ADVERTISEMENT

ಸ್ವಾತಂತ್ರ್ಯದ ದಿನ ಸಾವಿರ ಮಂದಿಗೆ ಸವಲತ್ತು ವಿತರಣೆ

ಅಧಿಕಾರಿಗಳ ಸಭೆಯಲ್ಲಿ ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2025, 8:02 IST
Last Updated 30 ಜುಲೈ 2025, 8:02 IST
ಶ್ರೀರಂಗಪಟ್ಟಣ ಪುರಸಭೆ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಶಾಸಕ ರಮೇಶ ಬಂಡಿಸಿದ್ದೇಗೌಡ ಮಾತನಾಡಿದರು. ಉಪ ವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್‌ ಚೇತನಾ ಯಾದವ್‌, ತಾ.ಪಂ. ಇಒ ಎ.ಬಿ. ವೇಣು ಇದ್ದಾರೆ
ಶ್ರೀರಂಗಪಟ್ಟಣ ಪುರಸಭೆ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಶಾಸಕ ರಮೇಶ ಬಂಡಿಸಿದ್ದೇಗೌಡ ಮಾತನಾಡಿದರು. ಉಪ ವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್‌ ಚೇತನಾ ಯಾದವ್‌, ತಾ.ಪಂ. ಇಒ ಎ.ಬಿ. ವೇಣು ಇದ್ದಾರೆ   

ಶ್ರೀರಂಗಪಟ್ಟಣ: ‘ಈ ಬಾರಿ ಸ್ವಾತಂತ್ರ್ಯೋತ್ಸವದ ದಿನ ತಾಲ್ಲೂಕಿನ ಒಂದು ಸಾವಿರಕ್ಕೂ ಹೆಚ್ಚು ಜನರಿಗೆ ಸರ್ಕಾರದ ವಿವಿಧ ಸವಲತ್ತುಗಳನ್ನು ವಿತರಿಸಲಾಗುವುದು’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.

ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ‘ಇ– ಖಾತೆ ಮತ್ತು ಪೌತಿ ಖಾತೆ ದಾಖಲೆ, ನಿವೇಶನ ಹಕ್ಕುಪತ್ರ, ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ಮಾಸಾಶನ ಮಂಜೂರಾತಿ ಪತ್ರ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳಿಂದ ರೈತರಿಗೆ ಪರಿಕರಗಳನ್ನು ವಿತರಣೆ ಮಾಡಲಾಗುವುದು’ ಎಂದು ಅವರು ತಿಳಿಸಿದರು.

‘ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ 100ರಂತೆ ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳಲ್ಲಿ 2100 ಹಕ್ಕುಪತ್ರ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಪುರಸಭೆ ವ್ಯಾಪ್ತಿಯಲ್ಲಿ ಕನಿಷ್ಠ 100 ಇ– ಖಾತೆಗಳನ್ನು ಅಂದು ವಿತರಿಸಬೇಕು. ಸಂವಿಧಾನದ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ಆಶುಭಾಷಣ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕು. ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಬೇಕು’ ಎಂದು ಸೂಚಿಸಿದರು.

ADVERTISEMENT

‘ಆ.24ರಿಂದ ತಾಲ್ಲೂಕಿನಲ್ಲಿ ಇ– ಖಾತೆ ಮತ್ತು ಪೌತಿ ಖಾತೆ ಆಂದೋಲನ ಆರಂಭವಾಗಲಿದೆ. ಅಷ್ಟರಲ್ಲಿ ಎರಡು ಹೋಬಳಿಗಳಲ್ಲಿ ಈ ಕಾರ್ಯ ಪೂರ್ಣಗೊಳಿಸಿರಬೇಕು. ಕಂದಾಯ ಗ್ರಾಮ ಮತ್ತು ಉಪ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಮನೆಯ ಇ– ಖಾತೆ ನೀಡಬೇಕು. ಬಡ ಜನರಿಗೆ ನಿವೇಶಗಳನ್ನು ವಿತರಿಸಲು ನಿರ್ಧರಿಸಿದ್ದು, ಸರ್ಕಾರಿ ಜಮೀನು ಗುರುತಿಸಬೇಕು’ ಎಂದು ಕಂದಾಯ ಅಧಿಕಾರಿಗಳಿಗೆ ತಿಳಿಸಿದರು.

ಉಪ ವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್‌ ಚೇತನಾ ಯಾದವ್‌, ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌.ಪಿ. ಮಹೇಶ್ ಮಾತನಾಡಿದರು. ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಎ.ಬಿ. ವೇಣು, ಎಇಇಗಳಾದ ರಾಮಕೃಷ್ಣೇಗೌಡ, ಜಸ್ವಂತ್‌, ಸಿಪಿಐ ಬಿ.ಜಿ. ಕುಮಾರ್‌, ಸಿಡಿಪಿಒ ಸಕಲೇಶ್ವರ್ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

Cut-off box - ಅಂಬೇಡ್ಕರ್‌ ಭವನಕ್ಕೆ ಆ.3ರಂದು ಶಂಕುಸ್ಥಾಪನೆ ‘ಪಟ್ಟಣದಲ್ಲಿರುವ ಅಂಬೇಡ್ಕರ್‌ ಭವನ ಸ್ಥಳದಲ್ಲಿ ನೂತನ ಭವನ ನಿರ್ಮಾಣಕ್ಕೆ ಆ.3ರಂದು ಶಂಕು ಸ್ಥಾಪನೆ ಕಾರ್ಯಕ್ರಮ ನಡೆಯಲಿದ್ದು ಗೃಹ ಸಚಿವ ಜಿ.ಪರಮೇಶ್ವರ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚಲುವರಾಯಸ್ವಾಮಿ ಹಾಗೂ ಶಾಸಕರು ಪಾಲ್ಗೊಳ್ಳಲಿದ್ದಾರೆ. ಅಧಿಕಾರಿಗಳು ಈ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.