ADVERTISEMENT

ಜಗಜೀವನ ರಾಂ ಭವನ ನಿರ್ಮಾಣ: ಚಲುವರಾಯಸ್ವಾಮಿ ಭರವಸೆ

ಜಿಲ್ಲೆಯಲ್ಲಿ ಹಸಿರು ಕ್ರಾಂತಿಯ ಹರಿಕಾರನ ಸ್ಮರಣೆ; ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2025, 12:30 IST
Last Updated 5 ಏಪ್ರಿಲ್ 2025, 12:30 IST
ಮಂಡ್ಯ ನಗರದ ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಾಬು ಜಗಜೀವನ್ ರಾಂ ಅವರ ಚರ್ಚಾ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಇದ್ದಾರೆ
ಮಂಡ್ಯ ನಗರದ ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಾಬು ಜಗಜೀವನ್ ರಾಂ ಅವರ ಚರ್ಚಾ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಇದ್ದಾರೆ   

ಮಂಡ್ಯ: ‘ಜಿಲ್ಲೆಯಲ್ಲಿ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಭವನವನ್ನು ₹ 3.80 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಭರವಸೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶನಿವಾರ ನಗರದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಡಾ.ಬಾಬು ಜಗಜೀವನ ರಾಂ 118ನೇ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮಹನೀಯರ ಬಗ್ಗೆ ಯುವ ಪೀಳಿಗೆಗೆ ಅರಿವು ಮೂಡಿಸುವ ಸಲುವಾಗಿ ಅನೇಕ ಸಾಧಕರ ಜಯಂತಿ ಆಚರಿಸಿಕೊಂಡು ಬರಲಾಗುತ್ತಿದೆ. 1935ರಲ್ಲಿ ಅಖಿಲ ಭಾರತ ಶೋಷಿತ ಸಮುದಾಯಗಳ ಹೋರಾಟ ಸಮಿತಿಯನ್ನು ರಚಿಸಿ ಅಸ್ಪೃಶ್ಯತೆ ವಿರುದ್ಧ ಹೋರಾಡಿದವರೂ ಬಾಬು ಜಗಜೀವನ ರಾಂ. ಹಾಗಾಗಿ ಅವರ ಹೆಸರನ್ನು ಚಿರಸ್ಥಾಯಿಗೊಳಿಸಲು ಭವನ ನಿರ್ಮಿಸಲಾಗುತ್ತಿದ್ದು, ಅನುದಾನ ಕೊರತೆ ಆದರೆ ಹೆಚ್ಚುವರಿ ಅನುದಾನ ಪಡೆದು ನಿರ್ಮಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

‘ಬಾಬು ಜಗಜೀವನ ರಾಂ ಅವರು ಸುದೀರ್ಘ 30 ವರ್ಷಗಳ ಕಾಲ ಕೇಂದ್ರ ಮಂತ್ರಿಗಳಾಗಿದ್ದರು. ನಂತರ ಭಾರತದ ಉಪ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ತಮ್ಮ ವೃತ್ತಿ ಜೀವನದುದ್ದಕ್ಕೂ ದೇಶದ ಅಭಿವೃದ್ಧಿಗೆ, ಶೋಷಿತರ ಏಳಿಗೆಗಾಗಿ ಶ್ರಮಿಸಿದವರು. ಇವರು ಯಾವುದೋ ಒಂದು ಸಮಾಜಕ್ಕೆ ಸೀಮಿತವಾಗಿರಲಿಲ್ಲ’ ಎಂದರು.

‘ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ, ಬಿ.ಆರ್‌.ಅಂಬೇಡ್ಕರ್, ಅವರಂತಹ ಮಹನೀಯರು ಹೇಳಿದಂತೆ ಇವತ್ತಿಗೂ ಭಾರತ ಜ್ಯಾತ್ಯಾತೀತ ರಾಷ್ಟ್ರವಾಗಿದೆ. ನಮ್ಮ ಸರ್ಕಾರ ಜಾರಿಗೆ ತಂದ 5 ಗ್ಯಾರಂಟಿ ಯೋಜನೆಯು ರಾಜ್ಯದ ಪ್ರತಿ ಮನೆಗೂ ತಲುಪುತ್ತಿದೆ. ಹಾಲಿನ ಮೇಲಿನ ಹೆಚ್ಚುವರಿಯಾಗಿ ನಿಗದಿ ಪಡಿಸಿರುವ ₹4 ಅನ್ನು ರೈತರಿಗೆ ನೀಡಲಾಗುತ್ತಿದೆ. ಸಾರ್ವಜನಿಕರು ಯಾರ ಆಡಳಿತ ಅವಧಿಯಲ್ಲಿ ದೇಶದ ಅಭಿವೃದ್ಧಿ ಹಾಗೂ ಜನರಿಗೆ ಶಕ್ತಿ ತುಂಬುವಂತಹ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಶಾಸಕ ಪಿ.ರವಿಕುಮಾರ್ ಮಾತನಾಡಿ, ‘ಬಾಬು ಜಗಜೀವನ ರಾಂ ಅವರು, ಬಾಂಗ್ಲಾ ವಿಮೋಚನೆಯ ಸಂದರ್ಭದಲ್ಲಿ ದೇಶದಲ್ಲಿ ಉದ್ಭವಿಸಿದ ಆಹಾರ ಕೊರತೆಯಿಂದ ಸಾರ್ವಜನಿಕರು ತತ್ತರಿಸುತ್ತಿದ್ದಾಗ ಸರ್ಕಾರಿ ಮತ್ತು ಖಾಸಗಿ ಗೋದಾಮುಗಳಲ್ಲಿ ಶೇಖರಿಸಿ ಇಡಲಾಗಿದ್ದ ಆಹಾರ ಧಾನ್ಯಗಳನ್ನು ದೇಶದ ಜನತೆಗೆ ನೀಡಿ ಹಸಿವು ನೀಗಿಸಿದ ಮಹಾನ್ ಚೇತನ, ರಾಜಕೀಯ ಮುತ್ಸದ್ಧಿ’ ಎಂದು ಶ್ಲಾಘಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಾಗೂ ಬಾಬು ಜಗಜೀವನ್ ರಾಂ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಚರ್ಚಾ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮೈಷುಗರ್ ಕಾರ್ಖಾನೆಯ ಅಧ್ಯಕ್ಷ ಸಿ.ಡಿ.ಗಂಗಾಧರ, ಮುಡಾ ಅಧ್ಯಕ್ಷ ನಯೀಮ್, ಜಿಲ್ಲಾಧಿಕಾರಿ ಕುಮಾರ, ಜಿ.ಪಂ. ಸಿಇಒ ಕೆ.ಆರ್.ನಂದಿನಿ, ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸಹಾಯಕ ಪ್ರಾಧ್ಯಾಪಕ ಮಂಜು, ಡಾ.ಬಾಬು ಜಗಜೀವನ ರಾಂ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್.ಚಂದ್ರ, ಮುಖಂಡರಾದ ಎಲ್.ಸಂದೇಶ್, ಕೃಷ್ಣ, ಸಿ.ಕೆ.ಪಾಪಯ್ಯ ಭಾಗವಹಿಸಿದ್ದರು.

₹3.80 ಲಕ್ಷ ವೆಚ್ಚದಲ್ಲಿ ಭವನ ನಿರ್ಮಾಣ ಅಸ್ಪೃಶ್ಯತೆ ವಿರುದ್ಧ ಹೋರಾಡಿದ ಮಹನೀಯರು ಜಾತ್ಯಾತೀತ ದೇಶ ಭಾರತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.