ಮಳವಳ್ಳಿ: ತಾಲ್ಲೂಕಿನ ಸರ್ಕಾರಿ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಸರ್ಕಾರದಿಂದ ವಿಶೇಷ ಅನುದಾನ ತರುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿ ಕೆಲಸ ಮಾಡಲಾಗುತ್ತಿದೆ ಎಂದು ಶಾಸಕ ಪಿ.ಎಂ. ನರೇಂದ್ರಸ್ವಾಮಿ ತಿಳಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯತಿಯ ಶಾಸಕರ ಕಚೇರಿಯಲ್ಲಿ ಮಾರೇಹಳ್ಳಿ ಸರ್ಕಾರಿ ಆದರ್ಶ ವಿದ್ಯಾಲಯದ ನೂತನ ಶಾಲಾಭಿವೃದ್ಧಿ ಸಮಿತಿಯಿಂದ ನಡೆದ ಅಭಿನಂದನೆ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುವ ನಿಟ್ಟಿನಲ್ಲಿ ವಿಶೇಷ ಕಾಳಜಿಯೊಂದಿಗೆ ಕೆಲಸ ಮಾಡಲಾಗುತ್ತಿದೆ. ಪಟ್ಟಣದ ಕೇಂದ್ರ ಸ್ಥಾನದಲ್ಲಿ ಪದವಿವರೆಗಿನ ಶಿಕ್ಷಣ ಒಂದೆಡೆ ದೊರೆಯುವಂತೆ ಮಾಡಲು ಯೋಜನೆ ರೂಪಿಸಲಾಗಿದೆ. ಜತೆಗೆ ಸಾಕಷ್ಟು ವಸತಿ ಶಾಲೆಗಳನ್ನು ತರಲಾಗಿದೆ. ತಂತ್ರಜ್ಞಾನದ ಶಿಕ್ಷಣಕ್ಕೂ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಮಾರೇಹಳ್ಳಿ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲು ನಿರ್ಧರಿಸಿದೆ. ನೂತನ ಶಾಲಾಭಿವೃದ್ಧಿ ಸಮಿತಿ ಪೋಷಕರ ಸಹಕಾರದೊಂದಿಗೆ ಶಾಲಾಭಿವೃದ್ಧಿಗೆ ಮುಂದಾಗಲಿ ಎಂದು ಆಶಿಸಿದರು.
ಎಸ್‌ಡಿಎಂಸಿ ಅಧ್ಯಕ್ಷ ಟಿ.ಎಂ. ಪ್ರಕಾಶ್, ಉಪಾಧ್ಯಕ್ಷೆ ಕವಿತಾ, ಟಿಎಪಿಸಿಎಂಎಸ್ ನಿರ್ದೇಶಕ ಎಂ. ಲಿಂಗರಾಜು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.