
ಬೆಂಗಳೂರು: ‘ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ನಾನಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹಿಂದೆ ನೀಡಿದ್ದ ಹೇಳಿಕೆಗೆ ಬದ್ಧ’ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಪಕ್ಷದ ಕಚೇರಿಯಲ್ಲಿ ಭಾನುವಾರ ಜೆಡಿಎಸ್‌ನ ಡಿಜಿಟಲ್ ವಿಭಾಗದ ಕಾರ್ಯಕರ್ತರ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಾನು ಯು ಟರ್ನ್’ ಹೊಡೆಯುವ ಗಿರಾಕಿ ಅಲ್ಲ. ನನ್ನ ನಿರ್ಧಾರದಲ್ಲಿ ಸ್ಪಷ್ಟತೆ ಇದೆ. ವದಂತಿಗಳಲ್ಲಿ ಹುರುಳಿಲ್ಲ’ ಎಂದರು.
‘2019ರ ಲೋಕಸಭಾ ಚುನಾವಣೆಯಲ್ಲಿ ನಾನು ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿ, ಸೋತಿದ್ದೆ. ಈಗ ಮಂಡ್ಯದ ಮುಖಂಡರು ಮತ್ತು ಕಾರ್ಯಕರ್ತರು ಸ್ಪರ್ಧೆಗೆ ಒತ್ತಾಯ ಮಾಡಿದ್ದಾರೆ. ಆದರೆ, ನಿಲುವಿನಲ್ಲಿ ಬದಲಾವಣೆ ಇಲ್ಲ’ ಎಂದು ಹೇಳಿದರು.
ಮಂಡ್ಯ ಮತ್ತು ಹಾಸನ ಕ್ಷೇತ್ರ ತಮ್ಮ ಪಕ್ಷಕ್ಕೆ ಲಭಿಸಲಿದೆ ಎಂಬ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯ ಕೇಂದ್ರದ ನಾಯಕರು ಮತ್ತು ನಮ್ಮ ಪಕ್ಷದ ವರಿಷ್ಠರು ಸೇರಿ ಶೀಘ್ರದಲ್ಲಿ ಎಲ್ಲ ಪ್ರಶ್ನೆಗಳಿಗೂ ತೆರೆ ಎಳೆಯುತ್ತಾರೆ. ಅಲ್ಲಿಯವರೆಗೆ ತಾಳ್ಮೆಯಿಂದ ಕಾಯಬೇಕು. ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.