ಪಾಂಡವಪುರ: ‘ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳೇ ಇಲ್ಲ ಎಂದು ಸುಮ್ಮನಿರುವುದು ಬೇಡ. ಈ ವಿಚಾರದಲ್ಲಿ ಸದಾ ನಿಗಾವಹಿಸುತ್ತಿರಬೇಕು’ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಆರೋಗ್ಯಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯಾಲಯ ಶನಿವಾರ ಆಯೋಜಿಸಿದ್ದ ‘ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ’ (ಕೆಡಿಪಿ)ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಖಾಸಗಿ ಕ್ಲಿನಿಕ್‌ಗಳು ಮತ್ತು ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ನಿಗಾ ವಹಿಸಬೇಕು. ಗರ್ಭಿಣಿಯರು ಹುಟ್ಟುವ ಮಗು ಹೆಣ್ಣೋ, ಗಂಡೊ ಎಂದು ತಿಳಿದುಕೊಂಡ ಬಳಿಕವೇ ತಾಯಿ ಮಗು ಕಾರ್ಡ್ ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಇದೆ. ಹಾಗಾಗಿ ನಮ್ಮ ಜಿಲ್ಲೆಯ ಜತೆಗೆ ಹೊರ ಜಿಲ್ಲೆಗಳಲ್ಲಿಯೂ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ನಿಗಾವಹಿಸುವ ಅಗತ್ಯವಿದೆ. ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಅರಿವು ಜಾಗೃತಿ ಮೂಡಿಸುವ ಕಾರ್ಯಕ್ರಮ ರೂಪಿಸಬೇಕು. ಪೊಲೀಸ್ ಅಧಿಕಾರಿಗಳು, ಟಿಎಚ್‌ಒ, ಸಿಡಿಪಿಒ ಜೊತೆಗೂಡಿ ಕೆಲಸ ಮಾಡಬೇಕು ಎಂದು ಸೂಚಿಸಿದರು.
ತಾಲ್ಲೂಕಿನಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಮತ್ತು ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಕ್ರಮವಹಿಸಬೇಕಿದೆ. ಸೌಲಭ್ಯಗಳಲ್ಲಿದ ಶಾಲೆಗಳ ಪಟ್ಟಿ ನೀಡಿದರೆ, ಕ್ರಮ ಕೈಗೊಳ್ಳುತ್ತೇನೆ ಎಂದು ಬಿಇಒ ಧರ್ಮಶೆಟ್ಟಿ ಅವರಿಗೆ ತಾಕೀತು ಮಾಡಿದರು.
‘ತಾಲ್ಲೂಕಿನಲ್ಲಿ ಕೆಲವಾರು ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲವಾಗಿವೆ ಎಂದು ಮಾಹಿತಿ ಇದೆ. ಶಿಥಿಲಗೊಂಡಿರುವ ಕಟ್ಟಡಗಳ ಪಟ್ಟಿ ಮಾಡಿ, ಅವುಗಳನ್ನು ದುರಸ್ತಿ ಮತ್ತು ಅಗತ್ಯವಿದ್ದೆಡೆ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಕ್ರಮವಹಿಸುತ್ತೇನೆ’ ಎಂದರು.
ತಾಲ್ಲೂಕಿನ ಚಿಕ್ಕಾಯರಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತೊಂದರೆ ಇದೆ ಎಂದು ಅಲ್ಲಿಯ ಜನರು ದೂರಿದ್ದಾರೆ. ತಕ್ಷಣ ಕ್ರಮವಹಿಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಎಇಇ ಮಮತಾ ಅವರಿಗೆ ತಾಕೀತು ಮಾಡಿದರು.
ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಕ್ರಮ ವಹಿಸಬೇಕು. ರೈತರು ವಿದ್ಯುತ್ ಪರಿವರ್ತಕಗಳಿಗಾಗಿ ಅಲೆದಾಡುವುದನ್ನು ತಪ್ಪಿಸಬೇಕು. ಸಮಸ್ಯೆ ಎದುರಾಗದಂತೆ ಕ್ರಮ ವಹಿಸಬೇಕು. ಕುಡಿಯುವ ನೀರಿನ ಸರಬರಾಜಿಗೆ ವಿದ್ಯುತ್ ಪೂರೈಕೆ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಸೆಸ್ಕ್ ಎಇಇ ಕೆ.ರವಿಕುಮಾರ್ ಅವರಿಗೆ ಸೂಚಿಸಿದರು. 42 ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ತಾಲ್ಲೂಕು ಪಂಚಾಯಿತಿ ಇಒ ವೀಣಾ, ಗ್ಯಾರಂಟಿ ಯೋಜನೆಗಳ ತಾಲ್ಲೂಕು ಸಮಿತಿ ಅಧ್ಯಕ್ಷ ಎಚ್. ಕೃಷ್ಣೇಗೌಡ ಉಪಸ್ಥಿತರಿದ್ದರು.
ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳಲ್ಲಿ ಬಂಧಿತರಾಗಿದ್ದ 38 ಮಂದಿ ಆರೋಪಿಗಳ ಪೈಕಿ 4 ಮಂದಿಗೆ ಇನ್ನೂ ಜಾಮೀನು ದೊರೆತಿಲ್ಲ. ಈಚಿನ ದಿನಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ನಡೆದಿಲ್ಲ.ಉಮೇಶ್, ಪೊಲೀಸ್ ಸಬ್ ಇನ್‌ಸ್ಪೆಕ್ಟರ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.