ADVERTISEMENT

ಜುಲೈ 29ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಆರ್‌ಎಸ್‌ಗೆ ಬಾಗಿನ

​ಪ್ರಜಾವಾಣಿ ವಾರ್ತೆ
Published 23 ಜುಲೈ 2024, 16:30 IST
Last Updated 23 ಜುಲೈ 2024, 16:30 IST
ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಅಣೆಕಟ್ಟೆ ಭರ್ತಿಯಾಗುವ ಹಂತ ತಲುಪಿದ್ದು, ಜುಲೈ 29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಬಾಗಿನ ಅರ್ಪಿಸಲಿರುವ ಹಿನ್ನೆಲೆಯಲ್ಲಿರುವ ಶಾಸಕ ರಮೇಶ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಕುಮಾರ ಮಂಗಳವಾರ ಅಣೆಕಟ್ಟೆಗೆ ಭೇಟಿ ನೀಡಿ ಕೈಗೊಳ್ಳಬೇಕಾದ ಸಿದ್ದತೆ ಕುರಿತು ಪರಿಶೀಲಿಸಿದರು
ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಅಣೆಕಟ್ಟೆ ಭರ್ತಿಯಾಗುವ ಹಂತ ತಲುಪಿದ್ದು, ಜುಲೈ 29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಬಾಗಿನ ಅರ್ಪಿಸಲಿರುವ ಹಿನ್ನೆಲೆಯಲ್ಲಿರುವ ಶಾಸಕ ರಮೇಶ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಕುಮಾರ ಮಂಗಳವಾರ ಅಣೆಕಟ್ಟೆಗೆ ಭೇಟಿ ನೀಡಿ ಕೈಗೊಳ್ಳಬೇಕಾದ ಸಿದ್ದತೆ ಕುರಿತು ಪರಿಶೀಲಿಸಿದರು   

ಶ್ರೀರಂಗಪಟ್ಟಣ: ತಾಲ್ಲೂಕಿನ ಕೆಆರ್‌ಎಸ್‌ ಅಣೆಕಟ್ಟೆ ಭರ್ತಿಯಾಗುವ ಹಂತ ತಲುಪಿದ್ದು, ಜುಲೈ 29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಬಾಗಿನ ಅರ್ಪಿಸಲಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ತಿಳಿಸಿದ್ದಾರೆ.

ಈ ಮೊದಲು ಜುಲೈ 27ಕ್ಕೆ ಜಲಾಶಯಕ್ಕೆ ಬಾಗಿನ ಅರ್ಪಿಸುವ ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಕಾರಣಾಂತರಗಳಿಂದ ಎರಡು ದಿನ ಮುಂದಕ್ಕೆ ಹಾಕಲಾಗಿದೆ. ಜುಲೈ 29ರಂದು ಬೆಳಿಗ್ಗೆ 11 ಗಂಟೆಗೆ ಬಾಗಿನ ಅರ್ಪಿಸಲು ಮುಹೂರ್ತ ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು ಬೆಂಗಳೂರಿನಿಂದ ಕೆಆರ್‌ಎಸ್‌ಗೆ ಹೆಲಿಕಾಪ್ಟರ್‌ನಲ್ಲಿ ಆಗಮಿಸಲಿದ್ದಾರೆ. ಮಂಡ್ಯ ಮತ್ತು ಮೈಸೂರು ಜಿಲ್ಲೆಯ ಶಾಸಕರು, ಜಲ ಸಂಪನ್ಮೂಲ ಇಲಾಖೆಯ ಉನ್ನತ ಅಧಿಕಾರಿಗಳು ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ADVERTISEMENT

‘ಬಾಗಿನ ಅರ್ಪಿಸುವ ವೇಳೆ ಜಲಾಶಯದಲ್ಲಿ ನೀರಿನ ಗರಿಷ್ಠ ಮಟ್ಟ (124.80)ವನ್ನು ಕಾಯ್ದುಕೊಳ್ಳಬೇಕು. ಹಾಗಾಗಿ ಮಂಗಳವಾರ ಸಂಜೆಯಿಂದ ಹೊರ ಹರಿವಿನ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ. ಸೋಮವಾರ 51,509 ಕ್ಯುಸೆಕ್‌ ಇದ್ದ ಹೊರ ಹರಿವಿನ ಪ್ರಮಾಣ ಮಂಗಳವಾರ ಸಂಜೆ ವೇಳೆಗೆ 11,827 ಕ್ಯುಸೆಕ್‌ಗೆ ಕುಸಿದಿದೆ. ಜಲಾಶಯಕ್ಕೆ ಸದ್ಯ 33,367 ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿ 123.15 ಅಡಿ (ಶೇ.95.39) ನೀರು ಸಂಗ್ರಹವಾಗಿದೆ’ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕುಮಾರ, ತಹಶೀಲ್ದಾರ್‌ ಪರಶುರಾಮ ಸತ್ತಿಗೇರಿ, ಕರ್ನಾಟಕ ಎಂಜಿನಿಯರಿಂಗ್‌ ಸಂಶೋಧನಾ ಕೇಂದ್ರ (ಕೆಇಆರ್‌ಎಸ್‌)ದ ನಿರ್ದೇಶಕ ಮಹೇಶ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್‌, ಮುಖ್ಯ ಎಂಜಿನಿಯರ್‌ ಆರ್‌.ಎಲ್‌. ವೆಂಕಟೇಶ್‌, ಅಧೀಕ್ಷಕ ಎಂಜಿನಿಯರ್‌ ರಘುರಾಮ್‌, ಕಾರ್ಯಪಾಲಕ ಎಂಜಿನಿಯರ್‌ ಜಯಂತ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳಾದ ಕಿಶೋರ್‌ಕುಮಾರ್‌, ಫಾರೂಕ್‌ ಅಬು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.