ಪಾಂಡವಪುರ: ಮುಂಬರುವ ಎಂಡಿಸಿಸಿ ಬ್ಯಾಂಕ್ ಮತ್ತು ಟಿಎಪಿಸಿಎಂಎಸ್ ಚುನಾವಣೆಗಳಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಕಾರ್ಯಕರ್ತರಿಗೆ ಕರೆ ನೀಡಿದರು.
ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಗುರುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಶೇ95ರಷ್ಟು ಹಿಂದೂಗಳೇ ಇರುವ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ದೊಡ್ಡ ಅಪರಾಧ ನಡೆದಿದೆ. ಕಳೆದ ವರ್ಷವೂ ನಾಗಮಂಗಲದಲ್ಲಿ ಗಣಪತಿಯನ್ನು ಬಸ್ಸಿನಲ್ಲಿ ತೆಗೆದುಕೊಂಡು ಹೋಗಿ ವಿಸರ್ಜನೆ ಮಾಡುವ ಪರಿಸ್ಥಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರು ನಿರ್ಮಾಣ ಮಾಡಿದರು. ಚನ್ನಪಟ್ಟಣದಿಂದ ಬಂದ ಕಿಡಿಗೇಡಿಗಳು ಗಣಪತಿಗೆ ಕಲ್ಲು ಎಸೆದು ಜಿಲ್ಲೆಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಇದನ್ನು ಮುಸ್ಲಿಂ ನಾಯಕರೇ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್‌ನವರು ಜಿಲ್ಲೆಯನ್ನು ಹೀನಾಯ ಸ್ಥಿತಿಗೆ ತಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಕಳಂಕ ರಹಿತನಾಗಿದ್ದೇನೆ: ಮಂಡ್ಯ ಮುಡಾ ಸೈಟ್ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಿ ಜೈಲಿಗೆ ತಳ್ಳುವ ಹುನ್ನಾರ ನಡೆದಿತ್ತು. ಮುಡಾ ಹಂಚಿಕೆ ಮಾಡಿದ್ದ ನಿವೇಶನಗಳು ಮನೆ ಕಟ್ಟಲು ಯೋಗ್ಯವಿಲ್ಲ ಎಂದು ಕೆಲವರು ಸೈಟುಗಳನ್ನು ವಾಪಸ್ ಮಾಡಿದರು ಹೀಗಾಗಿ ಮುಡಾದ ಅಧಿಕಾರಿಗಳು ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಸೈಟ್ ಮಾರಾಟ ಮಾಡಿ ಬ್ಯಾಂಕ್ ಸಾಲ ತೀರಿಸುವ ವಿಚಾರ ಮಂಡಿಸಿದ್ದರು. ಅದನ್ನು ಸಮ್ಮಿತಿಸದ ನಾನು ನಿವೇಶನ ಪಡೆಯಲು ಮತ್ತೊಮ್ಮೆ ಅರ್ಜಿ ಆಹ್ವಾನಿಸುವಂತೆ ಸಲಹೆ ನೀಡಿದೆ. ಈ ಪ್ರಕರಣದಲ್ಲಿ ನನ್ನ ವಿರುದ್ಧ ಸಂಚು ಮಾಡಿ ಸಿಲುಕಿಸುವ ಸಲುವಾಗಿ ಪ್ರಕರಣವನ್ನು ಸಿಬಿಐಗೆ ವಹಿಸಿದ್ದರು ಎಂದು ತಿಳಿಸಿದರು.
ನಿಖಿಲ್ ಕುಮಾರಸ್ವಾಮಿ ಅವರು 80 ವಿಧಾನ ಸಭಾ ಕ್ಷೇತ್ರಗಳಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಪಾಂಡವಪುರದಲ್ಲಿ ಆಯೋಜಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಜ್ಯೋತಿಲಕ್ಷ್ಮಿ ಬಾಬು, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಎಸ್.ಎ.ಮಲ್ಲೇಶ್, ಜಿ.ಪಂ.ಮಾಜಿ ಸದಸ್ಯ ಎಚ್.ಮಂಜುನಾಥ್, ಮುಖಂಡರಾದ ಪಿ.ಎಸ್.ಲಿಂಗರಾಜು, ಆರ್.ಸೋಮಶೇಖರ್, ಎಂ.ಗಿರೀಶ್, ಎಚ್.ನಂಜೇಗೌಡ, ಮಾದೇಗೌಡ, ಸುಶೀಲಮ್ಮ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.