಸಿ, ಹಳೆಯ ಪಿಂಚಣಿಯನ್ನು ಮರುಸ್ಥಾಪಿಸಬೇಕು. ಇಎಸ್ಐ, ಪಿ.ಎಫ್. ಬೋನಸ್ ಪಾವತಿಗಿರುವ ಎಲ್ಲ ವೇತನ ಮಿತಿಯನ್ನು ತೆಗೆಯಬೇಕು. ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಆಹಾರ, ಔಷಧಿಗಳು, ಕೃಷಿ ಸಾಮಗ್ರಿ ಮುಂತಾದ ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ತೆಗೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಶ್ರಮಿಕ ಶಕ್ತಿ ಅಧ್ಯಕ್ಷ ವರದರಾಜೇಂದ್ರ, ಸಿಐಟಿಯು ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಎಐಡಬ್ಲ್ಯೂಯು ರಾಜ್ಯ ಘಟಕದ ಅಧ್ಯಕ್ಷ ಎಂ.ಪುಟ್ಟಮಾದು, ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಪೂರ್ಣಿಮಾ, ಜಿಲ್ಲಾ ಕಾರ್ಯದರ್ಶಿ ಸಿದ್ದರಾಜು, ಮಹಿಳಾ ಮುನ್ನಡೆಯ ಶಿಲ್ಪಾ, ಕರ್ನಾಟಕ ರಾಜ್ಯ ರಾಜ್ಯ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕಾರ್ಮಿಕ ಒಕ್ಕೂಟದ ಮುಖಂಡರಾದ ಲತಾ ಶಂಕರ್‌, ಶೋಭಾ, ಲಲಿತಾ, ಕೃಷ್ಣಪ್ಪ, ಮಂಗಳಾ, ಗಾಯಿತ್ರಿ, ಪುಟ್ಟಸ್ವಾಮಿ, ನರಸಿಂಹ, ಕೋಣನಹಳ್ಳಿ ಮಂಜು ಭಾಗವಹಿಸಿದ್ದರು.

ಫಲವತ್ತಾದ ಕೃಷಿ ಜಮೀನಿನ ಭೂಸ್ವಾಧೀನ ನಿಲ್ಲಿಸಲು ಆಗ್ರಹ | ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣಕ್ಕೆ ವಿರೋಧ | ಅಸಂಘಟಿತ ಕಾರ್ಮಿಕರಿಗೆ ಭವಿಷ್ಯನಿಧಿ, ಕನಿಷ್ಠ ವೇತನ ನೀಡಲು ಒತ್ತಾಯ

‘ಉಚಿತ ಶಿಕ್ಷಣ ಆರೋಗ್ಯದ ಹಕ್ಕು ಖಾತ್ರಿಪಡಿಸಿ’

ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿಪಡಿಸುವ ಶಾಸನ ರೂಪಿಸಿ. ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಮೇಲಿನ ಕೇಂದ್ರೀಯ ಅಬಕಾರಿ ಸುಂಕ ಇಳಿಸಬೇಕು. ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಾರ್ವತ್ರೀಕರಣಗೊಳಿಸಿ ಆಹಾರ ಭದ್ರತೆ ಖಾತ್ರಿಪಡಿಸಬೇಕು. ಸಾರ್ವಜನಿಕ ಉದ್ದಿಮೆ ನಿಗಮ ಮತ್ತು ಇಲಾಖೆಗಳನ್ನು ಖಾಸಗೀಕರಿಸುವ ‘ರಾಷ್ಟ್ರೀಯ ನಗದೀಕರಣ ಪೈಪ್‌ಲೈನ್ ಯೋಜನೆ’ಯನ್ನು ರದ್ದುಪಡಿಸಬೇಕು. ಎಲ್ಲರಿಗೂ ಉಚಿತ ಶಿಕ್ಷಣದ ಹಕ್ಕು ಆರೋಗ್ಯದ ಹಕ್ಕು ವಸತಿ ಖಾತ್ರಿಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.