ADVERTISEMENT

ಉಪ ಚುನಾವಣೆಗೆ ಸಿದ್ಧರಾಗಿ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2019, 20:58 IST
Last Updated 14 ಅಕ್ಟೋಬರ್ 2019, 20:58 IST
ಮದ್ದೂರಿನ ಶಿವಪುರದಲ್ಲಿ ಮೈಸೂರಿಗೆ ತೆರಳುತ್ತಿದ್ದ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಮದ್ದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾಗತಿಸಿದ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣರವರ ಹೋಟೆಲ್‌ನಲ್ಲಿ ಕಾರ್ಯಕರ್ತರು ನೀಡಿದ ಎಳನೀರು ಕುಡಿದರು.
ಮದ್ದೂರಿನ ಶಿವಪುರದಲ್ಲಿ ಮೈಸೂರಿಗೆ ತೆರಳುತ್ತಿದ್ದ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಮದ್ದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾಗತಿಸಿದ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣರವರ ಹೋಟೆಲ್‌ನಲ್ಲಿ ಕಾರ್ಯಕರ್ತರು ನೀಡಿದ ಎಳನೀರು ಕುಡಿದರು.   

ಮದ್ದೂರು: ‘ಕೆ.ಆರ್‌.ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದ್ದು ಕಾಂಗ್ರೆಸ್‌ ಅಭ್ಯರ್ಥಿಯ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಮೈಸೂರಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಮದ್ದೂರಿನ ಶಿವಪುರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

‘ಉಪ ಚುನಾವಣೆ ಎದುರಿಸಲು ಈಗಿನಿಂದಲೇ ಕಾರ್ಯಕರ್ತರು ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷ ಈಗ ಒಂದು ಸ್ಥಾನ ಗೆಲುವು ಪಡೆಯಲು ಸಕಾಲವಾಗಿದೆ. ಮುಖಂಡರ ಮಾರ್ಗದರ್ಶನ ಪಡೆದು ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಸ್ಥಳೀಯ ನಾಯಕರ ವಿರುದ್ಧ ದೂರು: ಮದ್ದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಸ್ಥಳೀಯ ಮುಖಂಡರ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು ಅದೋಗತಿಗೆ ತಲುಪಿದೆ ಎಂದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ಅವರಿಗೆ ದೂರು ನೀಡಿದರು.

‘ಮುಖಂಡರು ಪಕ್ಷ ಸಂಘಟನೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಪಕ್ಷವು ಇತ್ತೀಚಿನ ದಿನಗಳಲ್ಲಿ ಅದೋಗತಿಗೆ ತಲುಪುತ್ತಿದ್ದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಇದರಿಂದ ಮೂಲೆ ಗುಂಪಾಗುವಂತಾಗಿದೆ. ಆದರೆ ಈ ಬಗ್ಗೆ ರಾಜ್ಯ ನಾಯಕರು ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿ ಯಾವುದೇ ಕ್ರಮ ವಹಿಸುತ್ತಿಲ್ಲ’ ಎಂದು ದೂರಿದರು.

ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ‘ಮುಂದಿನ ದಿನಗಳಲ್ಲಿ ದೂರುಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ತಾಲ್ಲೂಕಿನಲ್ಲಿ ಕಾಂಗ್ರೆಸ್ ಸಮಾವೇಶವನ್ನು ಮಾಡುವ ಮುಖಾಂತರ ಎಲ್ಲವನ್ನು ಸರಿಪಡಿಸುವ ಕೆಲಸವನ್ನು ಮಾಡಲಾಗುವುದು’ ಎಂದರು.

ಎಳನೀರು, ಮದ್ದೂರು ವಡೆ ರುಚಿ: ಕೆಲ ಹೊತ್ತು ಕಾರ್ಯಕರ್ತರ ಜೊತೆ ಕಾಲಕಳೆದ ಸಿದ್ದರಾಮಯ್ಯ ಅವರು ಎಳನೀರು ಹಾಗೂ ಮದ್ದೂರು ವಡೆ ರುಚಿ ನೋಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಜಿಲ್ಲಾ ಕಿಸಾನ್ ಅಧ್ಯಕ್ಷ ದೇಶಹಳ್ಳಿ ಮೋಹನ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.