ಶ್ರೀರಂಗಪಟ್ಟಣ: ತಾಲ್ಲೂಕಿನ ಅಲ್ಲಾಪಟ್ಟಣ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡಿರುವ ತಮ್ಮ ಮನೆ ದೇವರು ಅನ್ನದಾನೇಶ್ವರ ದೇವಾಲಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದು, ಅಧಿಕಾರಿಗಳು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಅವರು, 'ಅನ್ನದಾನೇಶ್ವರ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ದೇವಾಲಯದ ಆವರಣದಲ್ಲಿ ಸ್ವಚ್ಛತೆ ಇರಬೇಕು. ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆಯಾಗಬೇಕು’ ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಕರ್ಷಕ ಜಾನಪದ ಕಲಾ ತಂಡಗಳನ್ನು ಕರೆಸಬೇಕು. ಪ್ರಸಾದ ವಿತರಣೆಗೂ ಸಿದ್ದತೆ ಆಗಬೇಕು. ಕಾರ್ಯಕ್ರಮಕ್ಕೆ ವಿವಿಧ ಗ್ರಾಮಗಳ ಸಾವಿರಾರು ಮಂದಿ ಪಾಲ್ಗೊಳ್ಳಲಿದ್ದು, ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು. ಸಿದ್ದತೆ ಕುರಿತು ಜಿಲ್ಲಾಧಿಕಾರಿ ಅವರ ಜತೆ ಚರ್ಚಿಸಿ ಎಂದು ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಅವರಿಗೆ ತಿಳಿಸಿದರು.
ಡಿವೈಎಸ್ಪಿ ಶಾಮತಮಲ್ಲಪ್ಪ, ಅನ್ನದಾನೇಶ್ವರ ದೇವಾಲಯ ಅಭಿವೃದ್ಧಿ ಟ್ರಸ್ಟ್‌ನ ನಾಗೇಶ್ ಬಿಲ್ವಾ, ಶಂಕರ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಎ.ಬಿ. ವೇಣು, ಎಇಇಗಳಾದ ಮಂಜುನಾಥ್, ಜಸವಂತ್, ಸಮಾಜ ಕಲ್ಯಾಣ ಅಧಿಕಾರಿ ಮೇಘ ಇತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.