ADVERTISEMENT

ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆ: ಜವರೇಗೌಡ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2023, 14:14 IST
Last Updated 3 ಫೆಬ್ರುವರಿ 2023, 14:14 IST

ಮಂಡ್ಯ: ಕುಟುಂಬ ರಾಜಕಾರಣಕ್ಕೆ ಬೇಸತ್ತು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಪಕ್ಷ ಸೇರುತ್ತಿರುವುದಾಗಿ ಜೆಡಿಎಸ್‌ ನಾಗಮಂಗಲ ತಾಲ್ಲೂಕು ಜೆಡಿಎಸ್‌ ಘಟಕದ ಅಧ್ಯಕ್ಷ ಜವರೇಗೌಡ ಹೇಳಿದರು.

‘ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮಕ್ಕಳು, ಮೊಮ್ಮಕ್ಕಳ ಜೀತ ಮಾಡಲು ನಾವು ತಯಾರಿಲ್ಲ. ಹೀಗಾಗಿ ಜಾ.ದಳ ಕುಟುಂಬ ರಾಜಕಾರಣ ವಿರೋಧಿಸಿ ಕಾಂಗ್ರೆಸ್‌ಗೆ ಹೋಗುತ್ತಿದ್ದೇನೆ’ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.

‘ಒಮ್ಮೆ ಬಿಜೆಪಿ, ಮತ್ತೊಮ್ಮೆ ಕಾಂಗ್ರೆಸ್‌ನೊಂದಿಗೆ ಮೈತ್ರಿ ಎಂಬ ದ್ವಂದ್ವ ನಮ್ಮಂತಹವರಿಗೆ ಬೇಸರ ತರಿಸಿದೆ. ಪಕ್ಷದ ಮುಖಂಡರಲ್ಲಿ ಸ್ಪಷ್ಟ ನಿಲುವು ಇಲ್ಲದಾಗಿದೆ. ಕಾರ್ಯಕರ್ತರು ಚುನಾವಣೆಯಲ್ಲಿ ದುಡಿಯುವುದಕ್ಕೆ ಮಾತ್ರ ಸೀಮಿತವಾಗಿದ್ದಾರೆ. ಜಿಲ್ಲೆಯಲ್ಲಿ ಜೆಡಿಎಸ್‌ ಸ್ಥಿತಿ ಕುಸಿಯುತ್ತಿದ್ದು ಕಾರ್ಯಕರ್ತರು ಕಂಗಾಲಾಗಿದ್ದಾರೆ. ಹೀಗಾಗಿ ಜೆಡಿಎಸ್‌ ತೊರೆದು ಕಾಂಗ್ರೆಸ್‌ಗೆ ಸೇರುತ್ತಿದ್ದೇನೆ’ ಎಂದರು.

ADVERTISEMENT

‘ಕೆಪಿಸಿಸಿ ಉಪಾಧ್ಯಕ್ಷ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಹಲವು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರಲಿದ್ದೇವೆ. ಕ್ಷೇತ್ರದಲ್ಲಿ ಚಲುವರಾಯಸ್ವಾಮಿ ಅವರು ಮಾಡಿರುವ ಕೆಲಸಗಳು ಈಗಲೂ ಜನರ ಮನಸ್ಸಿನಲ್ಲಿವೆ. ಕಳೆದ 5 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ, ಹೀಗಾಗಿ ಜನರು ಕಾಂಗ್ರೆಸ್‌ ಪರವಾಗಿದ್ದಾರೆ’ ಎಂದರು.

ಎಂಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ರಾಜೇಗೌಡ, ರಾಜ್ಯ ಒಕ್ಕಲಿಗರ ಸಂಘ ಮಾಜಿ ಉಪಾಧ್ಯಕ್ಷ ಎಚ್.ಟಿ.ಕೃಷ್ಣೇಗೌಡ, ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ, ಕರಡಹಳ್ಳಿ ಆನಂದ್, ಜಯಣ್ಣ, ಸತ್ಯ ದೇವಲಾಪುರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.