ಮಂಡ್ಯ: ಜಿಲ್ಲೆಯ ಗಾಯಕ, ಗಾಯಕಿಯರು ಗಾಯನ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ತಿಳಿಸಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಆಯೋಜಿಸಿದ್ದ ‘ಹಾಡಿರೇ ರಾಗಗಳ-ತೂಗಿರೇ ದೀಪಗಳ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯ ಯುವ ಗಾಯಕರು, ಗಾಯಕಿಯರು ತಮ್ಮ ಪ್ರತಿಭೆಗಳ ಮೂಲಕ ಸಿನಿಮಾ ರಂಗ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹೆಸರು ಮಾಡಿ ಜಿಲ್ಲೆಗೆ ಮಾದರಿಯಾಗಬೇಕು ಎಂದರು.
ಜಿಲ್ಲೆಯಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಾಡಲು ಅವಕಾಶ ಸಿಗದ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ಸಲುವಾಗಿ ಈ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದು ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಲಾವಿದರು ಇಂತಹ ವೇದಿಕೆಯನ್ನು ಸದುಪಯೋಗ ಪಡೆದುಕೊಳ್ಳಬೇಕು. ಇನ್ನೂ ಹೆಚ್ಚಿನ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮೂಲಕ ಚಿತ್ರ ಗೀತೆಗಳ ಜತೆಗೆ ಶರಣರ, ದಾಸರ ಗೀತೆಗಳನ್ನು ಹಾಗೂ ವಚನಕಾರರ ವಚನಗಳನ್ನು ಹಾಡಿರಿ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಾಯಕ, ಗಾಯಕಿಯರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಂದೀಶ್ ಮುಂತಾದವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.