ಕೆ.ಆರ್.ಪೇಟೆ: ‘ಬೆಳೆಯಲ್ಲಿ ರಸಗೊಬ್ಬರವನ್ನು ಅಗತ್ಯಕ್ಕಿಂತ ಹೆಚ್ಚು ಬಳಕೆ ಮಾಡಿವುದರಿಂದ ಆಹಾರವು ವಿಷಕಾರಕವಾಗಲಿದೆ. ಸಮತೋಲನ ರಸಗೊಬ್ಬರ ಬಳಕೆ ಮಾಡುವುದರೊಂದಿಗೆ ಸಾವಯವ ಗೊಬ್ಬರ ಬಳಕೆಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್ ರೈ ಸಲಹೆ ನೀಡಿದರು.
ಪಟ್ಟಣದ ಟಿಎಪಿಸಿಎಂಎಸ್ ಸಂಸ್ಥೆಯ ಎಸ್.ಎಂ.ಲಿಂಗಪ್ಪ ಸಹಕಾರ ಭವನದಲ್ಲಿ ತಾಲ್ಲೂಕು ಕೃಷಿ ಇಲಾಖೆಯ ವತಿಯಿಂದ ಆಯೋಜಿಸಿದ್ದ ರಸಗೊಬ್ಬರಗಳು ಹಾಗೂ ಕೀಟನಾಶಕಗಳ ಸಮರ್ಪಕ ನಿರ್ವಹಣೆ ಹಾಗೂ ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳ ಬಳಕೆಗೆ ತಡೆಗಟ್ಟುವ ಕುರಿತು ರೈತರಿಗೆ ಹಾಗೂ ರಸಗೊಬ್ಬರ ಮಾರಾಟಗಾರರಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
‘ರಾಸಾಯನಿಕ ಗೊಬ್ಬರ ಅತಿ ಹೆಚ್ಚು ಬಳಕೆಯಿಂದ ಬೆಳೆದ ಎಲ್ಲ ಮೇವು ತಿನ್ನುವ ಜಾನುವಾರುಗಳ ಹಾಲು ಸಹ ವಿಷಕಾರಿಯಾಗುತ್ತಿರುವ ಬಗ್ಗೆ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಸಾವಯವ ಗೊಬ್ಬರ, ಹಸಿರೆಲೆ ಗೊಬ್ಬರ, ಕೊಟ್ಟಿಗೆ ಗೊಬ್ಬರ ಬಳಕೆಯನ್ನು ಹೆಚ್ಚಿಸಬೇಕು’ ಎಂದರು.
ತಹಶೀಲ್ದಾರ್ ಡಾ.ಎಸ್.ಯು.ಅಶೋಕ್ ಮಾತನಾಡಿ, ತಾಲ್ಲೂಕಿನಲ್ಲಿ ಯೂರಿಯಾ ಸೇರಿದಂತೆ ಯಾವುದೇ ರಸಗೊಬ್ಬರ ಕೃತಕ ಅಭಾವ ಸೃಷ್ಟಿಯಾಗದಂತೆ ನಿಗಾವಹಿಸಲು ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆಯ, ಕೃಷಿ, ತೋಟಗಾರಿಕೆ, ಪಶುವೈದ್ಯ ಇಲಾಖೆಗಳ ಜಂಟಿ ಸಮಿತಿ ರಚನೆ ಮಾಡಲಾಗಿದ್ದು ಕಾರ್ಯತತ್ಪರವಾಗಿದೆ ಎಂದರು.
ತಾಲ್ಲೂಕು ಕೃಷಿ ನಿರ್ದೇಶಕ ಸಂತೋಷ್ ಕುಮಾರ್, ಕೃಷಿ ತಾಂತ್ರಿಕ ಅಧಿಕಾರಿ ಶ್ರೀಧರ್, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ, ಹೇಮಗಿರಿ ಸಕ್ಕರೆ ಕಾರ್ಖಾನೆಯ ಕಬ್ಬು ಅಭಿವೃದ್ಧಿ ಅಧಿಕಾರಿ ದತ್ತಾತ್ರೆಯ, ಟೌನ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆಯ ಎ.ಎಸ್.ಐ ಸೋಮಶೇಖರ್ ಸೇರಿದಂತೆ ತಾಲ್ಲೂಕಿನ ರಸಗೊಬ್ಬರದ ಅಂಗಡಿಗಳ ಮಾಲೀಕರು, ಪ್ರಾಥಮಿಕ ಕೃಷಿ ಮತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿಗಳು, ರೈತರು ಭಾಗವಹಿಸಿದ್ದರು.
ಕೃತಕ ಅಭಾವ ಸೃಷ್ಟಿಸಿದರೆ ಕ್ರಮ: ತಹಶೀಲ್ದಾರ್
ತಾಲ್ಲೂಕಿನಲ್ಲಿ ಯೂರಿಯಾ ಸೇರಿದಂತೆ ಯಾವುದೇ ರಸಗೊಬ್ಬರಗಳಿಗೆ ಯಾವುದೇ ಕೊರತೆಯಿಲ್ಲ. ರೈತರ ಬೇಡಿಕೆಗೆ ತಕ್ಕಂತೆ ರಸಗೊಬ್ಬರಗಳ ದಾಸ್ತಾನು ಇದೆ. ಇದನ್ನು ದುರ್ಬಳಕೆ ಮಾಡಿಕೊಂಡು ಮಂಡ್ಯ ಜಿಲ್ಲೆಯಲ್ಲಿ ಯಾರೂದರೂ ಕೃತಕ ಅಭಾವ ಸೃಷ್ಟಿಸಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಹಶೀಲ್ದಾರ್ ಡಾ.ಎಸ್.ಯು.ಅಶೋಕ್ ರಸಗೊಬ್ಬರ ಅಂಗಡಿಗಳ ಮಾಲೀಕರಿಗೆ ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.