ADVERTISEMENT

ಉತ್ತಮ ಪ್ರಗತಿ: ಅಧಿಕಾರಿಗಳಿಗೆ ಪ್ರಶಂಸಾ ಪತ್ರ

ಮಾಸಿಕ ಪ್ರಗತಿ ಪರಿಶೀಲನಾ ಸಭೆ: ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2025, 2:33 IST
Last Updated 13 ಡಿಸೆಂಬರ್ 2025, 2:33 IST
ಕೃಷ್ಣರಾಜಪೇಟೆ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಕೊಳವೆ ಬಾವಿಗಳಿಗೆ ಶೇ 100ರಷ್ಟು ರಕ್ಷಣಾ ಕಾಮಗಾರಿಗಳನ್ನು ನಿರ್ಮಾಣ ಮಾಡಿದ್ದರಿಂದ, ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ ಕೆ. ಅವರಿಗೆ ಸಿಇಒ ಕೆ.ಆರ್‌.ನಂದಿನಿ ಅವರು ಪ್ರಶಂಸಾ ಪತ್ರ ನೀಡಿ ಅಭಿನಂದಿಸಿದರು
ಕೃಷ್ಣರಾಜಪೇಟೆ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಕೊಳವೆ ಬಾವಿಗಳಿಗೆ ಶೇ 100ರಷ್ಟು ರಕ್ಷಣಾ ಕಾಮಗಾರಿಗಳನ್ನು ನಿರ್ಮಾಣ ಮಾಡಿದ್ದರಿಂದ, ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ ಕೆ. ಅವರಿಗೆ ಸಿಇಒ ಕೆ.ಆರ್‌.ನಂದಿನಿ ಅವರು ಪ್ರಶಂಸಾ ಪತ್ರ ನೀಡಿ ಅಭಿನಂದಿಸಿದರು   

ಮಂಡ್ಯ: ಜಲಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು ಕಾರ್ಯಕ್ರಮಗಳಡಿ ಉತ್ತಮ ಪ್ರಗತಿ ಸಾಧಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಮಂಡ್ಯ ಜಿ.ಪಂ. ಸಿಇಒ ನಂದಿನಿ ಕೆ.ಆರ್. ಅಭಿನಂದಿಸಿದರು.

ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನು ಅಭಿನಂದಿಸಿ ಪ್ರಶಂಸಾ ಪತ್ರ ವಿತರಿಸಿದ ಅವರು ಮಾತನಾಡಿದರು.

ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸುವಂತೆ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು. ಕಳಪೆ ಪ್ರಗತಿ ಸಾಧಿಸಿದ ಪ್ರತೀ ತಾಲ್ಲೂಕಿನ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ವಿತರಿಸಿ ನಿಗದಿತ ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸಲು ತಿಳಿಸಲಾಗಿದೆ ಎಂದರು.

ADVERTISEMENT

ಅಭಿಲೇಖಾಲಯ ಪ್ರಾರಂಭಿಸಿ:

ಗ್ರಾ.ಪಂ.ನ ಕಡತಗಳು ಹಾಗೂ ಇ-ಸ್ವತ್ತು ಕಡತಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಜಿಲ್ಲೆಯ ಎಲ್ಲಾ ಗ್ರಾ.ಪಂ.ಗಳಿಗೆ ಈಗಾಗಲೇ ಸೂಚಿಸಲಾಗಿದೆ. ಡಿಸೆಂಬರ್ 31ರೊಳಗೆ ಅಭಿಲೇಖಾಲಯ ಪ್ರಾರಂಭಿಸಬೇಕು ಎಂದು ಸಿಇಒ ಸೂಚಿಸಿದರು.

ಅಭಿಲೇಖಾಲಯ ನಿರ್ವಹಣೆಯನ್ನು ಸೂಕ್ತವಾಗಿ ಮಾಡಿದಲ್ಲಿ ಇ-ಸ್ವತ್ತು ಸಂಬಂಧಿಸಿದ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಸಂಗ್ರಹಿಸಿ ಸಾರ್ವಜನಿಕರಿಗೆ ಇ-ಸ್ವತ್ತು ನೀಡಲು ಹಾಗೂ ಸಾರ್ವಜನಿಕರು ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಜ್ಯೇಷ್ಠತೆ ಆಧಾರದಲ್ಲಿ ಪಾವತಿಸಿ:

