ADVERTISEMENT

ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ ಪಾತಕಿಗೆ ಕ್ಷಮೆಯೇ ಇರಬಾರದು: ಎಚ್‌ಡಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಅಕ್ಟೋಬರ್ 2022, 6:37 IST
Last Updated 13 ಅಕ್ಟೋಬರ್ 2022, 6:37 IST
   

ಬೆಂಗಳೂರು:ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು.ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ನಾಯಕ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಟ್ಯೂಷನ್‌ಗೆ ತೆರಳಿದ್ದ10 ವರ್ಷದ ಬಾಲಕಿಗೆ, ಅಲ್ಲಿನ ಕೆಲಸಗಾರನೇ ಚಾಕೊಲೇಟ್‌ ಆಸೆ ತೋರಿಸಿ ಹೊರಗೆ ಕರೆದೊಯ್ದು ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಆಘಾತಕಾರಿ ಪ್ರಕರಣ ಮಳವಳ್ಳಿಯಲ್ಲಿ ಮಂಗಳವಾರ ನಡೆದಿತ್ತು. ಮೃತದೇಹ ನೀರಿನ ಸಂಪ್‌ನಲ್ಲಿ ಪತ್ತೆಯಾಗಿತ್ತು. 50 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆನಾಗರಿಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.

ADVERTISEMENT

'ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು' ಎಂದು ಆಗ್ರಹಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, 'ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ನಾನೂ ಭಾಗಿ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನನಗೆ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.