ಮಂಡ್ಯ ನಗರದಲ್ಲಿ ಗುರುವಾರ ಜಯಚಾಮರಾಜೇಂದ್ರ ಮಾರುಕಟ್ಟೆಯನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಿದರು
ಮಂಡ್ಯ: ‘ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ ಖಾತಾ ಸೋಗಿನಲ್ಲಿ ₹15 ಸಾವಿರ ಕೋಟಿ ಸುಲಿಗೆ ಮಾಡುತ್ತಿದೆ’ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.
ನಗರದಲ್ಲಿ ಗುರುವಾರ ಆಟೊ ನಿಲ್ದಾಣ ಮತ್ತು ಜಯಚಾಮರಾಜೇಂದ್ರ ಮಾರುಕಟ್ಟೆಯನ್ನು ಉದ್ಘಾಟಿಸಿದ ಸಂದರ್ಭ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
‘ಬಿ’ ಖಾತಾದಿಂದ ‘ಎ’ ಖಾತಾಗೆ ಪರಿವರ್ತನೆ ಮಾಡುವ ಅರ್ಜಿಗೆ ₹500 ಶುಲ್ಕ ತುಂಬಬೇಕು. ಆ ಶುಲ್ಕದ ಹೆಸರಿನಲ್ಲಿಯೇ ನೂರಾರು ಕೋಟಿ ರೂಪಾಯಿ ಸುಲಿಗೆ ಮಾಡುತ್ತಿದೆ ಈ ಸರ್ಕಾರ. 30X40 ನಿವೇಶನಕ್ಕೆ ₹4ರಿಂದ 8 ಲಕ್ಷ ರೂಪಾಯಿವರೆಗೂ ಕಿತ್ತುಕೊಳ್ಳುತ್ತಿದ್ದಾರೆ. ಮೊದಲು ₹10 ಸಾವಿರದಿಂದ ₹13 ಸಾವಿರ ರೂಪಾಯಿ ಅಷ್ಟನ್ನೇ ಕಟ್ಟಬೇಕಿದ್ದ ಬೆಂಗಳೂರು ಜನರು ಇನ್ನು ಮುಂದೆ ಲಕ್ಷಗಳಲ್ಲಿ ಹಣ ತೆರಬೇಕಿದೆ’ ಎಂದು ಹೇಳಿದರು.
‘ಈ ಸರ್ಕಾರದಲ್ಲಿ ಹಣ ಇಲ್ಲ. ಅದಕ್ಕೆ ಕಂಡ ಕಂಡ ಕಡೆ ಹಣಕ್ಕೆ ಕೈ ಹಾಕುತ್ತಿದೆ. ಬೆಂಗಳೂರಿನ ಗುಂಡಿ ಮುಚ್ಚೋದು ಇರಲಿ. ರಾಜ್ಯದಲ್ಲಿರುವ ಗುಂಡಿಗಳನ್ನೂ ಮುಚ್ಚೋಕೆ ಇವರಿಂದ ಆಗುತ್ತಿಲ್ಲ’ ಎಂದರು.
ದಾಖಲೆ ಕೊಡಲಿ:
‘ಜೆಡಿಎಸ್ ಕೊಡುಗೆ ಏನು?’ ಎಂದು ಹಾಸನದಲ್ಲಿ ಸಿಎಂ ಪ್ರಶ್ನೆ ಮಾಡಿದ್ದಾರೆ. ನನ್ನ ಆರೋಗ್ಯ ವಿಚಾರಿಸಲು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಬ್ಬರು ದೆಹಲಿಗೆ ಬಂದಿದ್ದರು. 2018ರಲ್ಲಿ ನೀವು ಕೊಟ್ಟ ₹500 ಕೋಟಿ ರೂಪಾಯಿ ಅನುದಾನದಲ್ಲಿಯೇ ಇನ್ನೂ ಕೆಲಸ ನಡೆಯುತ್ತಿದೆ ಎಂದು ಅವರೇ ಹೇಳುತ್ತಾರೆ. ಅನುದಾನದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು, ನಾನು ಅಧಿಕಾರದಲ್ಲಿ ಇದ್ದಾಗ ಎಷ್ಟು ಕೊಟ್ಟಿದ್ದೇನೆ, ಅವರು ಎಷ್ಟು ಕೊಟ್ಟಿದ್ದಾರೆ ಎಂಬ ಬಗ್ಗೆ ಜನರ ಮುಂದೆ ದಾಖಲೆ ಇಡಲಿ ಎಂದು ಸವಾಲು ಹಾಕಿದರು.
‘ಎಚ್‌ಎಂಟಿ, ವಿಐಎಸ್‌ಎಲ್ ಕಾರ್ಖಾನೆಗೆ ಮರುಜೀವ’
ಮಂಡ್ಯ: ‘ಪ್ರತಿಷ್ಠಿತ ಎಚ್‌ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ ತಯಾರು ಮಾಡಲಾಗುತ್ತಿದೆ’ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎಚ್‌ಎಂಟಿ ಹಾಗೂ ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (ವಿ.ಐ.ಎಸ್.ಎಲ್) ಪುನರುಜ್ಜೀವನ ಮಾಡುವ ಪ್ರಯತ್ನ ನಡೆಸಲಾಗಿದೆ. ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆದಿದೆ ಎಂದು ತಿಳಿಸಿದರು.
ನೀತಿ ಆಯೋಗದ ಸದಸ್ಯರು ಆಗಿರುವ ವಿ.ಕೆ. ಸಾರಸ್ವತ ಅವರು ಹೆಚ್ ಎಂಟಿ ಕಾರ್ಖಾನೆಯ ಪುನಶ್ಚೇತನದ ಬಗ್ಗೆ ಮಹತ್ವದ ವರದಿ ನೀಡಿದ್ದಾರೆ. ಜಪಾನ್ ದೇಶದಿಂದ ತಾಂತ್ರಿಕ ಸಹಕಾರ ಪಡೆಯುವ ಬಗ್ಗೆ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದ ತಂಡವನ್ನು ಆ ದೇಶಕ್ಕೆ ಕಳಿಸಿದ್ದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.