ಮಳವಳ್ಳಿ: ‘ಕೆಲ ತಪ್ಪುಗಳಿಂದ ಅನುತ್ತೀರ್ಣರಾಗಿರುವುದು ಸಹಜ. ತಪ್ಪನ್ನು ತಿದ್ದುಕೊಂಡು ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಭವಿಷ್ಯವನ್ನು ರೂಪಿಸಿಕೊಳ್ಳಬೇಕು’ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸಲಹೆ ನೀಡಿದರು.
ಪಟ್ಟಣ ಬಾಯ್ಸ್ ಹೋಂ ಶಾಲಾ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆಯುತ್ತಿರುವ ಎಸ್ಎಸ್ಎಲ್‌ಸಿ ಪರೀಕ್ಷೆ- 1ರಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ‘ಉಚಿತ ಸನಿವಾಸ ತರಬೇತಿ ಕಾರ್ಯಾಗಾರ’ದಲ್ಲಿ ವಿದ್ಯಾರ್ಥಿಗಳಿಗೆ ಶನಿವಾರ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.
ಶಿಕ್ಷಣ ಕ್ಷೇತ್ರದ ಬುದ್ಧಿವಂತಿಕೆಯ ಮೊದಲ ಪರೀಕ್ಷೆಯೇ ಎಸ್ಎಸ್ಎಲ್‌ಸಿಯಾಗಿದ್ದು, ಮಕ್ಕಳ ಭವಿಷ್ಯವನ್ನು ಉತ್ತಮಪಡಿಸುವ ಕನಸು ಕಂಡಿರುವ ಪೋಷಕರ ಆಸೆಗೆ ಶಕ್ತಿ ತುಂಬುವ ಕೆಲಸ ಮಾಡಲು ವಿದ್ಯಾರ್ಥಿಗಳು ಮುಂದಾಗಬೇಕು. ಶಿಕ್ಷಣ ಇಲ್ಲದೇ ಜೀವನದಲ್ಲಿ ಏನೇ ಸಾಧಿಸಲು ಕಷ್ಟವಾಗುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ನಾನು ಓದಬೇಕಿತ್ತು ಎಂದು ನೊಂದುಕೊಳ್ಳುವ ಮುನ್ನ ಇರುವ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಹೇಳಿದರು.
ಶಿಕ್ಷಣದ ಆಧಾರದ ಮೇಲೆ ಉದ್ಯೋಗವನ್ನು ಪಡೆದು ಜೀವನವನ್ನು ಕಟ್ಟಿಕೊಳ್ಳಬೇಕಾಗಿರುವುದರಿಂದ ವಿದ್ಯಾರ್ಥಿಗಳು ನಿರ್ಲಕ್ಷ್ಯ ವಹಿಸದೇ ಓದಿನ ಗಮನಹರಿಸಬೇಕು. ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಬದುಕನ್ನು ಹಸನು ಮಾಡುವ ಉದ್ದೇಶದಿಂದ ವಿದ್ಯಾರ್ಥಿಗಳ ತರಬೇತಿ ಕೊಡಿಸಲು ಸಂಪೂರ್ಣ ಬೆಂಬಲ ನೀಡಿದ್ದೇನೆ. ಉಚಿತ ಸನಿವಾಸ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿರುವವರು ಉತ್ತೀರ್ಣಗೊಂಡರೇ ಬಹುಮಾನ ನೀಡಲಾಗುವುದು’ ಎಂದು ಆತ್ಮಸ್ಥೈರ್ಯ ತುಂಬಿದರು.
ತಾ.ಪಂ. ಇಒ ಎಚ್.ಜಿ.ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ.ಉಮಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ್ ಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್, ಬಾಯ್ಸ್ ಹೋಂ ಶಾಲೆಯ ಮುಖ್ಯಸ್ಥ ಕಾಂತರಾಜು ಹಾಗೂ ಸಂಪನ್ಮೂಲ ಶಿಕ್ಷಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.