ಮಂಡ್ಯ: ಇಂದಿರಾ ಕ್ಯಾಂಟೀನ್‌ಗೆ ಆಹಾರ ಸೇವಿಸಲು ಬರುವ ಬಹಳಷ್ಟು ಜನರು ಬಡ ವರ್ಗದವರಾಗಿದ್ದು, ಅವರಿಗೆ ಶುಚಿ ಹಾಗೂ ರುಚಿಯಾದ ಆಹಾರ ಒದಗಿಸಿ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಇಂದಿರಾ ಕ್ಯಾಂಟೀನ್‌ಗಳಲ್ಲಿ ನೀಡಲಾಗುವ ಆಹಾರ ಗುಣಮಟ್ಟ ಹಾಗೂ ಪ್ರಮಾಣವು ಕಡಿಮೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದರು.
ಪರ್ಯಾಯ ಸ್ಥಳ ಗುರುತಿಸಿ:
ನಗರದಲ್ಲಿ ಬೀದಿ ಬದಿಯ ವ್ಯಾಪಾರಿಗಳು ಎಲ್ಲೆಂದರಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಬೀದಿ ಬದಿಯ ವ್ಯಾಪಾರಿಗಳು ವ್ಯಾಪಾರ ಮಾಡಲು ಪರ್ಯಾಯ ಸ್ಥಳ ಗುರುತಿಸಿ ಎಂದರು.
ಜಿಲ್ಲೆಯಲ್ಲಿ ಬೀದಿ ಬದಿಯ ವ್ಯಾಪಾರಿಗಳಿಗೆ ಸರ್ಕಾರ ರೂಪಿಸಿರುವ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ. ನಗರ ಸ್ಥಳೀಯ ಸಂಸ್ಥೆಗಳು ವ್ಯಾಪಾರಸ್ಥರಿಗೆ ಸ್ವಚ್ಛತೆಗೆ ಆದ್ಯತೆ ನೀಡುವಂತೆ ತಿಳಿಸಬೇಕು ಎಂದು ತಾಕೀತು ಮಾಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ಹಾಗೂ ಬಾಕಿ ಇರುವ ನೀರಿನ ತೆರಿಗೆ ಶುಲ್ಕವನ್ನು ವಸೂಲಾತಿ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
‘ಕುಡಿಯುವ ನೀರಿನ ಗುಣಮಟ್ಟವನ್ನು ನಿಗದಿತ ಅವಧಿಯೊಳಗೆ ಪರಿಶೀಲನೆ ನಡೆಸಿ. ಕಳೆದ ನಾಲ್ಕು ತಿಂಗಳು ನೀರಿನ ಗುಣಮಟ್ಟವನ್ನು ತಾಳೆ ಮಾಡಿ ನೋಡಿ ಕುಡಿಯುವ ನೀರಿನ ಗುಣಮಟ್ಟವನ್ನು ಹೆಚ್ಚಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಿ’ ಎಂದು ತಿಳಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶಾಧಿಕಾರಿ ಟಿ.ಎನ್. ನರಸಿಂಹಮೂರ್ತಿ, ನಗರಾಭಿವೃದ್ಧಿ ಕೋಶದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರತಾಪ್, ನಗರಸಭೆ ಪೌರಾಯುಕ್ತೆ ಪಂಪಾಶ್ರೀ ಇದ್ದರು.
ಅಮೃತ 2.0 ಯೋಜನೆ: ಕುಡಿಯುವ ನೀರು ಕಾಮಗಾರಿ
ವಿವರ ಸ್ಥಳ; ಅನುದಾನ
ಪಾಂಡವಪುರ;₹23.22 ಕೋಟಿ
ಕೆ.ಆರ್.ಪೇಟೆ;₹36.61 ಕೋಟಿ
ನಾಗಮಂಗಲ;₹36.07 ಕೋಟಿ
ಬೆಳ್ಳೂರು;₹31.06 ಕೋಟಿ
ಶ್ರೀರಂಗಪಟ್ಟಣ;₹23.44 ಕೋಟಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.