ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಚೆನ್ನನಕೆರ ಗ್ರಾಮದ ಪರಿಶಿಷ್ಟ ಸಮುದಾಯಕ್ಕೆ ಮೀಸಲಿರುವ ಸ್ಮಶಾನ ಸ್ಥಳದಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು.
ಗ್ರಾಮದ ಸ್ಮಶಾನ ಜಾಗದಲ್ಲಿಯೇ ವ್ಯಕ್ತಿಯೊಬ್ಬರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಗಣಿಗಾರಿಕೆ ನಡೆಸುತ್ತಿದ್ಧಾರೆ. ಇದರಿಂದ ಸರ್ಕಾರಕ್ಕೆ ಕೋಟ್ಯಾಂತರ ನಷ್ಟ ಉಂಟು ಮಾಡಿದ್ದಾರೆ. ಚೆನ್ನನಕೆರೆ ಗ್ರಾಮದ ಪರಿಶಿಷ್ಟ ಸಮುದಾಯಕ್ಕೆ ಸರ್ಕಾರವು 1997–98ನೇ ಸಾಲಿನಲ್ಲಿರುವ ಸ.ನಂ.78ರ 1.19 ಎಕರೆ ಜಾಗವನ್ನು ಪರಿಶಿಷ್ಟ ಸಮುದಾಯದ ಸ್ಮಶಾನಕ್ಕೆ ಮಂಜೂರು ಮಾಡಿದ್ದು, ಇಲ್ಲಿ ಗಣಿಗಾರಿಕೆ ಮಾಡುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಅಲ್ಲೇ ಸಮೀಪವಿರುವ ಜಕ್ಕನಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರಿಗೆ ಗಣಿ ಮತ್ತು ಭೂ ವಿಜ್ಞಾನಿ ಇಲಾಖೆಯಿಂದ ಸ.ನಂ.78 ರಲ್ಲಿ ಪರವನಾಗಿಯನ್ನು ಗಣಿಗಾರಿಕೆ ಮಾಡಲು ಕೊಟ್ಟಿರುತ್ತಾರೆ. ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಹೆಚ್ಚುವರಿಯಾಗಿ ಅತಿಕ್ರಮಣ ಮಾಡಿಕೊಂಡು ಗಣಿಗಾರಿಕೆ ಮಾಡಲಾಗುತ್ತಿದೆ. ಇದರ ಜೊತೆಗೆ ಪರಿಶಿಷ್ಟ ಸಮುದಾಯದ ಸ್ಮಶಾನದ ಜಾಗವನ್ನೂ ಒತ್ತುವರಿ ಮಾಡಿಕೊಂಡು ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಇದನ್ನು ಪ್ರಶ್ನೆ ಮಾಡಿದವರ ಮೇಲೆ ಹಲ್ಲೆ ಮಾಡಲು ಮುಂದಾಗಿರುವುದರಿಂದ ಯಾರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಗಣಿಗಾರಿಕೆ ನಡೆಸುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಪರಿಶಿಷ್ಟ ಸಮುದಾಯಕ್ಕೆ ಸೇರಿದ ಸ್ಮಶಾನ ಜಾಗವನ್ನು ಬಿಡಿಸಿಕೊಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಸ್ಥಳದಲ್ಲಿಯೇ ಧರಣಿ ಕುಳಿತುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಗ್ರಾಮಸ್ಥರಾದ ಲಿಂಗರಾಜ್, ಆರ್.ಮಹದೇವ್, ಮದನ್, ಭರತ್, ಪ್ರಜ್ವಲ್, ಸಿ.ಎಲ್. ಕೃಷ್ಣ, ಸಿ.ಕೆ. ನಿಂಗರಾಜ್, ಮಹದೇವು, ಸಂತೋಷ್ ಭಾಗವಹಿಸಿದ್ದರು.
ಗಣಿಗಾರಿಕೆ ನಡೆಸುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ | ಮುಂದಿನ ದಿನಗಳಲ್ಲಿ ಸ್ಥಳದಲ್ಲಿಯೇ ಧರಣಿ ನಡೆಸುವ ಎಚ್ಚರಿಕೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.