ADVERTISEMENT

ಮಂಡ್ಯ | ಪ್ರಧಾನಿಯಿಂದ ಕಾಂಗ್ರೆಸ್‌ ಯೋಜನೆ ನಕಲು: ಎನ್‌.ಚಲುವರಾಯಸ್ವಾಮಿ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2025, 2:20 IST
Last Updated 20 ಆಗಸ್ಟ್ 2025, 2:20 IST
ಮಂಡ್ಯಲ್ಲಿ ನಡೆದ ಮಹಿಳಾ ಕಾಂಗ್ರೆಸ್‌  ಜಿಲ್ಲಾ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಉದ್ಘಾಟಿಸಿದರು
ಮಂಡ್ಯಲ್ಲಿ ನಡೆದ ಮಹಿಳಾ ಕಾಂಗ್ರೆಸ್‌  ಜಿಲ್ಲಾ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಉದ್ಘಾಟಿಸಿದರು   

ಮಂಡ್ಯ: ಗ್ಯಾರಂಟಿ ಯೋಜನೆ ವಿರೋಧಿಸುತ್ತಿದ್ದ ಬಿಜೆಪಿ ಮತ್ತು ಜೆಡಿಎಸ್‌ನವರೇ ಈ ಅದನ್ನು ಅನುಸರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ನ ಜನಪರ ಯೋಜನೆಗಳನ್ನು ಕಾಪಿ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.

ನಗರದ ಅಂಬೇಡ್ಕರ್‌ ಭವನದಲ್ಲಿ ಮಹಿಳಾ ಕಾಂಗ್ರೆಸ್‌ ಜಿಲ್ಲಾ ಘಟಕದಿಂದ ಭಾನುವಾರ ನಡೆದ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ರಾಜಕೀಯ ಕ್ಷೇತ್ರ ಸೇವಾ ಕ್ಷೇತ್ರವಾಗಿದ್ದು, ಗ್ರಾಮೀಣ ಭಾಗದಲ್ಲಿ ಸಮಸ್ಯೆಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳುವ ಹಾಗೆ ಕಾರ್ಯಕರ್ತರು ಮತ್ತು ಮುಖಂಡರು ಮಾಡಬೇಕಿದೆ. ಜಿಲ್ಲೆಯ ಏಳೂ ತಾಲ್ಲೂಕಿನಲ್ಲಿಯೂ ಮಹಿಳಾ ಕಾಂಗ್ರೆಸ್‌ ಚುರುಕಾಗಿ ಕೆಲಸ ಮಾಡುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ADVERTISEMENT

‘ವಿರೋಧ ಮಾಡುತ್ತಿದ್ದ ಬಿಜೆಪಿ ಮತ್ತು ಜೆಡಿಎಸ್‌ನವರೇ ಐದು ಗ್ಯಾರಂಟಿ ಯೋಜನೆಯನ್ನು ಅನುಸರಿಸುತ್ತಿದ್ದಾರೆ. 70 ವರ್ಷಗಳಲ್ಲಿಯೇ ಇಂತಹ ಯೋಜನೆಯನ್ನು ಯಾರೂ ನೀಡಿರಲಿಲ್ಲ. ₹56 ಸಾವಿರ ಕೋಟಿಯನ್ನು ಗ್ಯಾರಂಟಿ ಯೋಜನೆಗೆ ಖರ್ಚು ಮಾಡುತ್ತಾ ಬಂದಿದ್ದೇವೆ’ ಎಂದರು.

‘ಜಿಲ್ಲೆಯಲ್ಲಿ ಎಸ್‌.ಎಂ.ಕೃಷ್ಣ ಅವರ ಕಾಲದಿಂದಲೂ ಮಹಿಳೆಯರನ್ನು ಗುರುತಿಸುತ್ತಾ ಬಂದಿದ್ದೇವೆ. ಕಾಂಗ್ರೆಸ್‌ ಅಧಿಕಾರದ ಅವಧಿಯಲ್ಲಿ ಮೋಟಮ್ಮ ಅವರು ಸಚಿವರಾಗಿದ್ದಾಗ ಸ್ವಸಹಾಯ ಸಂಘಗಳನ್ನು ಪ್ರಾರಂಭ ಮಾಡಲಾಯಿತು. ಬಡ್ಡಿ ಇಲ್ಲದೇ ಮಹಿಳೆಯರಿಗೆ ಸಾಲ ನೀಡಲಾಯಿತು’ ಎಂದು ಹೇಳಿದರು.

ಕಾಂಗ್ರೆಸ್‌ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಎಚ್‌.ಬಿ.ಶುಭದಾಯಿನಿ, ‘ಸಿಕ್ಕಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುತ್ತೇನೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸದಿಂದ ಪಡೆದ ಅಧಿಕಾರವನ್ನು ಕಾಂಗ್ರೆಸ್ ಪಕ್ಷ ಸಂಘಟನೆಗೆ ಬಳಸಿಕೊಳ್ಳುತ್ತೇನೆ’ ಎಂದರು.

ಮಾಜಿ ಅಧ್ಯಕ್ಷೆ ಅಂಜನಾ ಶ್ರೀಕಾಂತ್‌, ‘ಎಂಟೂವರೆ ವರ್ಷದಿಂದ ಕಾಂಗ್ರೆಸ್‌ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ದುಡಿದಿರುವ ಸಮಾಧಾನವಿದೆ. ಪಕ್ಷಕ್ಕೆ ದುಡಿದಿದ್ದೇನೆ, ಮುಂದೆಯೂ ದುಡಿಯುತ್ತೇನೆ’ ಎಂದು ಹೇಳಿದರು.

ಶಾಸಕ ಪಿ.ರವಿಕುಮಾರ್‌ಗೌಡ ಅಧ್ಯಕ್ಷತೆ ವಹಿಸಿದ್ದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಘಟಕದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಕಾಂಗ್ರೆಸ್‌ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾರೆಡ್ಡಿ, ಮೈಷುಗರ್‌ ಅಧ್ಯಕ್ಷ ಸಿ.ಡಿ.ಗಂಗಾಧರ, ಮುಖಂಡರಾದ ರಾಹುಲ್‌ ಜಾರಕಿಹೊಳಿ, ಹಾಲಹಳ್ಳಿ ರಾಮಲಿಂಗಯ್ಯ, ಅಪ್ಪಾಜಿ, ವಿಜಯಲಕ್ಷ್ಮಿ ರಘುನಂದನ್‌, ಎಂ.ಎಸ್‌.ಚಿದಂಬರ್‌, ಹೆಮ್ಮಿಗೆ ಸಿದ್ದಪ್ಪ, ಗೀತಾ ದಾಸೇಗೌಡ, ಸುನೀತಾ ರಾಜೇಶ್‌, ಶೈಲೇಂದ್ರ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.