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಬಿಡುಗಡೆಯಾಗಿರುವ ಸಾಮಗ್ರಿ ಮೊತ್ತವನ್ನು ವೈಯಕ್ತಿಕ ಫಲಾನುಭವಿಗಳಿಗೆ ಜ್ಯೇಷ್ಠತೆ ಆಧಾರದ ಮೇಲೆ ಪಾವತಿಸಲು ಕ್ರಮವಹಿಸುವಂತೆ ಸರ್ಕಾರ ನಿರ್ದೇಶಿಸಿರುತ್ತದೆ. ಆದಾಗ್ಯೂ ಸೂಚನೆಗಳನ್ನು ಉಲ್ಲಂಘಿಸಿ ಸಾಮಗ್ರಿ ಮೊತ್ತ ಪಾವತಿ ಮಾಡಿದ್ದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪ್ರಸಕ್ತ ಸಾಲಿನ ಬೇಡಿಕೆಗೆ ಅನುಗುಣವಾಗಿ ಶೇಕಡ 100ರಷ್ಟು ತೆರಿಗೆ ವಸೂಲಾತಿಯನ್ನು ಮಾಡುವಂತೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ತೆರಿಗೆ ವಸೂಲಾತಿಯಲ್ಲಿ ಅತಿ ಕಡಿಮೆ ಪ್ರಗತಿ ಸಾಧಿಸಿದ ಜಿಲ್ಲೆಯ ಏಳು ತಾಲ್ಲೂಕಿನ 35 ಗ್ರಾಮ ಪಂಚಾಯಿತಿಗಳಿಗೆ ಪ್ರಗತಿ ಉತ್ತಮಗೊಳಿಸುವಂತೆ ತಿಳಿಸಿ ನೋಟೀಸ್ ಜಾರಿ ಮಾಡಲಾಯಿತು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ (ಆಡಳಿತ) ಶಿವಲಿಂಗಯ್ಯ, ಯೋಜನಾ ನಿರ್ದೇಶಕರಾದ ರೂಪಶ್ರೀ ಕೆ.ಎನ್, ಸಹಾಯಕ ಕಾರ್ಯದರ್ಶಿ (ಆಡಳಿತ) ರವೀಂದ್ರ, ಸಹಾಯಕ ಕಾರ್ಯದರ್ಶಿ (ಅಭಿವೃದ್ಧಿ) ಚಂದ್ರು, ಸಹಾಯಕ ಯೋಜನಾಧಿಕಾರಿ ಶ್ರೀಹರ್ಷ ಪಾಲ್ಗೊಂಡಿದ್ದರು. 

‘ಪ್ರತೀ ಸೋಮವಾರ ಕುಂದುಕೊರತೆ ಸಭೆ’

ಗ್ರಾ.ಪಂ. ಮತ್ತು ತಾಲ್ಲೂಕು ಪಂಚಾಯಿತಿ ಕಚೇರಿಗಳಲ್ಲಿ ಪ್ರತೀ ಸೋಮವಾರ ಕಡ್ಡಾಯವಾಗಿ ಸಾರ್ವಜನಿಕ ಕುಂದು ಕೊರತೆ ಸಭೆ ಆಯೋಜಿಸಬೇಕು ಹಾಗೂ ಈವರೆಗೆ ಜಿಲ್ಲಾ ಪಂಚಾಯಿತಿ ಕಚೇರಿಗೆ ಸ್ವೀಕೃತವಾಗಿರುವ ದೂರು ಮತ್ತು ಮನವಿಗಳಿಗೆ ಸಂಬಂಧಿಸಿದಂತೆ ತೆಗೆದುಕೊಳ್ಳಲಾಗಿರುವ ಕ್ರಮಗಳ ಬಗ್ಗೆ ಅನುಪಾಲನಾ ವರದಿಯನ್ನು ಜಿ.ಪಂ. ಕಚೇರಿಗೆ ಸಲ್ಲಿಸಬೇಕು ಎಂದು ಸಿಇಒ ನಂದಿನಿ ತಿಳಿಸಿದರು. ಪ್ರತೀ ಸೋಮವಾರ ಸಿಇಒ ನೇತೃತ್ವದ ಅಧಿಕಾರಿಗಳ ತಂಡ ತಾಲ್ಲೂಕು ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು ಅಗತ್ಯ ಮಾಹಿತಿಗಳೊಂದಿಗೆ ಸಿದ್ಧವಿರುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇ.ಒ.ಗಳಿಗೆ ಪ್ರಶಂಸಾ ಪತ್ರ

ಕೃಷ್ಣರಾಜಪೇಟೆ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಕೊಳವೆ ಬಾವಿಗಳಿಗೆ ಶೇಕಡ 100ರಷ್ಟು ರಕ್ಷಣಾ ಕಾಮಗಾರಿಗಳನ್ನು ನಿರ್ಮಾಣ ಮಾಡಿದ್ದರಿಂದ ಗ್ರಾಮ ಪಂಚಾಯಿತಿಗಳ ಪರವಾಗಿ ಕೃಷ್ಣರಾಜಪೇಟೆ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ ಕೆ. ಅವರನ್ನು ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು. ‌ತೆರಿಗೆ ವಸೂಲಾತಿಯಲ್ಲಿ ಪಾಂಡವಪುರ ತಾಲ್ಲೂಕಿನ 24 ಗ್ರಾಮ ಪಂಚಾಯಿತಿಗಳು ಪ್ರಸಕ್ತ ಸಾಲಿನ ಬೇಡಿಕೆಗೆ ಅನುಗುಣವಾಗಿ ₹4.09 ಕೋಟಿ ತೆರಿಗೆ ವಸೂಲಾತಿ ಮಾಡಿ ಶೇಕಡ 83.56 ಪ್ರಗತಿ ಸಾಧಿಸಿದ್ದರಿಂದ ಗ್ರಾಮ ಪಂಚಾಯಿತಿಗಳ ಪರವಾಗಿ ಪಾಂಡವಪುರ ತಾಲ್ಲೂಕು ಪಂಚಾಯಿತಿ ಇಒ ವೀಣಾ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.