ಮಂಡ್ಯ: ‘ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ವಿಧಾನಸೌಧ ಚಲೋ ಪ್ರತಿಭಟನೆಯನ್ನು ಮಾ.21ರಂದು ನಡೆಸಲಿದ್ದು ಎಲ್ಲರೂ ಪಕ್ಷಾತೀತವಾಗಿ ಭಾಗವಹಿಸಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣಕುಮಾರ್ ಶೆಟ್ಟಿ ಮನವಿ ಮಾಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಕರವೇ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಮೇಕೆದಾಟು ಯೋಜನೆ ರೂಪಿಸುತ್ತೇವೆಂದು ಕಾಂಗ್ರೆಸ್ ಜನರಿಗೆ ಆಶ್ವಾಸನೆ ನೀಡಿತ್ತು. ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆ ಮಾಡಿ ಅಧಿಕಾರಕ್ಕೆ ಬಂದಿರುವುದನ್ನು ಕಾಂಗ್ರೆಸ್ ನಾಯಕರು ಮರೆತಿದ್ದಾರೆ. ಎರಡು ಬಜೆಟ್ ಮಂಡನೆಯಾಗಿದ್ದರೂ ಯೋಜನೆಗೆ ಹಣ ಬಿಡುಗಡೆ ಮಾಡಿಲ್ಲ’ ಎಂದು ಆಕ್ರೋಶ ವ್ಯಕ್ರಪಡಿಸಿದರು.
‘ಕನ್ನಡಿಗರು-ಕನ್ನಡಪರ ಸಂಘಟನೆಗಳ ಮುಖ್ಯಸ್ಥರು ವಿಧಾನಸೌಧ ಚಲೋ ಆಂದೋಲನದಲ್ಲಿ ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತೇವೆ. ಮೇಕೆದಾಟು ಯೋಜನೆಗೆ ಆಗ್ರಹಿಸುವ ಮೂಲಕ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರೊಂದಿಗೆ ಒಳ ಒಪ್ಪಂದ ಮಾಡಿಕೊಂಡಿರುವ ಬಗ್ಗೆ ಅನುಮಾನವನ್ನು ಎತ್ತಿ ಹಿಡಿಯುವ ಕಾರ್ಯಕ್ರಮವು ಇದಾಗಿದೆ ಎಂಬುದನ್ನು ಸರ್ಕಾರಕ್ಕೆ ತಿಳಿಸುತ್ತೇವೆ’ ಎಂದರು.
‘ಡಾ.ಸರೋಜಿನಿ ಮಹಿಷಿ ವರದಿಯನ್ನು ಜಾರಿ ಮಾಡದೆ ಕನ್ನಡಿಗರಿಗೆ ಅನ್ಯಾಯ ಮಾಡಲಾಗಿದೆ. ರಾಜ್ಯ ಸರ್ಕಾರ ಕನ್ನಡಿಗರ ವಿರೋಧಿ ನೀತಿ ಅನುಸರಿತ್ತಿದೆ. ಇನ್ನಾದರೂ ರಾಜ್ಯ ಸರ್ಕಾರ ನಮ್ಮ ಬೇಡಿಕೆ ಈಡೇರಿಸಬೇಕು’ ಎಂದು ಆಗ್ರಹಿಸಿದರು.
ಸಭೆಯಲ್ಲಿ ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಡಿ. ಅಶೋಕ್ ಮಾತನಾಡಿದರು. ವಿವಿಧ ಸಂಘಟನೆಯ ಮುಖಂಡರಾದ ಹೆಮ್ಮಿಗೆ ಚಂದ್ರಶೇಖರ್, ಉಮೇಶ್‌ಗೌಡ, ಕಾರ್ತಿಕ್, ರಾಜೇಶ್, ಮೋಹನ್, ಯೋಗೇಶ್, ಮಹದೇವು, ಸ್ವಾಮಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.