ಮಂಡ್ಯ: ಸಿಎಲ್–7 ಸನ್ನದು ಮಂಜೂರಾತಿಗಾಗಿ ಅರ್ಜಿದಾರರಿಗೆ ₹60 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಜಿಲ್ಲೆಯ ಅಬಕಾರಿ ಉಪ ಆಯುಕ್ತ ಆರ್.ನಾಗಶಯನ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ.
ಭ್ರಷ್ಟಾಚಾರ ಆರೋಪದ ಮೇರೆಗೆ ಅಬಕಾರಿ ಸಚಿವರ ರಾಜೀನಾಮೆಗೆ ವಿರೋಧ ಪಕ್ಷದ ಮುಖಂಡರು ಒತ್ತಾಯಿಸುತ್ತಿರುವ ಸಂದರ್ಭದಲ್ಲೇ ಅಬಕಾರಿ ಉಪ ಆಯುಕ್ತರ ಅಮಾನತು ಆದೇಶ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
2025ರ ಆಗಸ್ಟ್ ತಿಂಗಳಲ್ಲಿ ಸುಂದರ್ ಎಂಬುವವರಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಾಗಶಯನ ಅವರ ಧ್ವನಿಯೆಂದು ಹೇಳಲಾದ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಶಿಸ್ತುಕ್ರಮ ಜರುಗಿಸುವ ಸಂಬಂಧ ಅಬಕಾರಿ ಆಯುಕ್ತರ ಕಚೇರಿಯಿಂದ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು.
ಆರೋಪಿತ ಅಧಿಕಾರಿ ನೀಡಿದ ಸಮಜಾಯಿಷಿ ಪರಿಶೀಲಿಸಲಾಗಿ, ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪವು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
ಅಮಾನತ್ತಿನ ಅವಧಿಯಲ್ಲಿ ನಾಗಶಯನ ಅವರನ್ನು ಬೆಳಗಾವಿ ದಕ್ಷಿಣ, ಬೆಳಗಾವಿ ಜಿಲ್ಲೆಗೆ ವರ್ಗಾಯಿಸಿ ಆದೇಶಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.