
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ವರ್ಷಗಳ ಸಾರ್ಥಕ ಪಯಣದ ಹಿನ್ನೆಲೆಯಲ್ಲಿ ಮಂಡ್ಯ ವಿಶ್ವವಿದ್ಯಾಲಯದ ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ ‘ಸುವರ್ಣ ಮಹೋತ್ಸವ’
ಮಂಡ್ಯ: ‘ಜಿಲ್ಲೆಯಲ್ಲಿನ ಮಕ್ಕಳು ಮತ್ತು ವಿದ್ಯಾರ್ಥಿಗಳಿಗೆ ಪರಿಸರ ಮಾಲಿನ್ಯದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಬಹಳ ಅಗತ್ಯ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ವರ್ಷಗಳ ಸಾರ್ಥಕ ಪಯಣದ ಹಿನ್ನೆಲೆಯಲ್ಲಿ ಮಂಡ್ಯ ವಿಶ್ವವಿದ್ಯಾಲಯದ ಮೈದಾನದಲ್ಲಿ ಮಂಗಳವಾರ ಆಯೋಜಿಸಿದ್ದ ‘ಸುವರ್ಣ ಮಹೋತ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
‘ಪರಿಸರ ಮಾಲಿನ್ಯದಿಂದಾಗುವ ದುಷ್ಪರಿಣಾಮ ಕುರಿತು ಅರಿವು ಮೂಡಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯದಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ನಿಮ್ಮ ಸುತ್ತಲಿನ ವಾತಾವರಣವನ್ನು ಶುದ್ಧವಾಗಿರಿಸಿಕೊಂಡು ಇತರರಿಗೂ ಪರಿಸರ ಮಾಲಿನ್ಯದ ಅರಿವು ಮೂಡಿಸಬೇಕು’ ಎಂದು ಸಲಹೆ ನೀಡಿದರು.
ನೀರಿನ ಗುಣಮಟ್ಟ ಮಾಪನ:
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ ನರೇಂದ್ರಸ್ವಾಮಿ ಮಾತನಾಡಿ, ‘ಪ್ರತಿ ತಿಂಗಳು ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಕಾವೇರಿ ನದಿ ಮತ್ತು ಇದರ ಉಪ ನದಿಗಳ ನೀರಿನ ಗುಣಮಟ್ಟವನ್ನು ಮಾಪನ ಮಾಡಿ ನೀರಿನ ಗುಣಮಟ್ಟವನ್ನು ಪ್ರಾದೇಶಿಕ ಪ್ರಯೋಗಾಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ’ ಎಂದು ತಿಳಿಸಿದರು.
ಆಲೆಮನೆಗಳಲ್ಲಿ ಹಿಂದೆ ಕಬ್ಬಿನ ಸಿಪ್ಪೆಯನ್ನು ಉರುವಲಾಗಿ ಬಳಸಲಾಗುತ್ತಿತ್ತು. ಈಗ ಹಳೆಯ ಟೈರ್, ರಬ್ಬರ್ ಸೇರಿದಂತೆ ಹೊಗೆಯನ್ನು ಹೊರಸೂಸುವ ವಸ್ತುಗಳನ್ನು ಯಥೇಚ್ಛವಾಗಿ ಬಳಸಲಾಗುತ್ತಿದೆ. ಇದರಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು, ಈ ಬಗ್ಗೆ ಬೆಲ್ಲ ಉತ್ಪಾದಕರು, ರೈತರು ಜಾಗೃತರಾಗಬೇಕಾಗಿದೆ ಎಂದು ಸಲಹೆ ನೀಡಿದರು.
‘ಮಂಡ್ಯ ಜಿಲ್ಲೆಯಲ್ಲಿನ ಬೃಹತ್, ಮಧ್ಯಮ ಮತ್ತು ಸಣ್ಣ ಕಾರ್ಖಾನೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ಸಂಸ್ಕರಿಸಲು ಶುದ್ಧೀಕರಣ ಘಟಕವನ್ನು ಅಳವಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಕಾರ್ಖಾನೆಯ ಆವರಣದಿಂದ ತ್ಯಾಜ್ಯ ನೀರನ್ನು ಹೊರ ಹೋಗದಂತೆ ನಿರ್ಬಂಧ ವಿಧಿಸಲಾಗುತ್ತಿದೆ’ ಎಂದು ವಿವರಿಸಿದರು.
ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ಪ್ರದಾನ:
ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆಗೆ ಅಮೂಲ್ಯ ಕೊಡುಗೆ ನೀಡಿರುವ ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಸಂಸ್ಥಾಪಕ ಮಂಗಲ ಎಂ.ಯೋಗೀಶ್, ಪ್ಲಾಸ್ಟಿಕ್ ವಿರೋಧಿ ಪರಿಸರ ಮಿತ್ರ ಗೊರವಾಲೆ ಜಯಶಂಕರ್, ಸಾಲುಮರದ ಸಿ.ನಾಗರಾಜು ಅವರಿಗೆ ‘ಇಂದಿರಾ ಪ್ರಿಯದರ್ಶಿನಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ದಿನೇಶ್ ಗೂಳೀಗೌಡ, ಮೈಸೂರು ಸಕ್ಕರೆ ಕಂಪನಿ ಅಧ್ಯಕ್ಷ ಸಿ.ಡಿ ಗಂಗಾಧರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ನಹೀಂ, ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಪಾಲ್ಗೊಂಡಿದ್ದರು.
‘ಪ್ಯಾಡ್ ಮುಕ್ತ ಜಿಲ್ಲೆಯಾಗಿಸಿ
’ ‘ಮಹಿಳೆಯರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಪರಿಸರದ ಹಿತದೃಷ್ಟಿಯಿಂದ ಜಿಲ್ಲೆಯನ್ನು ಪ್ಯಾಡ್ ಮುಕ್ತ ಜಿಲ್ಲೆಯನ್ನಾಗಿಸಲು ಮಹಿಳೆಯರಿಗೆ ‘ಮುಟ್ಟಿನ ಕಪ್’ ನೀಡಲಾಗುತ್ತಿದೆ. ಜಿಲ್ಲೆಯಲ್ಲಿನ ಪ್ರತಿಯೊಬ್ಬ ಮಹಿಳೆಯರಿಗೂ ಮುಟ್ಟಿನ ಕಪ್ ವಿತರಿಸುವಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ’ ಎಂದು ಸಚಿವ ಎನ್.ಚಲುವರಾಯಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕೃಷಿ ಸಖಿ ಆಶಾ ಕಾರ್ಯಕರ್ತೆಯರು ಹಾಗೂ ಶಾಲಾ ಶಿಕ್ಷಕಿಯರಿಗೆ ಸಾಂಕೇತಿಕವಾಗಿ ಮುಟ್ಟಿನ ಕಪ್ ವಿತರಿಸಲಾಯಿತು.
ಕಾವೇರಿ ನದಿ ಉಳಿಸಿ: ರವಿಕುಮಾರ್ ಶಾಸಕ ಪಿ.ರವಿಕುಮಾರ್ ಮಾತನಾಡಿ ‘ಮಂಡ್ಯ ಜಿಲ್ಲೆಯ ಜೀವನದಿ ಕಾವೇರಿಯು ಕಲುಷಿತವಾಗುತ್ತಿದೆ. ನದಿ ದಂಡೆಯಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್ ಹೋಟೆಲ್‌ಗಳಿಂದ ನೀರು ಮಲಿನಗೊಳ್ಳುತ್ತಿದೆ. ಇವುಗಳ ವಿರುದ್ಧ ಪ್ರಕರಣ ದಾಖಲಿಸಬೇಕು. ಪರಿಸರ ಮಾಲಿನ್ಯ ಮಂಡಳಿ ಅಧ್ಯಕ್ಷರು ಕಾವೇರಿ ನದಿ ಉಳಿಸಲು ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ ‘ಮೈಷುಗರ್ ಸಕ್ಕರೆ ಕಾರ್ಖಾನೆ ವಿರುದ್ಧ ಮಂಡಳಿಗೆ ದೂರು ಬಂದಿದೆ. ನೀವು ಮೊಲಾಸಿಸ್ ಅನ್ನು ಹೊರಗೆ ಬಿಟ್ಟಿದ್ದು ನಾಲೆಗಳ ಮೂಲಕ ನದಿ ಕಲುಷಿತವಾಗುತ್ತಿದೆ. ಇದರಿಂದ ಜಲಚರಗಳು ಸಾಯುತ್ತಿವೆ. ಇದನ್ನು ಸರಿಪಡಿಸಿಕೊಳ್ಳಿ ಇಲ್ಲದಿದ್ದರೆ ಮಂಡಳಿ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.