
ಶ್ರೀರಂಗಪಟ್ಟಣ: ತಾಲ್ಲೂಕಿನ ಶ್ರೀನಿವಾಸ ಅಗ್ರಹಾರ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮನೆಯ ಮುಂದೆ ಬೆಳೆದಿದ್ದ 9 ಕೆ.ಜಿ. ಹಸಿ ಗಾಂಜಾ ಗಿಡಗಳನ್ನು ತಹಶೀಲ್ದಾರ್ ಚೇತನಾ ಯಾದವ್ ನೇತೃತ್ವದ ಅಧಿಕಾರಿಗಳ ತಂಡ ಬುಧವಾರ ರಾತ್ರಿ ವಶಪಡಿಸಿಕೊಂಡಿದೆ.
ಗ್ರಾಮದ ಹುಂಡಿ ರಾಮಯ್ಯ ಅವರ ಮಗ ಸುರೇಶ್ ಮನೆಯ ಮುಂದೆ ಚಪ್ಪರದ ಅವರೆ ಗಿಡದ ಮಧ್ಯೆ ನಿಷೇಧಿತ ಗಾಂಜಾ ಗಿಡಗಳನ್ನು ಬೆಳೆದಿದ್ದರು. ಖಚಿತ ಮಾಹಿತಿ ಆಧರಿಸಿ ಸಿಪಿಐ ಬಿ.ಜಿ. ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ವಶಪಡಿಸಿಕೊಂಡಿದೆ.
ಚೇತನಾ ಯಾದವ್ ಸಮ್ಮುಖದಲ್ಲಿ ಮಹಜರು ನಡೆಸಲಾಗಿದೆ. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಸಿಪಿಐ ಬಿ.ಜಿ. ಕುಮಾರ್ ತಿಳಿಸಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.