ADVERTISEMENT

ಮಂಡ್ಯ: ಕಡಲೆಕಾಯಿ ಮಾರಿ ಉಪನ್ಯಾಸಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2023, 13:53 IST
Last Updated 18 ಡಿಸೆಂಬರ್ 2023, 13:53 IST
ನಗರದ ಸರ್ ಎಂ.ವಿ. ಪ್ರತಿಮೆ ಎದುರು 14ನೇ ದಿನದ ಧರಣಿಯಲ್ಲಿ ಅತಿಥಿ ಉಪನ್ಯಾಸಕರು ಪಾಲ್ಗೊಂಡರು
ನಗರದ ಸರ್ ಎಂ.ವಿ. ಪ್ರತಿಮೆ ಎದುರು 14ನೇ ದಿನದ ಧರಣಿಯಲ್ಲಿ ಅತಿಥಿ ಉಪನ್ಯಾಸಕರು ಪಾಲ್ಗೊಂಡರು   

ಮಂಡ್ಯ: ಸೇವೆ ಕಾಯಂಗಾಗಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ಸೋಮವಾರ ಕಡ್ಲೆಕಾಯಿ ಮಾರಾಟ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಸರ್ ಎಂ.ವಿ. ಪ್ರತಿಮೆ ಎದುರು 14ನೇ ದಿನದ ಧರಣಿಯಲ್ಲಿ ಕಡಲೆಕಾಯಿ ಮುಂದಿಟ್ಟುಕೊಂಡು ಉಪನ್ಯಾಸಕರು ಸರ್ಕಾರದ ವಿರುದ್ಧ ಸಿಟ್ಟು ಹೊರಹಾಕಿದರು. ರಾಜ್ಯದಲ್ಲಿ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು 20 ವರ್ಷಗಳಿಂದ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳದೇ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.

ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಗೌರವ ಅಧ್ಯಕ್ಷ ಜಿ.ವಿ. ರಮೇಶ್ ಮಾತನಾಡಿ, ‘ತರಗತಿ ಬಹಿಷ್ಕಾರ ಮಾಡಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಡಿ. 22 ರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಲಿದೆ, ಆದರೆ ಇನ್ನೂ ಪಠ್ಯಕ್ರಮ ಬೋಧನೆ ಮುಗಿದಿಲ್ಲ. ವಿದ್ಯಾರ್ಥಿಗಳು ಹೇಗೆ ಪರೀಕ್ಷೆ ಬರೆಯಲಿದ್ದಾರೆ, ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಭಾಗ್ಯ ನೀಡಿದಂತೆ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭಾಗ್ಯ ಕಲ್ಪಿಸಲಿ. ಸಚಿವ ಸುಧಾಕರ್ ಮುತುವರ್ಜಿ ವಹಿಸಿ ಸೇವಾ ಭದ್ರತೆ ನೀಡಲು ಮುಂದಾಗಬೇಕು’ ಎಂದು ಆಗ್ರಹಿಸಿದರು.

ಸಂಘದ ಅಧ್ಯಕ್ಷ ಕೆ.ಪರಮೇಶ್, ಉಪಾಧ್ಯಕ್ಷ ಎಂ.ಎಸ್.ಚಲುವರಾಜು, ಕಾರ್ಯದರ್ಶಿ ಗಣೇಶ್ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.