ADVERTISEMENT

ಗುರಿ ಸಾಧಿಸದ ಮುಖ್ಯಸ್ಥರಿಗೆ ನೋಟಿಸ್‌: ಜಿಲ್ಲಾಧಿಕಾರಿ ಎಚ್ಚರಿಕೆ

ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ: ಜಿಲ್ಲಾಧಿಕಾರಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2024, 13:57 IST
Last Updated 10 ಸೆಪ್ಟೆಂಬರ್ 2024, 13:57 IST
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ಕುಮಾರ ಅಧ್ಯಕ್ಷತೆಯಲ್ಲಿ ನಡೆಯಿತು 
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ಕುಮಾರ ಅಧ್ಯಕ್ಷತೆಯಲ್ಲಿ ನಡೆಯಿತು    

ಮಂಡ್ಯ: ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಈ ಹಿಂದೆ ಎರಡು ಅಥವಾ ಮೂರು ಬಾರಿ ಪ್ರಗತಿ ಪರಿಶೀಲನೆ ಸಭೆ ನಡಸಿ ಪ್ರಗತಿ ಸಾಧಿಸಲು ಸೂಚನೆ ನೀಡಲಾಗಿತ್ತು. ಆದರೆ ನಿಗದಿಪಡಿಸಿದ ಗುರಿ ಸಾಧಿಸದ ಮುಖ್ಯಸ್ಥರಿಗೆ ನೋಟಿಸ್‌ ಜಾರಿ ಮಾಡುವಂತೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಕುಮಾರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಸಾರ್ವಜನಿಕ ಕೆಲಸಕ್ಕಾಗಿ ಬಿಡುಗಡೆಯಾಗುವ ಅನುದಾನ ಸಂಪೂರ್ಣವಾಗಿ ಪಾರದರ್ಶಕವಾಗಿ ವೆಚ್ಚವಾಗಬೇಕು ಎಂದರು.

ಕುಡಿಯುವ ನೀರಿನ ಪರೀಕ್ಷೆ ನಿಯಮಿತವಾಗಿ ನಡೆಸಬೇಕು. ಪರೀಕ್ಷೆಯ ವರದಿಯನ್ನು ಪಡೆದುಕೊಳ್ಳಬೇಕು. ಕಲುಷಿತ ನೀರಿನಿಂದ ಯಾವುದಾದರೂ ತೊಂದರೆಯಾದಲ್ಲಿ ನಗರ ಸ್ಥಳೀಯ ಸಂಸ್ಥೆಯ ಮುಖ್ಯಸ್ಥರನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದರು.

ADVERTISEMENT

‘ಸ್ವಚ್ಛತೆಯೇ ಸೇವೆ’ ಆಂದೋಲನವನ್ನು ಸೆ.15ರಿಂದ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಶೌಚಾಲಯಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಉದ್ಘಾಟನೆಗೊಳಿಸಿದರೆ ಅರ್ಥಪೂರ್ಣವಾಗಿರುತ್ತದೆ ಎಂದರು.

ಸರ್ಕಾರದಿಂದ ಒದಗಿಸಲಾಗುತ್ತಿರುವ ಸೌಲಭ್ಯಗಳಿಗೆ ಆಸ್ತಿ ತೆರಿಗೆಯನ್ನು ಕಟ್ಟಿಸಿಕೊಳ್ಳಲಾಗುತ್ತಿದೆ. ಆಸ್ತಿ ತೆರಿಗೆಯ ಪ್ರಗತಿ ಶೇ 56ರಷ್ಟಿದ್ದು ಸಂಗ್ರಹಣೆಯ ಕೆಲಸ ಚುರುಕುಗೊಳಿಸಬೇಕು ಎಂದರು.

ಪೈಪ್‌ಲೈನ್‌ ಮೂಲಕ ಅಡುಗೆ ಅನಿಲ ವಿತರಣೆ ಯೋಜನೆಯನ್ನು ಅನುಷ್ಠಾನಗೊಳಿಸುವ ಕಾಮಗಾರಿಗೆ ಎ.ಜಿ. ಅಂಡ್ ಪಿ ಪ್ರಥಮ್ ಸಂಸ್ಥೆಯವರು ಮಂಡ್ಯ ನಗರಸಭೆಯಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದರು.

‘ಮಂಡ್ಯ ನಗರ ಪ್ರದೇಶದಲ್ಲಿ ಪೈಪ್ ಲೈನ್ ಮೂಲಕ ಅಡುಗೆ ಅನಿಲ ವಿತರಣೆ ಯೋಜನೆಯಡಿ 6500 ಸಂಪರ್ಕ ನೀಡುವ ಗುರಿ ಹೊಂದಿದ್ದು, ಶೀಘ್ರದಲ್ಲೇ ಮಂಡ್ಯ ನಗರಸಭೆಯ ಎರಡು ವಾರ್ಡ್‌ಗಳಿಗೆ ಒದಗಿಸಲು ಯೋಜಿಸಲಾಗಿದೆ’ ಎಂದು ಎ.ಜಿ.ಅಂಡ್ ಪಿ ಪ್ರಥಮ್ ಸಂಸ್ಥೆಯ ಉಪವಲಯ ಮುಖ್ಯಸ್ಥರು ಸಭೆಗೆ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಪೈಪ್ ಲೈನ್ ಮೂಲಕ ಅಡುಗೆ ಅನಿಲ ವಿತರಣೆಯ ಅನುಕೂಲತೆಯ ಬಗ್ಗೆ ಸಂಸ್ಥೆಯವರು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಕಾಮಗಾರಿ ನಡೆಯುವ ಸಂದರ್ಭದಲ್ಲಿ ಮಂಡ್ಯ ನಗರಸಭೆಯೊಂದಿಗೆ ನಿರಂತರವಾಗಿ ಸಂಸ್ಥೆಯ ಅಧಿಕಾರಿಗಳು ಸಂಪರ್ಕದಲ್ಲಿರಬೇಕು. ಸ್ಥಳೀಯವಾಗಿ ಒಬ್ಬ ಅಧಿಕಾರಿಯನ್ನು ನಿಯೋಜಿಸಬೇಕು ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷರಾ ಮಣಿ, ಎ.ಜಿ.ಅಂಡ್ ಪಿ ಪ್ರಥಮ್ ಸಂಸ್ಥೆಯ ಸಂಜಿತ್, ಚರಣ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.