ADVERTISEMENT

ಕೆ.ಆರ್‌.ಪೇಟೆಯಿಂದ ಬಿಎಸ್‌ವೈ ಪುತ್ರನ ಸ್ಪರ್ಧೆ ಇಲ್ಲ: ಡಿಸಿಎಂ ಅಶ್ವತ್ಥ್ ನಾರಾಯಣ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2019, 13:58 IST
Last Updated 1 ಡಿಸೆಂಬರ್ 2019, 13:58 IST
   

ಮಂಡ್ಯ: ‘ಕೆ.ಆರ್‌.ಪೇಟೆ ವಿಧಾನಸಭಾ ಉಪ ಚುನಾಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ಬುಧವಾರ ಸ್ಪಷ್ಟಪಡಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್‌ ಆದೇಶ ನೋಡಿಕೊಂಡು ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು. ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ 15 ಕ್ಷೇತ್ರಗಳ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ. ಕೆ.ಆರ್‌.ಪೇಟೆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಪುತ್ರ ಸ್ಪರ್ಧಿಸುವ ಕುರಿತು ಯಾವುದೇ ಪ್ರಸ್ತಾಪವಾಗಿಲ್ಲ’ ಎಂದು ಹೇಳಿದರು.

ಸುಮಲತಾ ಬೆಂಬಲ ವಿಶ್ವಾಸ: ‘ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡಿತ್ತು. ಈಗ ಕೆ.ಆರ್‌.ಪೇಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸವಿದೆ’ ಎಂದರು.

ADVERTISEMENT

ಕಾರ್ಯಕರ್ತರ ಒತ್ತಾಯ: ಬಿ.ವೈ.ವಿಜಯೇಂದ್ರ ಅವರೇ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದು ಕೆ.ಆರ್‌.ಪೇಟೆ ಕ್ಷೇತ್ರದ ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ.

‘ವಿಜಯೇಂದ್ರ ಅವರು ನಮ್ಮ ತಾಲ್ಲೂಕಿನ ಮಗ. ಅವರ ಸ್ಪರ್ಧೆಯನ್ನು ಇಲ್ಲಿನ ಜನರು ಬಯಸಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾರೆ, ಅವರ ಮಗ ಶಾಸಕರಾದರೆ ಹೆಚ್ಚು ಅನುದಾನ ತರುತ್ತಾರೆ. ಅವರನ್ನು ಹೆಚ್ಚು ಬಹುಮತದಿಂದ ಗೆಲ್ಲಿಸುತ್ತೇವೆ’ ಎಂದು ಕೆ.ಆರ್‌.ಪೇಟೆಯ ಬಿಜೆಪಿ ಮುಖಂಡ ಬೂಕಳ್ಳಿ ಮಂಜು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.