ಮಳವಳ್ಳಿ: ತಮಿಳುನಾಡು ರಾಜ್ಯ ಘಟಕದ ಬಿಎಸ್‌ಪಿ ಅಧ್ಯಕ್ಷ ಕೆ.ಅರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಹುಜನ ಸಮಾಜ ಪಾರ್ಟಿಯ ತಾಲ್ಲೂಕು ಘಟಕದ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ತಾಲ್ಲೂಕು ಕಚೇರಿಯ ಮುಂಭಾಗ ರಾಜ್ಯ ಘಟಕದ ಸಂಯೋಜಕ ಎಂ.ಕೃಷ್ಣಮೂರ್ತಿ ನೇತೃತ್ವದಲ್ಲಿ ಜಮಾಯಿಸಿದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಎಂ.ಕೃಷ್ಣಮೂರ್ತಿ ಮಾತನಾಡಿ, ‘ತಮಿಳುನಾಡಿನಲ್ಲಿ ಕೆ.ಅರ್ಮ್‌ಸ್ಟ್ರಾಂಗ್ ಅವರ ಹತ್ಯೆ ಉದ್ದೇಶಪೂರ್ವಕವಾಗಿಯೇ ನಡೆದಿದ್ದು, ಇಂಥ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಇಲ್ಲದಿದ್ದರೆ ಕೃತ್ಯದ ಹಿಂದೆ ಡಿಎಂಕೆ ಸರ್ಕಾರದ ಕೈವಾಡದ ಅನುಮಾನ ಕಾಡುತ್ತದೆ ಎಂದು ಆರೋಪಿಸಿದರು.
‘ರಾಜ್ಯದ ಕಾಂಗ್ರೆಸ್ ಸರ್ಕಾರ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯ ₹25 ಸಾವಿರ ಕೋಟಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವುದು ಸರಿಯಲ್ಲ. ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಅನ್ಯ ಕಾರ್ಯಕ್ಕೆ ಬಳಕೆ ಮಾಡಿಕೊಂಡಿರುವುದು ದಲಿತರಿಗೆ ಮಾಡಿರುವ ಅನ್ಯಾಯವಾಗಿದೆ. ಮೀಸಲು ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದಿರುವ ಶಾಸಕರು ಇಂತಹ ವಿಷಯಗಳ ಬಗ್ಗೆ ಧ್ವನಿ ಎತ್ತಿ ನ್ಯಾಯ ಒದಗಿಬೇಕು. ಇಲ್ಲದಿದ್ದರೇ ರಾಜೀನಾಮೆ ಕೊಟ್ಟು ಹೋರಾಟದ ನಡೆಸಬೇಕು ಎಂದು ಆಗ್ರಹಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಘಟಕದ ಕಾರ್ಯದರ್ಶಿ ಉಸ್ತುವಾರಿ ವೀರಭದ್ರಯ್ಯ, ತಾಲ್ಲೂಕು ಘಟಕದ ಅಧ್ಯಕ್ಷ ನಂಜುಂಡಸ್ವಾಮಿ, ಮುಖಂಡರಾಧ ಉಮೇಶ್ ಮೌರ್ಯ ವೆಂಕಟೇಶ್, ಸಿದ್ದಯ್ಯ, ಗೋವಿಂದರಾಜ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.